ದೇಶ

ಭಾರತದಲ್ಲಿ ಕೊರೋನಾ 2ನೇ ಅಲೆ ಇಳಿಮುಖ: ದೇಶದಲ್ಲಿಂದು ಕೇವಲ 60,471 ಹೊಸ ಕೇಸ್ ಪತ್ತೆ; 2,726 ಮಂದಿ ಸಾವು

Manjula VN

ನವದೆಹಲಿ: ಭಾರತದಲ್ಲಿ ಕೊರೋನಾ 2ನೇ ಅಲೆಯ ತೀವ್ರತೆ ಮತ್ತಷ್ಟು ಕಡಿಮೆಯಾಗಿದೆ. ಮಂಗಳವಾರ 60,471 ಜನರಲ್ಲಿ ಸೋಂಕು ಕಂಡು ಬಂದಿದ್ದು, ಇದು 75 ದಿನಗಳಲ್ಲೇ ಕನಿಷ್ಟವಾಗಿದೆ. ಇದೇ ಅವಧಿಯಲ್ಲಿ ದೇಶದಲ್ಲಿ 2,726 ಮಂದಿ ಸಾವನ್ನಪ್ಪಿದ್ದಾರೆಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.
 
ಮಂಗಳವಾರದ ಅಂಕಿ ಸಂಖ್ಯೆಯೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 2,95,70,881ಕ್ಕೆ ತಲುಪಿದ್ದು, ಸಾವಿನ ಸಂಖ್ಯೆ 3,77,031ಕ್ಕೆ ಏರಿಕೆಯಾಗಿದೆ. 

ದೇಶದಲ್ಲಿ ದೈನಂದಿನ ಸೋಂಕಿತರ ಸಂಖ್ಯೆ ಇಳಿಮುಖವಾಗುತ್ತಿರುವ ನಡುವಲ್ಲೇ ಸಕ್ರಿಯ ಪ್ರಕರಣಗಳ ಸಂಖ್ಯೆ 9,13,378ಕ್ಕೆ ಇಳಿಕೆಯಾಗಿದೆ. 

ಈ ನಡುವೆ ಕಳೆದ 24 ಗಂಟೆಗಳಲ್ಲಿ 1,17,525 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 2,82,80,472ಕ್ಕೆ ತಲುಪಿದೆ.

ಇನ್ನು ಭಾರತದಲ್ಲಿ ಒಂದೇ 17,51,358 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, 38,13,75,984 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.

ಭಾರತದಲ್ಲಿ ಜನವರಿ 16 ರಂದು ಸ್ವದೇಶಿ ನಿರ್ಮಿತ ಕೋವಿಶೀಲ್ಟ್ ಮತ್ತು ಕೋವ್ಯಾಕ್ಸಿನ್ ಕೊರೋನಾ ಲಸಿಕೆಗೆ ಪ್ರಧಾನಿ ಮೋದಿಯವರು ಚಾಲನೆ ನೀಡಿದ್ದು, ತಮ್ಮ ಜೀವವನ್ನೇ ಪಣಕ್ಕಿಟ್ಟು ಕೊರೋನಾ ವಿರುದ್ಧ ಹೋರಾಟ ಮಾಡುತ್ತಿರುವ ಕೊರೋನಾ ವಾರಿಯರ್ಸ್'ಗೆ ಲಸಿಕೆಯ ಮೊದಲ ಆದ್ಯತೆಯನ್ನು ನೀಡಲಾಗಿತ್ತು. ಬಳಿಕ 45 ವರ್ಷ ಮೇಲ್ಪಟ್ಟ ಎಲ್ಲಾ ನಾಗರೀಕರಿಗೆ ಲಸಿಕೆ ನೀಡಲಾಗಿತ್ತು. ಮೇ.1ರಿಂದ 18-45 ವರ್ಷ ವಯಸ್ಸಿನ ಎಲ್ಲರಿಗೂ ಲಸಿಕೆ ನೀಡಲಾಗುತ್ತಿದೆ. 

ಕೇಂದ್ರ ಸರ್ಕಾರ ಮಾಹಿತಿ ನೀಡಿರುವ ಪ್ರಕಾರ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ ಒಟ್ಟಾರೆ 25,90,44,072 ಮಂದಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ತಿಳಿಸಿದೆ.

SCROLL FOR NEXT