ದೇಶ

ಎಲ್ಲಾ ಕೋವಿಡ್ ಪಾಸಿಟಿವ್ ಪ್ರಕರಣಗಳನ್ನು ಜಿನೋಮ್ ಸೀಕ್ವೆನ್ಸಿಂಗ್‌ಗೆ ಕಳುಹಿಸಲಾಗುವುದು: ದೆಹಲಿ ಸಿಎಂ ಕೇಜ್ರಿವಾಲ್

Lingaraj Badiger

ನವದೆಹಲಿ: ದೇಶದಲ್ಲಿ ಓಮಿಕ್ರಾನ್ ಪ್ರಕರಣಗಳು ಹೆಚ್ಚುತ್ತಿರುವುದರ ನಡುವೆಯೇ ರಾಷ್ಟ್ರ ರಾಜಧಾನಿಯಲ್ಲಿ ವರದಿಯಾಗುವ ಎಲ್ಲಾ ಕೊರೋನಾ ವೈರಸ್ ಪಾಸಿಟಿವ್ ಪ್ರಕರಣಗಳನ್ನು ಜೀನೋಮ್ ಸೀಕ್ವೆನ್ಸಿಂಗ್‌ಗೆ ಕಳುಹಿಸಲಾಗುವುದು ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಸೋಮವಾರ ಹೇಳಿದ್ದಾರೆ.

ಓಮಿಕ್ರಾನ್ ಆತಂಕದ ಹಿನ್ನೆಲೆಯಲ್ಲಿ ಆರೋಗ್ಯ ಕಾರ್ಯಕರ್ತರು ಮತ್ತು ಇತರರಿಗೆ ಕೋವಿಡ್ ಲಸಿಕೆಯ ಬೂಸ್ಟರ್ ಡೋಸ್ ನೀಡಲು ಅನುಮತಿ ನೀಡಬೇಕು ಎಂದು ದೆಹಲಿ ಸಿಎಂ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

ಓಮಿಕ್ರಾನ್ ರೂಪಾಂತರಿ ಪ್ರಕರಣಗಳು ಹೆಚ್ಚುತ್ತಿದ್ದರೂ ಯಾರೂ ಭಯಪಡುವ ಅಗತ್ಯವಿಲ್ಲ ಎಂದು ಅವರು ಹೇಳಿದ್ದಾರೆ.

ಕಳೆದ ಕೆಲವು ದಿನಗಳಿಂದ ನಗರದಲ್ಲಿ ಕೋವಿಡ್-19 ಪ್ರಕರಣಗಳು ಹೆಚ್ಚಾಗುತ್ತಿವೆ. ನಿನ್ನೆ(ಭಾನುವಾರ) 100ಕ್ಕಿಂತ ಹೆಚ್ಚು ಪ್ರಕರಣಗಳು ವರದಿಯಾಗಿವೆ. ಇದು ಯಾವ ರೀತಿಯ ಕೋವಿಡ್ ಪ್ರಕರಣಗಳು, ಸಾಮಾನ್ಯ ಕೋವಿಡ್ ಪ್ರಕರಣಗಳಾ ಅಥವಾ ಓಮಿಕ್ರಾನ್ ರೂಪಾಂತರಿ ಎಂದು ನಮಗೆ ತಿಳಿದಿಲ್ಲ. ಆದ್ದರಿಂದ ಇದನ್ನು ಖಚಿತಪಡಿಸಿಕೊಳ್ಳಲು ನಾವು ಈಗ ಎಲ್ಲಾ ಪಾಸಿಟಿವ್ ಪ್ರಕರಣಗಳ ಮಾದರಿಗಳನ್ನು ಜೀನೋಮ್ ಸೀಕ್ವೆನ್ಸಿಂಗ್‌ ಕಳುಹಿಸಲು ನಿರ್ಧರಿಸಿದ್ದೇವೆ ಎಂದು ಕೇಜ್ರಿವಾಲ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಸೋಮವಾರ ದೆಹಲಿ ವಿಪತ್ತು ನಿರ್ವಹಣಾ ಪ್ರಾಧಿಕಾರ(ಡಿಡಿಎಂಎ)ದ ಸಭೆಯಲ್ಲಿ ತಜ್ಞರು, ಓಮಿಕ್ರಾನ್ ಬಹಳ ವೇಗವಾಗಿ ಹರಡುತ್ತದೆ. ಆದರೆ ಅದರ ಲಕ್ಷಣಗಳು ಸೌಮ್ಯವಾಗಿರುತ್ತವೆ ಎಂದು ದೆಹಲಿ ಮುಖ್ಯಮಂತ್ರಿ ತಿಳಿಸಿದರು.

"ಹೆಚ್ಚಿನ ಪ್ರಕರಣಗಳಿಗೆ ಆಸ್ಪತ್ರೆಗೆ ದಾಖಲಾಗುವ ಅಗತ್ಯವಿಲ್ಲದ ಕಾರಣ ನಾವು ಹೋಮ್ ಐಸೋಲೇಶನ್ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸುತ್ತೇವೆ. ಓಮಿಕ್ರಾನ್ ಸೋಂಕಿನ ಬಗ್ಗೆ ಭಯಪಡುವ ಅಗತ್ಯವಿಲ್ಲ. ಏಕೆಂದರೆ ಆಸ್ಪತ್ರೆಗಳಲ್ಲಿ ನಮಗೆ ಸಾಕಷ್ಟು ವ್ಯವಸ್ಥೆಗಳಿವೆ" ಎಂದು ಕೇಜ್ರಿವಾಲ್ ಹೇಳಿದರು.

SCROLL FOR NEXT