ದೇಶ

ಹಿಮಾಚಲ ಪ್ರದೇಶ: ಕಂದಕಕ್ಕೆ ಬಸ್ಸು ಉರುಳಿ ಬಿದ್ದು ಶಾಲಾ ಮಕ್ಕಳು ಸೇರಿ 16 ಸಾವು, ಪ್ರಧಾನ ಮಂತ್ರಿ ಪರಿಹಾರ ಘೋಷಣೆ

Sumana Upadhyaya

ಶಿಮ್ಲಾ: ಹಿಮಾಚಲ ಪ್ರದೇಶದ ಕುಲ್ಲು ಜಿಲ್ಲೆಯಲ್ಲಿ ಸೋಮವಾರ ಖಾಸಗಿ ಬಸ್ ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ ಶಾಲಾ ಮಕ್ಕಳು ಸೇರಿದಂತೆ 16 ಮಂದಿ ಪ್ರಯಾಣಿಕರು ಮೃತಪಟ್ಟಿದ್ದಾರೆ. ಖಾಸಗಿ ಬಸ್ ಶೈನ್‌ಶರ್‌ನಿಂದ ಸೈಂಜ್‌ಗೆ ತೆರಳುತ್ತಿದ್ದಾಗ ಜಂಗ್ಲಾ ಗ್ರಾಮದ ಬಳಿಯ ತಿರುವಿನಲ್ಲಿ ಬೆಳಿಗ್ಗೆ 8.30 ರ ಸುಮಾರಿಗೆ ಕೂದಲೆಳೆ ಅಂತರದಲ್ಲಿ ಕಮರಿಗೆ ಬಿದ್ದಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ. 

ಬಸ್‌ನಲ್ಲಿ ಹಲವಾರು ಶಾಲಾ ಮಕ್ಕಳು ಸೇರಿದಂತೆ 45 ಕ್ಕೂ ಹೆಚ್ಚು ಪ್ರಯಾಣಿಕರು ಇದ್ದರು. ಮೃತರ ಗುರುತು ಇನ್ನೂ ಪತ್ತೆಯಾಗಿಲ್ಲ.

ಅಪಘಾತದಲ್ಲಿ ಪ್ರಾಣ ಕಳೆದುಕೊಂಡವರ ಬಗ್ಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಮತ್ತು ಪ್ರಧಾನಿ ನರೇಂದ್ರ ಮೋದಿ ಕಂಬನಿ ಮಿಡಿದಿದ್ದಾರೆ. ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಅಪಘಾತದಲ್ಲಿ ವಿದ್ಯಾರ್ಥಿಗಳು ಮತ್ತು ಇತರ ಜನರ ಸಾವಿನ ಬಗ್ಗೆ ತಿಳಿದು ದುಃಖಿತನಾಗಿದ್ದೇನೆ ಎಂದು ಹೇಳಿದ್ದಾರೆ. 

ಪ್ರಧಾನಿ ಪರಿಹಾರ ಘೋಷಣೆ: ಘಟನೆಯನ್ನು ಹೃದಯ ವಿದ್ರಾವಕ ಎಂದು ಕರೆದಿರುವ ಪ್ರಧಾನಿ ನರೇಂದ್ರ ಮೋದಿ, ಪ್ರಾಣ ಕಳೆದುಕೊಂಡವರ ಸಂಬಂಧಿಕರಿಗೆ ತಲಾ 2 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ. ಹಿಮಾಚಲ ಪ್ರದೇಶದ ಕುಲ್ಲುವಿನಲ್ಲಿ ಸಂಭವಿಸಿದ ಬಸ್ ಅಪಘಾತ ಹೃದಯ ವಿದ್ರಾವಕವಾಗಿದೆ. ಕುಟುಂಬಸ್ಥರಿಗೆ ತಮ್ಮವರನ್ನು ಕಳೆದುಕೊಂಡವರಿಗೆ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಪ್ರಧಾನಿ ಮೋದಿ ಅವರ ಕಚೇರಿಯ ಟ್ವೀಟ್‌ನಲ್ಲಿ ಉಲ್ಲೇಖಿಸಲಾಗಿದೆ.

ಗಾಯಾಳುಗಳು ಆದಷ್ಟು ಬೇಗ ಚೇತರಿಸಿಕೊಳ್ಳಲಿ. ಸ್ಥಳೀಯ ಆಡಳಿತವು ಸಂತ್ರಸ್ತರಿಗೆ ಸಾಧ್ಯವಿರುವ ಎಲ್ಲ ನೆರವು ನೀಡುತ್ತಿದೆ ಎಂದು ಪ್ರಧಾನಿ ಹೇಳಿದ್ದಾರೆ. 

ಹಿಮಾಚಲ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬಸ್ ಅಪಘಾತದಲ್ಲಿ ಮೃತಪಟ್ಟವರ  ಹತ್ತಿರದ ಸಂಬಂಧಿಕರಿಗೆ ಪ್ರಧಾನ ಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ (ಪಿಎಂಎನ್‌ಆರ್‌ಎಫ್) ತಲಾ 2 ಲಕ್ಷ ರೂಪಾಯಿ ಹಾಗೂ ಗಾಯಗೊಂಡವರಿಗೆ ತಲಾ 50 ಸಾವಿರ ರೂಪಾಯಿ ಪರಿಹಾರವನ್ನು ಪ್ರಧಾನಿ ಘೋಷಿಸಿದ್ದಾರೆ.

SCROLL FOR NEXT