ದೇಶ

ಮತ್ತೆ ಕಾಂಗ್ರೆಸ್ ಅಧ್ಯಕ್ಷ ಸ್ಥಾನದ ಕುರಿತು ಯೋಚಿಸುತ್ತೇನೆ: ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ ಬಳಿಕ ರಾಹುಲ್ ಗಾಂಧಿ ಹೇಳಿಕೆ

Srinivasamurthy VN

ನವದೆಹಲಿ: ಮತ್ತೆ ಕಾಂಗ್ರೆಸ್ ಅಧ್ಯಕ್ಷ ಸ್ಥಾನ ವಹಿಸಿಕೊಳ್ಳುವ ಕುರಿತು ಯೋಚಿಸುತ್ತೇನೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.

ಇಂದು ದೆಹಲಿಯಲ್ಲಿ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಅವರ ನೇತೃತ್ವದಲ್ಲಿ ನಡೆದ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಹಿರಿಯ ನಾಯಕರು ರಾಹುಲ್ ಗಾಂಧಿ ಅವರನ್ನು ಅಧ್ಯಕ್ಷಗಾದಿ ವಹಿಸಿಕೊಳ್ಳುವ ಕುರಿತು ಮನವಿ ಮಾಡಿದ್ದಾರೆ ಎನ್ನಲಾಗಿದೆ. ಅವರ ಮಾತಿಗೆ ಪ್ರತಿಕ್ರಿಯೆ ನೀಡಿರುವ ರಾಹುಲ್ ಗಾಂಧಿ ಆ ಬಗ್ಗೆ ಯೋಚಿಸುತ್ತೇನೆ ಎಂದು ಹೇಳಿದ್ದಾರೆ ಎಂದು ತಿಳಿದುಬಂದಿದೆ.

ಕಾರ್ಯಕಾರಿ ಸಮಿತಿ ವೇಳೆ ಕಾಂಗ್ರೆಸ್ ಪಕ್ಷದ ಮುಂದಿನ ಅಧ್ಯಕ್ಷರ ಬಗ್ಗೆಯೂ ಮಾತುಕತೆ ನಡೆದಿದೆ ಎಂದು ಹೇಳಲಾಗಿದ್ದು. ಈ ವೇಳೆ ಎಲ್ಲ ನಾಯಕರು ಅಧ್ಯಕ್ಷ ಗಾದಿಗೆ ರಾಹುಲ್ ಗಾಂಧಿ ಹೆಸರನ್ನು ಶಿಫಾರಸ್ಸು ಮಾಡಿದ್ದಾರೆ. ಅಲ್ಲದೆ ರಾಹುಲ್ ಗಾಂಧಿ ತಮ್ಮ ನಿರ್ಧಾರದಿಂದ ಹಿಂದೆ ಸರಿದು ಪಕ್ಷದ ಜವಾಬ್ದಾರಿ ವಹಿಸಿಕೊಳ್ಳಬೇಕು ಎಂದು ಮನವಿ ಮಾಡಿದರು ಎನ್ನಲಾಗಿದೆ.

ಮತ್ತೊಂದು ಮೂಲದ ಪ್ರಕಾರ ರಾಹುಲ್ ಗಾಂಧಿಯನ್ನು ಮತ್ತೊಮ್ಮೆ ಪಕ್ಷದ ಅಧ್ಯಕ್ಷರನ್ನಾಗಿ ಮಾಡಲು ಕಾಂಗ್ರೆಸ್ ಕಾರ್ಯಕಾರಿ ಸಮಿತಿ (ಸಿಡಬ್ಲ್ಯೂಸಿ) ಸಭೆಯಲ್ಲಿ ಕಾಂಗ್ರೆಸ್‌ನ ನಾಯಕರು ಅವಿರೋಧವಾಗಿ ಒಪ್ಪಿಕೊಂಡಿದ್ದು, ಅವರ ಅಭಿಪ್ರಾಯವನ್ನು ಪರಿಗಣಿಸುವುದಾಗಿ ರಾಹುಲ್ ಗಾಂಧಿ ಹೇಳಿದ್ದಾರೆ ಎನ್ನಲಾಗಿದೆ. ಕಾಂಗ್ರೆಸ್ ಪಕ್ಷದ ಅಧ್ಯಕ್ಷಗಾದಿ ಅಲಂಕರಿಸುವಂತೆ ಸಿಡಬ್ಲ್ಯುಸಿ ಸಭೆಯಲ್ಲಿ ಹಿರಿಯ ನಾಯಕರು ರಾಹುಲ್ ಗಾಂಧಿಗೆ ಮನವಿ ಮಾಡಿದ್ದು, ಅವರ ಕೋರಿಕೆಯನ್ನು ಪರಿಗಣಿಸುತ್ತೇನೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ. 

ಸಿದ್ಧಾಂತದ ಮಟ್ಟದಲ್ಲಿ ನನಗೆ ಸ್ಪಷ್ಟತೆ ಬೇಕು
ಇದೇ ವೇಳೆ, ಪಕ್ಷದ ನಾಯಕರಿಂದ ಸಿದ್ಧಾಂತದ ಮಟ್ಟದಲ್ಲಿ ನನಗೆ ಸ್ಪಷ್ಟತೆ ಬೇಕು ಎಂದು ಅವರು ಹೇಳಿದ್ದಾರೆ ಎನ್ನಲಾಗಿದೆ. ಚುನಾವಣೆಯವರೆಗೂ ರಾಹುಲ್ ಗಾಂಧಿ ಅವರನ್ನು ಕಾರ್ಯಾಧ್ಯಕ್ಷರನ್ನಾಗಿ ಮಾಡಬೇಕು ಎಂದು ಕೆಲವು ನಾಯಕರು ಹೇಳಿದರು ಎಂದು ಮೂಲಗಳು ತಿಳಿಸಿವೆ.

ಎರಡು ವರ್ಷಗಳ ಹಿಂದೆ 2019ರ ಲೋಕಸಭಾ ಚುನಾವಣೆಯಲ್ಲಿ ಪಕ್ಷದ ಹೀನಾಯ ಸೋಲಿನ ನಂತರ ರಾಹುಲ್ ಗಾಂಧಿ ಕಾಂಗ್ರೆಸ್ ಅಧ್ಯಕ್ಷ ಸ್ಥಾನವನ್ನು ತ್ಯಜಿಸಿದ್ದರು. ಅವರ ರಾಜೀನಾಮೆಯು ಪಕ್ಷವನ್ನು ನಾಯಕತ್ವ ಬಿಕ್ಕಟ್ಟಿಗೆ ತಳ್ಳಿತ್ತು, ಇದರಿಂದ ಅದು ಇನ್ನೂ ಸಂಪೂರ್ಣವಾಗಿ ಚೇತರಿಸಿಕೊಂಡಿಲ್ಲ. ರಾಹುಲ್ ಗಾಂಧಿ ಅವರ ತಾಯಿ ಸೋನಿಯಾ ಗಾಂಧಿ ಅವರನ್ನು ಹಂಗಾಮಿ ಮುಖ್ಯಸ್ಥರಾಗಿ ಮರು ನೇಮಕ ಮಾಡಲಾಗಿತ್ತು.

SCROLL FOR NEXT