ದೇಶ

ತಮಿಳು ನಾಡು: ರಕ್ಷಣಾ ಪಡೆಗಳ ಮುಖ್ಯಸ್ಥ ಬಿಪಿನ್ ರಾವತ್ ಸೇರಿದಂತೆ ಹಿರಿಯ ಅಧಿಕಾರಿಗಳು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಪತನ

Sumana Upadhyaya

ಚೆನ್ನೈ: ಸೇನೆಯ ಹಿರಿಯ ಅಧಿಕಾರಿಗಳನ್ನು ಹೊತ್ತೊಯ್ಯುತ್ತಿದ್ದ ಸೇನಾ ಹೆಲಿಕಾಪ್ಟರ್ ಎಂಐ-17ವಿ5(Mi-17V5 helicopter) ತಮಿಳು ನಾಡಿನ ನೀಲಗಿರಿ ಜಿಲ್ಲೆಯ ಕೂನೂರು ಹತ್ತಿರ ಅಪಘಾತಕ್ಕೀಡಾಗಿದೆ ಎಂದು ತಿಳಿದುಬಂದಿದೆ.

ಸೂಲೂರಿನ ಭಾರತೀಯ ವಾಯುಪಡೆ ನೆಲೆಯಿಂದ ಸೇನಾ ವಿಮಾನ ವೆಲ್ಲಿಂಗ್ಟನ್ ನ ರಕ್ಷಣಾ ಸೇವಾ ಕಾಲೇಜು(DSC) ಕಡೆಗೆ ಹೊರಟಿತ್ತು. 

ದಟ್ಟ ಮಂಜು ಕವಿದ ವಾತಾವರಣ ನಡುವೆ ನಂಜಪ್ಪಂಚತಿರಂ ಪ್ರದೇಶದಲ್ಲಿ ಈ ದುರ್ಘಟನೆ ಸಂಭವಿಸಿದ್ದು, ಅಪಘಾತಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ. ಸಂಭವನೀಯ ಸಾವು ನೋವುಗಳು ಅಥವಾ ಗಾಯಗಳ ಬಗ್ಗೆ ತಕ್ಷಣದ ಮಾಹಿತಿ ಇಲ್ಲ.

ಹೆಲಿಕಾಪ್ಟರ್ ನಲ್ಲಿ 14 ಮಂದಿ ಪ್ರಯಾಣಿಸುತ್ತಿದ್ದರು ಎಂದು ತಿಳಿದುಬಂದಿದೆ. ಅವರಲ್ಲಿ ಜನರಲ್ ಬಿಪಿನ್ ರಾವತ್ ಮತ್ತು ಅವರ ಪತ್ನಿ ಮಧುಲಿಕಾ ರಾವತ್, ಬ್ರಿಗೇಡಿಯರ್ ಎಲ್ಎಸ್ ಲಿಡರ್, ಲೆಫ್ಟಿನೆಂಟ್ ಕರ್ನಲ್ ಹರ್ಜಿಂದರ್ ಸಿಂಗ್, ನಾಯಕ್ ಗುರ್ಸೇವಕ್ ಸಿಂಗ್, ನಾಯಕ್ ಜಿತೇಂದ್ರ ಕುಮಾರ್, ಲ್ಯಾನ್ಸ್ ನಾಯಕ್ ವಿವೇಕ್ ಕುಮಾರ್, ಲ್ಯಾನ್ಸ್ ನಾಯಕ್ ಬಿ ಸಾಯಿ ತೇಜಾ ಮತ್ತು ಹವಾಲ್ದಾರ್ ಸತ್ಪಾಲ್ ಸೇರಿದ್ದಾರೆ ಎಂದು ಮೂಲಗಳು ತಿಳಿಸಿವೆ.

ತನಿಖೆಗೆ ಆದೇಶ: ತಮಿಳು ನಾಡಿನ ಕೂನೂರು ಬಳಿ ಎಂಐ-17ವಿ5 ಹೆಲಿಕಾಪ್ಟರ್( Mi-17V5 helicopter) ಪತನಕ್ಕೀಡಾಗಿರುವ ಘಟನೆಗೆ ಸಂಬಂಧಿಸಿದಂತೆ ಟ್ವೀಟ್ ಮಾಡಿರುವ ಭಾರತೀಯ ವಾಯುಪಡೆ ರಕ್ಷಣಾ ಪಡೆ ಮುಖ್ಯಸ್ಥ ಬಿಪಿನ್ ರಾವತ್, ಅವರ ಕುಟುಂಬ ಮತ್ತು ಇತರ ಉನ್ನತ ಮಟ್ಟದ ಅಧಿಕಾರಿಗಳು ಪ್ರಯಾಣಿಸುತ್ತಿದ್ದ ಸೇನಾ ಹೆಲಿಕಾಪ್ಟರ್ ದುರಂತಕ್ಕೀಡಾಗಿದ್ದು, ಘಟನೆಗೆ ಸಂಬಂಧಿಸಿದಂತೆ ತನಿಖೆಗೆ ಆದೇಶಿಸಲಾಗಿದೆ ಎಂದು ಹೇಳಿದೆ. 

ನಾಲ್ವರು ಸಾವಿಗೀಡಾಗಿರುವ ಶಂಕೆ: ನೀಲಗಿರಿ ಅರಣ್ಯ ಪ್ರದೇಶದಲ್ಲಿ ಪತನಕ್ಕೀಡಾದ ವೇಳೆ ಸೇನಾ ಹೆಲಿಕಾಪ್ಟರ್ ನಲ್ಲಿದ್ದ ನಾಲ್ವರು ಸಾವಿಗೀಡಾಗಿದ್ದಾರೆ ಎಂದು ಶಂಕೆ ವ್ಯಕ್ತವಾಗಿದ್ದು, ಈ ಮಧ್ಯೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಿ ಘಟನೆಯ ವಿವರ ನೀಡಿದ್ದಾರೆ. 
 

SCROLL FOR NEXT