ದೇಶ

2024ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ-ಜೆಡಿಯು ಒಟ್ಟಾಗಿ ಸ್ಪರ್ಧೆ, ಮೋದಿಯೇ ಪ್ರಧಾನಿ ಅಭ್ಯರ್ಥಿ: ಅಮಿತ್ ಶಾ

Lingaraj Badiger

ಪಾಟ್ನಾ: 2024ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ-ಜೆಡಿಯು ಒಟ್ಟಾಗಿ ಸ್ಪರ್ಧಿಸಲಿದ್ದು, ನರೇಂದ್ರ ಮೋದಿಯೇ ಪ್ರಧಾನಿ ಅಭ್ಯರ್ಥಿ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಭಾನುವಾರ ಹೇಳಿದ್ದಾರೆ.

ಇಂದು ಪಾಟ್ನಾದಲ್ಲಿ ನಡೆದ ಪಕ್ಷದ ಏಳು ಪ್ರಮುಖ ಸಂಘಟನೆಗಳ ಕಾರ್ಯಕಾರಿ ಸಮಿತಿಯ ಜಂಟಿ ಸಭೆಯಲ್ಲಿ 2024ರ ಲೋಕಸಭೆ ಚುನಾವಣೆ ಕುರಿತು ನಿರ್ಣಯವನ್ನು ಅಂಗೀಕರಿಸಲಾಯಿತು.

ಬಿಹಾರದಲ್ಲಿ ಮೊದಲ ಬಾರಿಗೆ ನಡೆದ ಸಭೆಯಲ್ಲಿ ಕೇಂದ್ರ ಸಚಿವ ಅಮಿತ್ ಶಾ ಮತ್ತು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಸೇರಿದಂತೆ ಪ್ರಮುಖ ನಾಯಕರು ಭಾಗವಹಿಸಿದ್ದರು. ಶಾ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು.

ಮುಂದಿನ ಲೋಕಸಭೆ ಚುನಾವಣೆಯಲ್ಲಿ ನರೇಂದ್ರ ಮೋದಿ ಅವರನ್ನು ಸತತ ಮೂರನೇ ಅವಧಿಗೆ ಪಕ್ಷದ ಪ್ರಧಾನಿ ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಲು ಸರ್ವಾನುಮತದಿಂದ ನಿರ್ಧರಿಸಲಾಗಿದೆ ಎಂದು ಸಭೆಯಲ್ಲಿದ್ದ ಪಕ್ಷದ ಹಿರಿಯ ಮುಖಂಡರೊಬ್ಬರು ತಿಳಿಸಿದ್ದಾರೆ.

ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಪಕ್ಷದ ಚಾಣಕ್ಯ ಎಂದೇ ಖ್ಯಾತರಾಗಿರುವ ಅಮಿತ್ ಶಾ, ಮುಂದಿನ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಹೆಚ್ಚು ಸ್ಥಾನಗಳನ್ನು ಗೆಲ್ಲಲಿದೆ ಎಂದು ಹೇಳಿದರು.

ಬಿಜೆಪಿ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಮಾತನಾಡಿ, 2024ರ ಲೋಕಸಭೆ ಮತ್ತು 2025ರ ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಮತ್ತು ಜೆಡಿಯು ಒಟ್ಟಾಗಿ ಸ್ಪರ್ಧಿಸಲಿವೆ. ಈ ಬಗ್ಗೆ ಯಾವುದೇ ಗೊಂದಲವಿಲ್ಲ ಎಂದರು.

SCROLL FOR NEXT