ದೇಶ

ಪಂಜಾಬ್‌ ಮುಖ್ಯಮಂತ್ರಿ ಕ್ಯಾಪ್ಟನ್ ಅಮರೀಂದರ್ ಸಿಂಗ್ ರಾಜೀನಾಮೆ

Lingaraj Badiger

ಚಂಡಿಗಢ: ಪಂಜಾಬ್ ಮುಖ್ಯಮಂತ್ರಿ ಕ್ಯಾಪ್ಟನ್ ಅಮರೀಂದರ್ ಸಿಂಗ್ ಅವರು ಶನಿವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಮುಂದಿನ ವರ್ಷದ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ ರಾಜ್ಯದಲ್ಲಿ ನಾಯಕತ್ವ ಬದಲಾಯಿಸುವಂತೆ 40 ಕಾಂಗ್ರೆಸ್ ಶಾಸಕರು ಒತ್ತಾಯಿಸಿದ ನಂತರ ಕ್ಯಾಪ್ಟನ್ ಅಮರೀಂದರ್ ಸಿಂಗ್ ಅವರಿಗೆ ರಾಜೀನಾಮೆ ನೀಡುವಂತೆ ಪಕ್ಷದ ಹೈಕಮಾಂಡ್ ಸೂಚಿಸಿತ್ತು. ಈ ಹಿನ್ನೆಲೆಯಲ್ಲಿ ಇಂದು ಸಂಜೆ ರಾಜಭವನಕ್ಕೆ ತೆರಳಿ ರಾಜ್ಯಪಾಲರಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ.

ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಗೂ ಮುನ್ನ ಅಮರೀಂದರ್ ಸಿಂಗ್ ಅವರು ಪಂಜಾಬ್ ರಾಜ್ ಭವನದ ಹೊರಗೆ ಮಾಧ್ಯಮವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ಅವರ ಮಾಧ್ಯಮ ಸಲಹೆಗಾರ ತಿಳಿಸಿದ್ದಾರೆ.

ಕಾಂಗ್ರೆಸ್ ಹೈಕಮಾಂಡ್ ಇಂದು ಸಂಜೆ ಪಕ್ಷದ ಶಾಸಕರ ಸಭೆಯ ನಂತರ ಹೊಸ ನಾಯಕನನ್ನು ನಿರ್ಧರಿಸುವ ನಿರೀಕ್ಷೆಯಿದೆ.

ಪಂಜಾಬ್ ನ 40 ಕಾಂಗ್ರೆಸ್ ಶಾಸಕರು ಕಾಂಗ್ರೆಸ್ ಮುಖ್ಯಸ್ಥೆ ಸೋನಿಯಾ ಗಾಂಧಿ ಅವರಿಗೆ ಪತ್ರ ಬರೆದು ಮುಖ್ಯಮಂತ್ರಿಯನ್ನು ಬದಲಾವಣೆ ಮಾಡುವಂತೆ ಒತ್ತಾಯಿಸಿದ್ದರು.

ಪಂಜಾಬ್ ಕಾಂಗ್ರೆಸ್ ಮಾಜಿ ಮುಖ್ಯಸ್ಥ ಸುನಿಲ್ ಜಖರ್, ಲುಧಿಯಾನಾ ಸಂಸದ ರವನೀತ್ ಸಿಂಗ್ ಬಿಟ್ಟು ಮತ್ತು ರಾಜ್ಯಸಭಾ ಸಂಸದ ಪರ್ತಪ್ ಸಿಂಗ್ ಬಾಜ್ವಾ ಅವರು ನೂತನ ಮುಖ್ಯಮಂತ್ರಿ ರೇಸ್ ನಲ್ಲಿದ್ದಾರೆ. ಆದರೆ ಪಂಜಾಬ್ ಕಾಂಗ್ರೆಸ್ ಮುಖ್ಯಸ್ಥ ನವಜೋತ್ ಸಿಂಗ್ ಸಿಧು ಅವರು ಮುಖ್ಯಮಂತ್ರಿ ರೇಸ್ ನಿಂದ ಹೊರಗುಳಿದಿದ್ದಾರೆ ಎಂದು ಮೂಲಗಳು ಸ್ಪಷ್ಟಪಡಿಸಿವೆ.

SCROLL FOR NEXT