ದೇಶ

ಮೈಸೂರು ಗ್ಯಾಂಗ್ ರೇಪ್ ಪ್ರಕರಣ ಕುರಿತು ರಾಜ್ಯ ಪೊಲೀಸ್ ಇಲಾಖೆಗೆ ರಾಷ್ಟ್ರೀಯ ಮಹಿಳಾ ಆಯೋಗ ಪತ್ರ

Sumana Upadhyaya

ನವದೆಹಲಿ: ಮೈಸೂರಿನಲ್ಲಿ ಕಾಲೇಜು ವಿದ್ಯಾರ್ಥಿನಿ ಮೇಲೆ ಗ್ಯಾಂಗ್ ರೇಪ್ ಪ್ರಕರಣ ರಾಷ್ಟ್ರಮಟ್ಟದಲ್ಲಿ ಗಮನ ಸೆಳೆದಿದೆ. ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ರಾಷ್ಟ್ರೀಯ ಮಹಿಳಾ ಆಯೋಗ ಕರ್ನಾಟಕ ಪೊಲೀಸರಿಗೆ ಪತ್ರ ಬರೆದು ಆರೋಪಿಗಳನ್ನು ಶೀಘ್ರ ಪತ್ತೆಹಚ್ಚಿ ಬಂಧಿಸುವಂತೆ ಆದೇಶಿಸಿದೆ.

ರಾಷ್ಟ್ರೀಯ ಮಹಿಳಾ ಆಯೋಗವು ಮಾಧ್ಯಮಗಳಲ್ಲಿ ಬಂದ ವರದಿಯನ್ನು ನೋಡಿ ಕರ್ನಾಟಕ ಪೊಲೀಸರಿಗೆ ಸೂಚನೆ ನೀಡಿದೆ. ಕಾಲೇಜಿಗೆ ಹೋಗುವ ಯುವತಿ ತನ್ನ ಗೆಳೆಯನೊಂದಿಗೆ ಮೈಸೂರಿನ ಚಾಮುಂಡಿ ಬೆಟ್ಟದ ತಪ್ಪಲಿನ ನಿರ್ಜನ ಪ್ರದೇಶಕ್ಕೆ ಹೋಗಿದ್ದ ಸಂದರ್ಭದಲ್ಲಿ ಪಾನಮತ್ತರಾಗಿದ್ದ ಕಾಮಪೀಡಿತ ದುಷ್ಕರ್ಮಿಗಳು ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ. ವರದಿಗಳ ಪ್ರಕಾರ, ಎಫ್‌ಐಆರ್ ಮಾತ್ರ ದಾಖಲಿಸಲಾಗಿದೆ ಮತ್ತು ಈ ಪ್ರಕರಣದಲ್ಲಿ ಇನ್ನೂ ಯಾವುದೇ ಆರೋಪಿಯನ್ನು ಬಂಧಿಸಲಾಗಿಲ್ಲ, ಆದಷ್ಟು ಶೀಘ್ರವೇ ಆರೋಪಿಗಳನ್ನು ಬಂಧಿಸುವತ್ತ ಕಾರ್ಯೋನ್ಮುಖವಾಗಬೇಕೆಂದು ಒತ್ತಾಯಿಸಿದೆ.

ಈ ಸಂಬಂಧ ರಾಷ್ಟ್ರೀಯ ಮಹಿಳಾ ಆಯೋಗ ಅಧ್ಯಕ್ಷೆ ರೇಖಾ ಶರ್ಮ ರಾಜ್ಯ ಪೊಲೀಸ್ ಮಹಾ ನಿರ್ದೇಶಕರಿಗೆ ಪತ್ರ ಬರೆದಿದ್ದು ಎಲ್ಲಾ ಆರೋಪಿಗಳನ್ನು ಗುರುತಿಸಿ ಕೂಡಲೇ ಬಂಧಿಸಿ ಸಂಬಂಧಪಟ್ಟ ಕಾನೂನಿನಡಿಯಲ್ಲಿ ಶಿಕ್ಷೆ ನೀಡುವಂತೆ ಒತ್ತಾಯಿಸಿದ್ದಾರೆ.

ರಾಷ್ಟ್ರೀಯ ಮಹಿಳಾ ಆಯೋಗ ಅಧ್ಯಕ್ಷೆ ಈಗಾಗಲೇ ರಾಜ್ಯ ಮಹಿಳಾ ಆಯೋಗ ಅಧ್ಯಕ್ಷೆ ಜೊತೆ ಮಾತುಕತೆ ನಡೆಸಿದ್ದು ಸಂತ್ರಸ್ತೆಯನ್ನು ಕರೆದು ಆಕೆಗೆ ಮಾನಸಿಕ ಸ್ಥೈರ್ಯ ತುಂಬುವ ಕೆಲಸ ಮಾಡಲಿದ್ದೇವೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ.

ದೆಹಲಿ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿ ಇದೊಂದು ದುರದೃಷ್ಟಕರ ಘಟನೆ, ಪ್ರಕರಣವನ್ನು ಸರ್ಕಾರ ಗಂಭೀರವಾಗಿ ತೆಗೆದುಕೊಂಡಿದ್ದು ತಪ್ಪಿತಸ್ಥರನ್ನು ಕೂಡಲೇ ಬಂಧಿಸಿ ಯುವತಿಗೆ ನ್ಯಾಯ ಒದಗಿಸಲಾಗುವುದು ಎಂದು ಹೇಳಿದ್ದಾರೆ.

ಸುದ್ದಿ ಸಂಸ್ಥೆಯೊಂದಿಗೆ ಮಾತನಾಡಿದ ಅವರು, ಸಾಮೂಹಿಕ ಅತ್ಯಾಚಾರಕ್ಕೀಡಾಗಿರುವ ಯುವತಿ ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ. ಆಕೆಯ ಜೊತೆಗಿದ್ದ ಗೆಳೆಯನಿಗೂ ದುಷ್ಕರ್ಮಿಗಳು ಹೊಡೆದು ಗಾಯ ಮಾಡಿದ್ದಾರೆ. ಇದೊಂದು ದುರದೃಷ್ಟಕರ ಘಟನೆ. ತಪ್ಪಿತಸ್ಥರನ್ನು ಕೂಡಲೇ ಬಂಧಿಸುತ್ತೇವೆ ಎಂದು ಭರವಸೆ ನೀಡಿದ್ದಾರೆ.

SCROLL FOR NEXT