ದೇಶ

ಪಶ್ಚಿಮ ಬಂಗಾಳದಲ್ಲಿ ಚುನಾವಣೋತ್ತರ ಹಿಂಸಾಚಾರ: ಮಮತಾ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್

Lingaraj Badiger

ನವದೆಹಲಿ: ರಾಜ್ಯ ವಿಧಾನಸಭಾ ಚುನಾವಣೆ ಫಲಿತಾಂಶದ ಬೆನ್ನಲ್ಲೇ ಪಶ್ಚಿಮ ಬಂಗಾಳದಲ್ಲಿ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಂಗಳವಾರ ಮಮತಾ ಬ್ಯಾನರ್ಜಿ ಸರ್ಕಾರಕ್ಕೆ ನೋಟಿಸ್ ನೀಡಿದೆ.

ರಾಜ್ಯ ಪ್ರಾಯೋಜಿತ ಹಿಂಸಾಚಾರ ತಡೆಯಲು ನಿರ್ದೇಶನ ಕೋರಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ವಿನೀತ್ ಸರನ್ ಮತ್ತು ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಸುಪ್ರೀಂ ಪೀಠ, ಈ ಸಂಬಂಧ ತನ್ನ ಪ್ರತಿಕ್ರಿಯೆ ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ನೋಟಿಸ್ ನೀಡಿದೆ ಮತ್ತು ಅರ್ಜಿದಾರರ ಪರವಾಗಿ ಹಾಜರಾದ ಹಿರಿಯ ವಕೀಲ ಪಿಂಕಿ ಆನಂದ್ ಅವರ ಕೋರಿಕೆಯ ಮೇರೆಗೆ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ(ಎನ್ಎಚ್ಆರ್ಸಿ) ಮತ್ತು ರಾಷ್ಟ್ರೀಯ ಮಹಿಳಾ ಮತ್ತು ಮಕ್ಕಳ ಆಯೋಗವನ್ನು ಪ್ರತಿವಾದಿಯನ್ನಾಗಿ ಮಾಡಲು ಒಪ್ಪಿಕೊಂಡಿದೆ.

ಇಬ್ಬರು ವಕೀಲರು ಸೇರಿದಂತೆ ಐವರು ಸಾಮಾಜಿಕ ಕಾರ್ಯಕರ್ತರು ಸಲ್ಲಿಸಿದ್ದ ಮನವಿಯಲ್ಲಿ ಹಿಂಸಾಚಾರದ ಬಗ್ಗೆ ತನಿಖೆ ನಡೆಸಲು ಮತ್ತು ವರದಿಯಾದ ಘಟನೆಗಳಲ್ಲಿ ಅಪರಾಧಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲು ಎಸ್‌ಐಟಿ ರಚಿಸಬೇಕು ಎಂದು ಕೋರಲಾಗಿದೆ.

ಚುನಾವಣೋತ್ತರ ಹಿಂಸಾಚಾರದ ಬಗ್ಗೆ ಎಸ್‌ಐಟಿ ತನಿಖೆ ನಡೆಸಬೇಕು ಮತ್ತು ಟಿಎಂಸಿ ಕಾರ್ಯಕರ್ತರ ಕಿರುಕುಳದಿಂದ  ರಾಜ್ಯದಿಂದ ಸ್ಥಳಾಂತರಗೊಂಡ ಲಕ್ಷಾಂತರ ಜನರಿಗೆ ಪರಿಹಾರ ಮತ್ತು ಪುನರ್ವಸತಿ ಕಲ್ಪಿಸುವಂತೆ ಕೋರಿ ಅರ್ಜಿ ಸಲ್ಲಿಸಲಾಗಿದೆ.

ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಜೂನ್ 7 ರೊಳಗೆ ಪ್ರತಿಕ್ರಿಯೆ ಸಲ್ಲಿಸುವಂತೆ ಪಶ್ಚಿಮ ಬಂಗಾಳ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಮತ್ತು ವಿಚಾರಣೆಯನ್ನುಜೂನ್ ಎರಡನೇ ವಾರಕ್ಕೆ ಮುಂದೂಡಿದೆ.

SCROLL FOR NEXT