ದೇಶ

ಭಾರತದಲ್ಲಿ ಕೊರೋನಾ 2ನೇ ಅಲೆ ಇಳಿಮುಖ: ದೇಶದಲ್ಲಿಂದು 86,498 ಹೊಸ ಕೇಸ್ ಪತ್ತೆ, 2,123 ಮಂದಿ ಸಾವು

Manjula VN

ನವದೆಹಲಿ: ಭಾರತದಲ್ಲಿ ಕೊರೋನಾ 2ನೇ ಅಲೆ ಇಳಿಕೆಯ ಹಾದಿ ಮುಂದುವರೆದಿದ್ದು, ಮಂಗಳವಾರ ಬೆಳಿಗ್ಗೆ 8 ಗಂಟೆಗೆ ಮುಕ್ತಾಯಾವಾದ 24 ಗಂಟೆಗಳ ಅವಧಿಯಲ್ಲಿ 86,498 ಹೊಸ ಪ್ರಕರಣಗಳು ಪತ್ತೆಯಾಗಿದ್ದು, ಇದು ಕಳೆದ 62 ದಿನಗಳ ಕನಿಷ್ಠ ಪ್ರಮಾಣವಾಗಿದೆ. 

ಇನ್ನು ಇದೇ ಅವಧಿಯಲ್ಲಿ ದೇಶದಲ್ಲಿ 2123 ಜನರು ಸೋಂಕಿಗೆ ಬಲಿಯಾಗಿದ್ದಾರೆ. ಈ ಪ್ರಮಾಣವು ಕಳೆದ 46 ದಿನಗಳಲ್ಲಿಯೇ ಕನಿಷ್ಠವಾಗಿದೆ. 

ಮಂಗಳವಾರದ ಅಂಕಿ ಸಂಖ್ಯೆಯೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 2,89,96,473ಕ್ಕೆ ತಲುಪಿದ್ದು, ಸಾವಿನ ಸಂಖ್ಯೆ 3,51,309ಕ್ಕೆ ಏರಿಕೆಯಾಗಿದೆ. 

ದೇಶದಲ್ಲಿ ದೈನಂದಿನ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 13,03,702ಕ್ಕೆ ಏರಿಕೆಯಾಗಿದೆ. 

ಈ ನಡುವೆ ಕಳೆದ 24 ಗಂಟೆಗಳಲ್ಲಿ 1,82,282 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 2,73,41,462ಕ್ಕೆ ತಲುಪಿದೆ.

ಇನ್ನು ಭಾರತದಲ್ಲಿ ಒಂದೇ  18,73,485 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, 36,82,07,596 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.

ಭಾರತದಲ್ಲಿ ಜನವರಿ 16 ರಂದು ಸ್ವದೇಶಿ ನಿರ್ಮಿತ ಕೋವಿಶೀಲ್ಟ್ ಮತ್ತು ಕೋವ್ಯಾಕ್ಸಿನ್ ಕೊರೋನಾ ಲಸಿಕೆಗೆ ಪ್ರಧಾನಿ ಮೋದಿಯವರು ಚಾಲನೆ ನೀಡಿದ್ದು, ತಮ್ಮ ಜೀವವನ್ನೇ ಪಣಕ್ಕಿಟ್ಟು ಕೊರೋನಾ ವಿರುದ್ಧ ಹೋರಾಟ ಮಾಡುತ್ತಿರುವ ಕೊರೋನಾ ವಾರಿಯರ್ಸ್'ಗೆ ಲಸಿಕೆಯ ಮೊದಲ ಆದ್ಯತೆಯನ್ನು ನೀಡಲಾಗಿತ್ತು. ಬಳಿಕ 45 ವರ್ಷ ಮೇಲ್ಪಟ್ಟ ಎಲ್ಲಾ ನಾಗರೀಕರಿಗೆ ಲಸಿಕೆ ನೀಡಲಾಗಿತ್ತು. ಮೇ.1ರಿಂದ 18-45 ವರ್ಷ ವಯಸ್ಸಿನ ಎಲ್ಲರಿಗೂ ಲಸಿಕೆ ನೀಡಲಾಗುತ್ತಿದೆ. 

ಕೇಂದ್ರ ಸರ್ಕಾರ ಮಾಹಿತಿ ನೀಡಿರುವ ಪ್ರಕಾರ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ ಒಟ್ಟಾರೆ 23,61,98,726 ಮಂದಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ತಿಳಿಸಿದೆ.

SCROLL FOR NEXT