ದೇಶ

ಯಾರೂ ಖಾಲಿ ಹೊಟ್ಟೆಯಲ್ಲಿ ಮಲಗಬಾರದು, ಎಲ್ಲರಿಗೂ ಆಹಾರಧಾನ್ಯ ಒದಗಿಸಿ: ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

Lingaraj Badiger

ನವದೆಹಲಿ: ಯಾರೂ ಖಾಲಿ ಹೊಟ್ಟೆಯಲ್ಲಿ ಮಲಗಬಾರದು ಎಂದು ಖಚಿತಪಡಿಸಿಕೊಳ್ಳುವುದು ನಮ್ಮ ಸಂಸ್ಕೃತಿ ಮತ್ತು ಕರ್ತವ್ಯ ಎಂದಿರುವ ಸುಪ್ರೀಂ ಕೋರ್ಟ್, ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆ(ಎನ್‌ಎಫ್‌ಎಸ್‌ಎ)ಯಡಿ ಆಹಾರ ಧಾನ್ಯಗಳು ದೇಶದ ಪ್ರತಿಯೊಬ್ಬರಿಗೂ ತಲುಪುವಂತೆ ನೋಡಿಕೊಳ್ಳಬೇಕು ಕೇಂದ್ರ ಸರ್ಕಾರಕ್ಕೆ ಮಂಗಳವಾರ ಸೂಚಿಸಿದೆ.

ಕೋವಿಡ್ ಸಾಂಕ್ರಾಮಿಕ ಸಮಯದಲ್ಲಿ ವಲಸೆ ಕಾರ್ಮಿಕರ ದುರವಸ್ಥೆ ಮತ್ತು ಲಾಕ್ ಡೌನ್ ಪರಿಣಾಮಗಳಿಗೆ ಸಂಬಂಧಿಸಿದ ತನ್ನದೇ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಎಂಆರ್ ಶಾ ಮತ್ತು ಹಿಮಾ ಕೊಹ್ಲಿ ಅವರ ಪೀಠ, ಇಶ್ರಮ್ ಪೋರ್ಟಲ್‌ನಲ್ಲಿ ನೋಂದಾಯಿಸಲಾದ ವಲಸೆ ಮತ್ತು ಅಸಂಘಟಿತ ವಲಯದ ಕಾರ್ಮಿಕರ ಸಂಖ್ಯೆಯೊಂದಿಗೆ ಹೊಸ ಚಾರ್ಟ್ ಅನ್ನು ಸಲ್ಲಿಸುವಂತೆ  ಕೇಂದ್ರಕ್ಕೆ ನಿರ್ದೇಶನ ನೀಡಿದೆ.

"ಎನ್‌ಎಫ್‌ಎಸ್‌ಎ ಅಡಿಯಲ್ಲಿ ಆಹಾರ ಧಾನ್ಯಗಳು ಕೊನೆಯ ವ್ಯಕ್ತಿಗೂ ತಲುಪಿರುವುದನ್ನು ಖಚಿತಪಡಿಸಿಕೊಳ್ಳುವುದು ಕೇಂದ್ರ ಸರ್ಕಾರದ ಕರ್ತವ್ಯವಾಗಿದೆ. ಕೇಂದ್ರವು ಏನನ್ನೂ ಮಾಡುತ್ತಿಲ್ಲ ಎಂದು ನಾವು ಹೇಳುತ್ತಿಲ್ಲ. ಆದರೆ ಕೋವಿಡ್ ಸಮಯದಲ್ಲಿ ಕೇಂದ್ರ ಸರ್ಕಾರ ಜನರಿಗೆ ಆಹಾರ ಧಾನ್ಯಗಳನ್ನು ನೀಡಿದೆ. ಅದು ಮುಂದುವರಿಯಬೇಕು ಎಂದು ನಾವು ಬಯಸುತ್ತೇವೆ. ಯಾರೂ ಖಾಲಿ ಹೊಟ್ಟೆಯಲ್ಲಿ ಮಲಗುವುದಿಲ್ಲ ಎಂದು ಖಚಿತಪಡಿಸಿಕೊಳ್ಳುವುದು ನಮ್ಮ ಸಂಸ್ಕೃತಿ” ಎಂದು ಪೀಠ ಹೇಳಿದೆ.

ಮೂವರು ಸಾಮಾಜಿಕ ಕಾರ್ಯಕರ್ತೆಯರಾದ ಅಂಜಲಿ ಭಾರದ್ವಾಜ್, ಹರ್ಷ್ ಮಂದರ್ ಮತ್ತು ಜಗದೀಪ್ ಚೋಕರ್ ಪರ ವಾದ ಮಂಡಿಸಿದ ವಕೀಲ ಪ್ರಶಾಂತ್ ಭೂಷಣ್ ಅವರು, 2011ರ ಜನಗಣತಿಯ ನಂತರ ದೇಶದ ಜನಸಂಖ್ಯೆ ಹೆಚ್ಚಿದೆ ಮತ್ತು ಎನ್‌ಎಫ್‌ಎಸ್‌ಎ ವ್ಯಾಪ್ತಿಗೆ ಒಳಪಡುವ ಫಲಾನುಭವಿಗಳ ಸಂಖ್ಯೆಯೂ ಹೆಚ್ಚಿದೆ ಎಂದರು.

ಎನ್‌ಎಫ್‌ಎಸ್‌ಎ ಅನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸದಿದ್ದರೆ ಅನೇಕ ಅರ್ಹ ಮತ್ತು ಅಗತ್ಯವಿರುವ ಫಲಾನುಭವಿಗಳು ಆಹಾರ ಧಾನ್ಯಗಳಿಂದ ವಂಚಿತರಾಗುತ್ತಾರೆ ಎಂದು ಭೂಷಣ್ ಹೇಳಿದರು.

ಇತ್ತೀಚಿನ ವರ್ಷಗಳಲ್ಲಿ ಜನರ ತಲಾ ಆದಾಯ ಹೆಚ್ಚಿದೆ ಎಂದು ಕೇಂದ್ರ ಸರ್ಕಾರ ಹೇಳಿಕೊಳ್ಳುತ್ತಿದೆ. ಆದರೆ ಜಾಗತಿಕ ಹಸಿವು ಸೂಚ್ಯಂಕದಲ್ಲಿ ಭಾರತ ವೇಗವಾಗಿ ಕುಸಿದಿದೆ ಎಂದು ಭೂಷಣ್ ಸುಪ್ರೀಂ ಕೋರ್ಟ್ ಗಮನಕ್ಕೆ ತಂದರು.

SCROLL FOR NEXT