ದೇಶ

ಮಹಾರಾಷ್ಟ್ರದ ರಾಯಗಢದಲ್ಲಿ ಭಾರೀ ಭೂಕುಸಿತ: ಮೃತರ ಸಂಖ್ಯೆ 30ಕ್ಕೆ ಏರಿಕೆ

Sumana Upadhyaya

ಮುಂಬೈ: ನೆರೆಯ ಮಹಾರಾಷ್ಟ್ರದಲ್ಲಿ ಕೂಡ ಧಾರಾಕಾರ ಮಳೆಯಿಂದ ಪ್ರವಾಹ ಪರಿಸ್ಥಿತಿ ಉಂಟಾಗಿದ್ದು ರಾಯಗಢ ಜಿಲ್ಲೆಯ ಗ್ರಾಮವೊಂದರಲ್ಲಿ ಭಾರೀ ಭೂಕುಸಿತ ಉಂಟಾಗಿ ಮೃತಪಟ್ಟವರ ಸಂಖ್ಯೆ 30ಕ್ಕೇರಿದೆ. 

ರಾಯಗಢ ಜಿಲ್ಲೆಯ ಮಹದ್ ಟೆಹ್ಸಿಲ್ ನ ತಲೈ ಗ್ರಾಮದಲ್ಲಿ ಈ ದುರ್ಘಟನೆ ನಡೆದಿದ್ದು ಮೃತಪಟ್ಟವರ ಸಂಖ್ಯೆ ಇನ್ನಷ್ಟು ಹೆಚ್ಚಳವಾಗುವ ಸಾಧ್ಯತೆಯಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಭಾಗದಲ್ಲಿ ಕಳೆದ ಕೆಲ ದಿನಗಳಿಂದ ಸತತ ಮಳೆಯಾಗುತ್ತಿದೆ.

ಭೂಕುಸಿತ ಉಂಟಾದ ಪ್ರದೇಶದಿಂದ 30 ಮೃತದೇಹಗಳನ್ನು ಹೊರತೆಗೆಯಲಾಗಿದೆ. ಇನ್ನಷ್ಟು ಮಂದಿ ಸಿಲುಕಿ ಹಾಕಿಕೊಂಡಿರುವ ಶಂಕೆಯಿದೆ. ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ(ಎನ್ ಡಿಆರ್ ಎಫ್)ಯ ತಂಡ ಮುಂಬೈಯಿಂದ 160 ಕಿಲೋ ಮೀಟರ್ ದೂರದಲ್ಲಿರುವ ಮಹಡ್ ಗೆ ತಲುಪಿದ್ದು ಮತ್ತೊಂದು ತಂಡ ಕೂಡ ಸದ್ಯದಲ್ಲಿಯೇ ಸ್ಥಳಕ್ಕೆ ಆಗಮಿಸಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಪರಿಸ್ಥಿತಿಯ ಪರಾಮರ್ಶೆ ನಡೆಸುತ್ತಿದ್ದಾರೆ. 

ಪ್ರಧಾನಿ ಸಂತಾಪ, ಪರಿಹಾರ ಘೋಷಣೆ: ರಾಯಗಢದಲ್ಲಿ ಭೂಕುಸಿತದಿಂದ ಮೃತಪಟ್ಟವರ ಕುಟುಂಬಸ್ಥರಿಗೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ, ಅಲ್ಲದೆ ಪ್ರಧಾನ ಮಂತ್ರಿ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಿಂದ ತಲಾ 2 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ. ಗಾಯಗೊಂಡವರು ಶೀಘ್ರವೇ ಗುಣಮುಖರಾಗಲಿ ಎಂದು ಆಶಿಸಿ ತಲಾ 50 ಸಾವಿರ ರೂಪಾಯಿ ಪರಿಹಾರ ಪ್ರಕಟಿಸಿದ್ದಾರೆ.

ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಭಾರೀ ಮಳೆಯ ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದು, ಸಾಧ್ಯವಾದಷ್ಟು ಪರಿಹಾರ ಒದಗಿಸಲಾಗುತ್ತಿದೆ ಎಂದು ಪ್ರಧಾನಿ ಹೇಳಿದ್ದಾರೆ.

SCROLL FOR NEXT