ದೇಶ

ಜಮ್ಮು ಮತ್ತು ಕಾಶ್ಮೀರ ಪಂಚಾಯತಿ ರಾಜ್ ಕಾಯ್ದೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ

Lingaraj Badiger

ನವದೆಹಲಿ: ಜಮ್ಮು ಮತ್ತು ಕಾಶ್ಮೀರ ಪಂಚಾಯತಿ ರಾಜ್ ಕಾಯ್ದೆ 1989 ಅನ್ನು ಜಾರಿಗೊಳಿಸಲು ಕೇಂದ್ರ ಸಚಿವ ಸಂಪುಟ ಬುಧವಾರ ಅನುಮೋದನೆ ನೀಡಿದೆ ಎಂದು ಸರ್ಕಾರದ ವಕ್ತಾರರು ತಿಳಿಸಿದ್ದಾರೆ.

ಇಂದು ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯ ನಂತರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್, ಸರ್ಕಾರದ ಈ ಕ್ರಮವು ದೇಶದ ಇತರ ಭಾಗಗಳಂತೆ ಜಮ್ಮು ಮತ್ತು ಕಾಶ್ಮೀರದಲ್ಲಿ ಮೂರು ಹಂತದ ತಳಮಟ್ಟದ ಪ್ರಜಾಪ್ರಭುತ್ವವನ್ನು ಸ್ಥಾಪಿಸಲು ಸಹಾಯ ಮಾಡುತ್ತದೆ ಎಂದು ಹೇಳಿದರು.

"370 ವಿಧಿ ರದ್ದುಗೊಳಿಸುವ ಮುನ್ನ ಕಣಿವೆ ರಾಜ್ಯದಲ್ಲಿ ಮೂರು ಹಂತದ ಪಂಚಾಯತ್ ರಾಜ್ ವ್ಯವಸ್ಥೆ ಇರಲಿಲ್ಲ. ಈಗ ಅಲ್ಲಿ ಪಂಚಾಯತ್ ರಾಜ್ ಕಾಯ್ದೆ ಜಾರಿಗೆ ಬರಲಿದೆ ಎಂದು ಜಾವಡೇಕರ್ ತಿಳಿಸಿದ್ದಾರೆ.

ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಸಂಸತ್ತಿನಲ್ಲಿ ಗೃಹ ಸಚಿವ ಅಮಿತ್ ಶಾ ಅವರು ನೀಡಿದ ಭರವಸೆಯಂತೆ ಈಗ ಪಂಚಾಯತ್ ರಾಜ್ ಕಾಯ್ದೆ ಜಾರಿಗೆ ಬರುತ್ತಿದೆ ಎಂದು ಅವರು ಹೇಳಿದರು.

ಇದು ಜಮ್ಮು ಮತ್ತು ಕಾಶ್ಮೀರದ ಜನರು ಗ್ರಾಮ, ಬ್ಲಾಕ್ ಮತ್ತು ಜಿಲ್ಲಾ ಮಟ್ಟದಲ್ಲಿ ತಮ್ಮ ಪ್ರತಿನಿಧಿಗಳನ್ನು ಆಯ್ಕೆ ಮಾಡಲು ಸಹಾಯ ಮಾಡುತ್ತದೆ ಎಂದು ಸಚಿವರು ತಿಳಿಸಿದರು.

SCROLL FOR NEXT