ದೇಶ

ಹಿಮಾಚಲ ಪ್ರದೇಶ ನೂತನ ಸಿಎಂ ಆಗಿ ಸುಖ್ವಿಂದರ್ ಸಿಂಗ್ ಸುಖು ಆಯ್ಕೆ, ನಾಳೆ ಪ್ರಮಾಣ ಸಾಧ್ಯತೆ

Lingaraj Badiger

ಶಿಮ್ಲಾ: ಹಿಮಾಚಲ ಪ್ರದೇಶ ಕಾಂಗ್ರೆಸ್ ಚುನಾವಣಾ ಪ್ರಚಾರ ಸಮಿತಿಯ ಮುಖ್ಯಸ್ಥ ಸುಖ್ವಿಂದರ್ ಸಿಂಗ್ ಸುಖು ಅವರು ಹಿಮಾಚಲ ಪ್ರದೇಶ ನೂತನ ಮುಖ್ಯಮಂತ್ರಿಯಾಗಲಿದ್ದು, ಕಾಂಗ್ರೆಸ್ ಹೈಕಮಾಂಡ್ ಶನಿವಾರ ಅವರ ಹೆಸರನ್ನು ಅನುಮೋದಿಸಿದೆ. 

ಇತರ ನಾಯಕರೊಂದಿಗೆ ಚರ್ಚಿಸಿದ ನಂತರ ಇಂದು ಸುಖು ಅವರ ಹೆಸರನ್ನು ಅಧಿಕೃತವಾಗಿ ಘೋಷಿಸಲಾಗುವುದು ಎಂದು ಕಾಂಗ್ರೆಸ್ ಮೂಲಗಳನ್ನು ಉಲ್ಲೇಖಿಸಿ ಎಎನ್ಐ ವರದಿ ಮಾಡಿದೆ.

ಶಾಸಕಾಂಗ ಪಕ್ಷದ ನಾಯಕನನ್ನು ಆಯ್ಕೆ ಮಾಡಲು ಪಕ್ಷದ ಅಧ್ಯಕ್ಷರಿಗೆ ಅಧಿಕಾರ ನೀಡುವ ನಿರ್ಣಯವನ್ನು ಹೊಸದಾಗಿ ಆಯ್ಕೆಯಾದ ಕಾಂಗ್ರೆಸ್ ಶಾಸಕರು ಸರ್ವಾನುಮತದಿಂದ ಅಂಗೀಕರಿಸಿದ ಒಂದು ದಿನದ ನಂತರ ಹಿಮಾಚಲ ಪ್ರದೇಶದ ಮುಖ್ಯಮಂತ್ರಿಯನ್ನು ಹೈಕಮಾಂಡ್ ಆಯ್ಕೆ ಮಾಡಿದೆ. ಸುಖ್ವಿಂದರ್ ಸಿಂಗ್ ಸುಖು ಅವರು ನಾಳೆ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆ ಇದೆ.

ಇಂದು ಸಂಜೆ ವಿಧಾನಸಭೆ ಸಂಕೀರ್ಣದಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಯಲಿದ್ದು, ಕಾಂಗ್ರೆಸ್ ಶಾಸಕಾಂಗ ಪಕ್ಷದ ನೂತನ ನಾಯಕರಾಗಿ ಸುಖ್ವಿಂದರ್ ಸಿಂಗ್ ಸುಖು ಅವರನ್ನು ಆಯ್ಕೆ ಮಾಡಲಿದ್ದಾರೆ.

ರಾಜ್ಯ ಕಾಂಗ್ರೆಸ್ ಮುಖ್ಯಸ್ಥೆ ಪ್ರತಿಭಾ ಸಿಂಗ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಮುಖೇಶ್ ಅಗ್ನಿಹೋತ್ರಿ ಮತ್ತು ಚುನಾವಣಾ ಪ್ರಚಾರ ಸಮಿತಿಯ ಮುಖ್ಯಸ್ಥ ಸುಖ್ವಿಂದರ್ ಸಿಂಗ್ ಸುಖು ಸೇರಿದಂತೆ ಹಲವು ನಾಯಕರು ಮುಖ್ಯಮಂತ್ರಿ ರೇಸ್ ನಲ್ಲಿದ್ದರು. ಅಂತಿಮವಾಗಿ ಸುಖ್ವಿಂದರ್ ಸಿಂಗ್ ಸುಖು ಅವರನ್ನು ಹೈಕಮಾಂಡ್ ಆಯ್ಕೆ ಮಾಡಿದೆ.

SCROLL FOR NEXT