oನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಮತ್ತೆ ಒಂದು ವಾರಗಳ ಕಾಲ ಲಾಕ್ ಡೌನ್ ವಿಸ್ತರಿಸಲಾಗಿದೆ. ಮೇ.24ರ ವರೆಗೆ ಈ ಲಾಕ್ ಡೌನ್ ಜಾರಿಯಲ್ಲಿರಲಿದೆ.
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಈ ಬಗ್ಗೆ ಮಾಹಿತಿ ನೀಡಿದ್ದು, ಲಾಕ್ಡೌನ್ ಪರಿಣಾಮ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಉತ್ತಮ ಬೆಳವಣಿಗೆಗಳು ಕಂಡು ಬಂದಿದೆ. ಸೋಂಕು ಪ್ರಕರಣಗಳ ಸಂಖ್ಯೆಯಲ್ಲೂ ಭಾರೀ ಇಳಿಕೆ ಕಂಡು ಬಂದಿದೆ. ಇಷ್ಟು ದಿನಗಳಲ್ಲಿ ನಾವು ಗಳಿಸಿದ ಲಾಭವನ್ನು ಕಳೆದುಕೊಳ್ಳಲು ನಾವು ಬಯಸುವುದಿಲ್ಲ. ಹೀಗಾಗಿ ಮತ್ತೊಂದು ವಾರ ಲಾಕ್ಡೌನ್ ವಿಸ್ತರಿಸಲಾಗುತ್ತಿದೆ. ನಾಳೆಯ ಬದಲು ಮುಂದಿನ ಸೋಮವಾರ ಬೆಳಿಗ್ಗೆ 5 ಗಂಟೆಯವರೆಗೂ ಲಾಕ್ಡೌನ್ ವಿಸ್ತರಿಸಲಾಗುತ್ತಿದೆ ಎಂದು ಹೇಳಿದ್ದಾರೆ.
ದೆಹಲಿಯಲ್ಲಿ ಶುಕ್ರವಾರ 8,506 ಹೊಸ ಪ್ರಕರಣಗಳು ಪತ್ತೆಯಾಗಿದೆ. ಒಂದು ತಿಂಗಳ ಬಳಿಕ ದೆಹಲಿಯಲ್ಲಿ 10,000ಕ್ಕಿಂತಲೂ ಕಡಿಮೆ ಪ್ರಕರಣಗಳು ಪತ್ತೆಯಾಗಿವೆ. ಇದಕ್ಕೆ ಲಾಕ್ಡೌನ್ ಕಾರಣ ಎಂದು ತಜ್ಞರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.