ನವದೆಹಲಿ: ದೇಶದಲ್ಲಿ ಬುಧವಾರ 72,049 ಕೊರೋನಾ ವೈರಸ್ ಪ್ರಕರಣಗಳು ದಾಖಲಾಗಿದ್ದು, ಸೋಂಕಿತರ ಸಂಖ್ಯೆ 67 ಲಕ್ಷ ಗಡಿದಾಟಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.
ದೇಶದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 67,57,132ಕ್ಕೆ ಏರಿಕೆಯಾಗಿದ್ದು, ಒಂದೇ ದಿನ 986 ಮಂದಿ ಸಾವನ್ನಪ್ಪುವುದರೊಂದಿಗೆ ಸಾವಿನ ಸಂಖ್ಯೆ 1,04,555ಕ್ಕೆ ತಲುಪಿದೆ.
ಇನ್ನು 67,57,132 ಮಂದಿ ಸೋಂಕಿತರ ಪೈಕಿ ದೇಶದಲ್ಲಿ ಈ ವರೆಗೂ 57,44,694 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, ಇನ್ನು 9,07,883 ಸಕ್ರಿಯ ಪ್ರಕರಣಗಳು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆಂದು ತಿಳಿದುಬಂದಿದೆ.
ದೇಶಾದ್ಯಂತ 24 ಗಂಟೆಗಳಲ್ಲಿ 11,99,857 ಕೋವಿಡ್ ಪರೀಕ್ಷೆ, ಒಟ್ಟಾರೆ 8.22 ಕೋಟಿ ಸ್ಯಾಂಪಲ್ ಪರೀಕ್ಷೆ ನಡೆಸಲಾಗಿದೆ: ಐಸಿಎಂಆರ್
ಮಾರಕ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ ದೇಶದಲ್ಲಿ ಗಣನೀಯವಾಗಿ ಏರಿಕೆಯಾಗುತ್ತಿರುವಂತೆಯೇ ಇತ್ತ ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆ 24 ಗಂಟೆಗಳಲ್ಲಿ ದೇಶಾದ್ಯಂತ 11,99,857 ಕೋವಿಡ್-19 ಪರೀಕ್ಷೆಗಳನ್ನು ನಡೆಸಲಾಗಿದೆ ಎಂದು ಮಾಹಿತಿ ನೀಡಿದೆ.
ಈ ಬಗ್ಗೆ ಐಸಿಎಂಆರ್ ಮಾಹಿತಿ ನೀಡಿದ್ದು, ಕಳೆದ 24 ಗಂಟೆಗಳಲ್ಲಿ ದೇಶಾದ್ಯಂತ 11,99,857 ಕೋವಿಡ್-19 ಪರೀಕ್ಷೆಗಳನ್ನು ನಡೆಸಲಾಗಿದ್ದು, ಆ ಮೂಲಕ ದೇಶದಲ್ಲಿ ಈ ವರೆಗೂ ಅಂದರೆ ಅ.6ರವರೆಗೂ 8,22,71,654 ಕೋವಿಡ್-19 ಪರೀಕ್ಷೆಗಳನ್ನು ನಡೆಸಲಾಗಿದೆ ಎಂದು ಮಾಹಿತಿ ನೀಡಿದೆ.