ದೇಶ

ಮುಸ್ಲಿಂ ಸಮುದಾಯಕ್ಕೆ ಉಪರಾಷ್ಟ್ರಪತಿ ಪಟ್ಟ?: ಕೇಂದ್ರ ಸಚಿವ ಮುಖ್ತಾರ್ ಅಬ್ಬಾಸ್ ನಖ್ವಿ ರಾಜೀನಾಮೆ

Lingaraj Badiger

ನವದೆಹಲಿ: ಉಪರಾಷ್ಟ್ರಪತಿ ಹುದ್ದೆಗಾಗಿ ಎನ್ ಡಿಎ ಮುಸ್ಲಿಂ ಸಮುದಾಯದ ಅಭ್ಯರ್ಥಿಯನ್ನು ಕಣಕ್ಕಿಸಲಿದೆ ಎಂಬ ವರದಿಗಳ ಬೆನ್ನಲ್ಲೇ ಕೇಂದ್ರ ಸಚಿವ ಮುಖ್ತಾರ್ ಅಬ್ಬಾಸ್ ನಖ್ವಿ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಅವರು ಉಪರಾಷ್ಟ್ರಪತಿ ಹುದ್ದೆಗೆ ಸ್ಪರ್ಧಿಸಬಹುದು ಎಂಬ ಊಹಾಪೋಹದ ನಡುವೆ ಇಂದು ಕೇಂದ್ರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಜೊತೆಗೆ ನಖ್ವಿ ಅವರ ರಾಜ್ಯಸಭಾ ಅವಧಿ ನಾಳೆ ಕೊನೆಗೊಳ್ಳಲಿದೆ. ಅದಾಗ್ಯೂ ಇತ್ತೀಚಿನ ಚುನಾವಣೆಗಳಲ್ಲಿ ಬಿಜೆಪಿ ಅವರನ್ನು ಮತ್ತೊಂದು ಅವಧಿಗೆ ಚುನಾವಣೆಯಲ್ಲಿ ಹೆಸರಿಸಿರಲಿಲ್ಲ.

ಇಂದು ಬೆಳಗ್ಗೆ ನಖ್ವಿ ಅವರು ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಅವರನ್ನು ಭೇಟಿ ಮಾಡಿದರು. ಅಟಲ್ ಬಿಹಾರಿ ವಾಜಪೇಯಿ ನೇತೃತ್ವದ ಬಿಜೆಪಿ ಸರ್ಕಾರದಲ್ಲಿ ಮಂತ್ರಿಗಳಾಗಿದ್ದ ರಾಜನಾಥ್ ಸಿಂಗ್ ಮತ್ತು ಮುಕ್ತಾರ್ ಅಬ್ಬಾಸ್ ನಖ್ವಿ ಮಾತ್ರ ಪ್ರಧಾನಿ ಮೋದಿಯವರ ಸರ್ಕಾರದಲ್ಲೂ ಮಂತ್ರಿಗಳಾಗಿದ್ದರು.

ಆಡಳಿತ ಪಕ್ಷವು ಎರಡನೇ ಅತ್ಯುನ್ನತ ಸಾಂವಿಧಾನಿಕ ಹುದ್ದೆ ಉಪರಾಷ್ಟ್ರಪತಿ ಚುನಾವಣೆಗೆ ಅಲ್ಪಸಂಖ್ಯಾತ ಸಮುದಾಯದ ಪ್ರತಿನಿಧಿಯನ್ನು ಕಣಕ್ಕಿಳಿಸುವ ಬಗ್ಗೆ ಚರ್ಚಿಸುತ್ತಿದೆ. ಮುಕ್ತಾರ್ ಅಬ್ಬಾಸ್ ನಖ್ವಿ ಉಪರಾಷ್ಟ್ರಪತಿ ಹುದ್ದೆಯ ಅಭ್ಯರ್ಥಿಯಾಗ್ತಾರೆ ಎಂಬ ಮಾತುಗಳು ಕೇಳಿಬರುತ್ತಿವೆ.

ಅಮಾನತುಗೊಂಡ ಪಕ್ಷದ ವಕ್ತಾರೆ ನೂಪುರ್ ಶರ್ಮಾ ಅವರು ಪ್ರವಾದಿ ಮುಹಮ್ಮದ್ ಅವರ ಬಗ್ಗೆ ಮಾಡಿದ ಕಾಮೆಂಟ್‌ಗಳಿಂದ ಬಿಜೆಪಿ ಸದ್ಯ ಭಾರೀ ಹಿನ್ನಡೆಯನ್ನು ಎದುರಿಸುತ್ತಿದೆ.

ಉಪರಾಷ್ಟ್ರಪತಿಯಾಗಿ ಎಂ ವೆಂಕಯ್ಯ ನಾಯ್ಡು ಅವರ ಅವಧಿ ಆಗಸ್ಟ್ 10 ರಂದು ಕೊನೆಗೊಳ್ಳುತ್ತದೆ. ಜುಲೈ 19 ಉಪಾಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ. ಆಗಸ್ಟ್ 6 ರಂದು ಚುನಾವಣೆ ನಡೆಯಲಿದೆ. 

ಕೇರಳ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್, ಕೇಂದ್ರದ ಮಾಜಿ ಸಚಿವೆ ನಜ್ಮಾ ಹೆಪ್ತುಲ್ಲಾ ಮತ್ತು ಪಂಜಾಬ್ ಮಾಜಿ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಅವರ ಹೆಸರು ಸಹ ಉಪ ರಾಷ್ಟ್ರಪತಿ ಹುದ್ದೆಗೆ ಕೇಳಿಬರುತ್ತಿವೆ.

16ನೇ ಉಪ ರಾಷ್ಟ್ರಪತಿಯನ್ನು ಆಯ್ಕೆ ಮಾಡಲು ಆಗಸ್ಟ್ 6 ರಂದು ನಡೆಯಲಿರುವ ಚುನಾವಣೆಗೆ ಚುನಾವಣಾ ಆಯೋಗ ಮಂಗಳವಾರ ಅಧಿಸೂಚನೆ ಹೊರಡಿಸಿದ್ದು, ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಸುವ ಪ್ರಕ್ರಿಯೆಗೆ ಚಾಲನೆ ನೀಡಲಾಗಿದೆ.

SCROLL FOR NEXT