ನವದೆಹಲಿ: ನಾಳೆ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ನಡೆಯಲಿದ್ದು, ಇತ್ತೀಚಿನ ಉಪ ಚುನಾವಣೆ ಫಲಿತಾಂಶ, ಮುಂಬರುವ ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆ ಕಾರ್ಯತಂತ್ರ ಕುರಿತಂತೆ ಚರ್ಚೆ ನಡೆಯುವ ಸಾಧ್ಯತೆಯಿದೆ.
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ. ಪಿ. ನಡ್ಡಾ ಅವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಸಾರಿಗೆ ಸಚಿವ ನಿತಿನ್ ಗಡ್ಕರಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಪಾಲ್ಗೊಳ್ಳಲಿದ್ದಾರೆ ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ತಿಳಿಸಿದ್ದಾರೆ.
ಎನ್ ಡಿಎಂಸಿ ಸೆಂಟರ್ ನಲ್ಲಿ ಆಯೋಜಿಸಲಾಗಿರುವ ಸಭೆಯಲ್ಲಿ 124 ಸದಸ್ಯರು ಪಾಲ್ಗೊಳ್ಳಲಿದ್ದಾರೆ. ಕೆಲವರು ವಿಡಿಯೋ ಕಾನ್ಫರೆನ್ಸ್ ಮೂಲಕ ಭಾಗಿಯಾಗಲಿದ್ದಾರೆ. ಕೋವಿಡ್-19 ಶಿಷ್ಟಾಚಾರದ ಕಾರಣ ಇತರ ರಾಜ್ಯಗಳ ಮುಖ್ಯಮಂತ್ರಿಗಳು , ಮುಖಂಡರನ್ನು ದೆಹಲಿಗೆ ಆಹ್ವಾನಿಸಿಲ್ಲ, ಅವರು ವಿಡಿಯೋ ಕಾನ್ಫರೆನ್ಸ್ ಮೂಲಕ ಪಾಲ್ಗೊಳ್ಳಲಿದ್ದಾರೆ ಎಂದು ಅವರು ಮಾಹಿತಿ ನೀಡಿದ್ದಾರೆ.
ಐದು ತಾಸುಗಳ ಸಭೆಯಲ್ಲಿ ಮುಂದಿನ ವರ್ಷ ನಡೆಯಲಿರುವ ಪಂಜಾಬ್, ಮಣಿಪುರ, ಉತ್ತರಾಖಂಡ್, ಉತ್ತರ ಪ್ರದೇಶ ಮತ್ತು ಗೋವಾ ರಾಜ್ಯಗಳ ವಿಧಾನಸಭಾ ಚುನಾವಣೆ ಬಗ್ಗೆ ಚರ್ಚೆ ನಡೆಯಲಿದೆ ಎಂದು ಅವರು ಹೇಳಿದ್ದಾರೆ.