ದೇಶ

ದೆಹಲಿ ಚಲೋ: ಪ್ರತಿಭಟನಾನಿರತ ರೈತರಿಗೆ ಕೋವಿಡ್ ಟೆಸ್ಟ್ ಮಾಡುವಂತೆ ಕೇಂದ್ರಕ್ಕೆ ವೈದ್ಯರ ಒತ್ತಾಯ

Lingaraj Badiger

ನವದೆಹಲಿ: ಕೇಂದ್ರ ಸರ್ಕಾರದ ಕೃಷಿ ಸುಧಾರಣಾ ತಿದ್ದುಪಡಿ ಕಾಯಿದೆ ವಿರೋಧಿಸಿ ಸಿಂಘು ಹಾಗೂ ಟಿಕ್ರಿ ಗಡಿಯಲ್ಲಿ ಪ್ರತಿಭಟನೆ ಮುಂದುವರಿಸಿರುವ ರೈತರಿಗೆ ಕೋವಿಡ್ ಪರೀಕ್ಷೆ ನಡೆಸುವಂತೆ ವೈದ್ಯರು ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.

ದೆಹಲಿ-ಹರಿಯಾಣ ಗಡಿ ಪ್ರದೇಶ ಸಿಂಘುವಿನಲ್ಲಿ ವೈದ್ಯಕೀಯ ತಪಾಸಣಾ ಶಿಬಿರವನ್ನು ಸ್ಥಾಪಿಸಲಾಗಿದ್ದು, ಪ್ರತಿಭಟನಾ ನಿರತ ಎಲ್ಲಾ ರೈತರನ್ನು ಕೋವಿಡ್-19 ಪರೀಕ್ಷೆಗೆ ಒಳಪಡಿಸಬೇಕು ಎಂದು ವೈದ್ಯರು ಆಗ್ರಹಿಸಿದ್ದಾರೆ.

ರೈತರು ಕೊರೋನಾ ಮಾರ್ಗಸೂಚಿಗಳನ್ನು ಪಾಲಿಸುತ್ತಿಲ್ಲ. ಹೀಗಾಗಿ ನಾವು ಅವರನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲೇಬೇಕು. ಒಂದು ಕರೋನಾ ಪರೀಕ್ಷೆ ನಡೆಸದಿದ್ದರೆ ರೈತರು ಸೂಪರ್ ಸ್ಪ್ರೆಡರ್ ಆಗುವ ಸಾಧ್ಯತೆ ಇದೆ. ಕೊರೋನಾ ರೈತರಿಂದ ಇತರರಿಗೂ ಹರಡಬಹುದು, ಅದು ಹಾನಿಕಾರಕ ಎಂದು ಡಾ. ಕರಣ್ ಅವರು ಹೇಳಿದ್ದಾರೆ.

ನಾವು ರೈತರಿಗೆ ಉಚಿತವಾಗಿ ಔಷಧಿ, ಮಾಸ್ಕ್ ಹಾಗೂ ಇತರೆ ವೈದ್ಯಕೀಯ ಸೌಲಭ್ಯಗಳನ್ನು ನೀಡುತ್ತಿದ್ದೇವೆ. ಬಹಳಷ್ಟು ರೈತರು ಗಾಯಗೊಂಡಿದ್ದಾರೆ. ಅವರಿಗೆ ಡ್ರೆಸ್ಸಿಂಗ್ ಮಾಡಿ, ಔಷಧಿ ಕೊಟ್ಟಿದ್ದೇವೆ. ಸುರಕ್ಷತಾ ಮಾರ್ಗಸೂಚಿಗಳನ್ನು ಪಾಲಿಸುವಂತೆ ನಾವು ರೈತರಿಗೆ ಹೇಳುತ್ತಿದ್ದೇವೆ. ಆದರೂ ಅವರು ಮಾಸ್ಕ್ ಧರಿಸದೆ ತಿರುಗಾಡುತ್ತಿದ್ದಾರೆ ಎಂದು ಡಾ. ಸಾರಿಕಾ ವರ್ಮಾ ಅವರು ಹೇಳಿದ್ದಾರೆ.

ಸಾಂಕ್ರಾಮಿಕ ರೋಗದ ಹಿನ್ನೆಲೆಯಲ್ಲಿ ವೈದ್ಯರು ಪ್ರತಿಭಟನಾಕಾರರಿಗೆ ಸುರಕ್ಷತಾ ಮಾರ್ಗಸೂಚಿಗಳ ಬಗ್ಗೆ ಅರಿವು ಮೂಡಿಸುತ್ತಿದ್ದರೂ, ಅವರಲ್ಲಿ ಹೆಚ್ಚಿನವರು ಮಾಸ್ಕ್ ಧರಿಸದೆ ತಿರುಗಾಡುತ್ತಿದ್ದಾರೆ ಮತ್ತು ರೈತರ ಸಾಮಾಜಿಕ ಅಂತರ ಕಾಯ್ದುಕೊಳ್ಳುತ್ತಿಲ್ಲ. ಹೀಗಾಗಿ ಕೇಂದ್ರ ಸರ್ಕಾರ ಎಲ್ಲಾ ಪ್ರತಿಭಟನಾ ನಿರತ ರೈತರನ್ನು ಕೋವಿಡ್-19 ಪರೀಕ್ಷೆಗೆ ಒಳಪಡಿಸಬೇಕು ಎಂದು ವೈದ್ಯರು ಆಗ್ರಿಸಿದ್ದಾರೆ.

ಈ ಮಧ್ಯೆ, ಕೇಂದ್ರ ಸರ್ಕಾರ ಜಾರಿಗೆ ತಂದಿರು ರೈತ ವಿರೋಧಿ ಕೃಷಿ ಮಸೂದೆ ಹಿಂಪಡೆಯುವಂತೆ ಒತ್ತಾಯಿಸಿ ದೆಹಲಿ ಚಲೋ ಹೆಸರಿನಲ್ಲಿ ನಡೆಯುತ್ತಿರುವ ರೈತರ ಬೃಹತ್ ಪ್ರತಿಭಟನೆ ಸೋಮವಾರ 5ನೇ ದಿನಕ್ಕೆ ಕಾಲಿಟ್ಟಿದೆ. 

ರಾಷ್ಟ್ರ ರಾಜಧಾನಿಯಲ್ಲಿ ಸಾವಿರಾರು ರೈತರು ಪ್ರತಿಭಟನೆ ನಡೆಸುತ್ತಿದ್ದು, ರಾಷ್ಟ್ರ ರಾಜಧಾನಿ ಪ್ರವೇಶದ ಐದು ಪ್ರವೇಶದ್ವಾರಗಳನ್ನು ಬಂದ್ ಮಾಡುವುದಾಗಿ ಪ್ರತಿಭಟನಾ ನಿರತ ರೈತರು ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ. 

SCROLL FOR NEXT