ನಾಂದೇಡ್: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ಭಾರತ್ ಜೋಡೋ ಯಾತ್ರೆ ಮಂಗಳವಾರ ಮಹಾರಾಷ್ಟ್ರ ಪ್ರವೇಶಿಸಿದ್ದು, ಯಾತ್ರೆಯಲ್ಲಿ ಭಾಗವಹಿಸಿದ್ದ ನಾಂದೇಡ್ ಜಿಲ್ಲೆಯ ಕಾಂಗ್ರೆಸ್ ಸೇವಾದಳದ ಮುಖಂಡರೊಬ್ಬರು ಹೃದಯಾಘಾತದಿಂದ ನಿಧನರಾಗಿದ್ದಾರೆ.
ಅಖಿಲ ಭಾರತ ಕಾಂಗ್ರೆಸ್ ಸೇವಾ ದಳದ ಪ್ರಧಾನ ಕಾರ್ಯದರ್ಶಿ ಕೃಷ್ಣ ಕುಮಾರ್ ಪಾಂಡೆ ಅವರು, ಪಕ್ಷದ ಭಾರತ್ ಜೋಡೋ ಯಾತ್ರೆಯ ವೇಳೆ ಕುಸಿದುಬಿದ್ದು ಸಾವನ್ನಪ್ಪಿದ್ದಾರೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಯಾತ್ರೆಯ ನೇತೃತ್ವ ವಹಿಸಿರುವ ಹಿರಿಯ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಸೇವಾದಳದ ಪ್ರಧಾನ ಕಾರ್ಯದರ್ಶಿ ಕೃಷ್ಣಕುಮಾರ್ ಪಾಂಡೆ ಅವರ ನಿಧನಕ್ಕೆ ತೀವ್ರ ಸಂತಾಪ ಸೂಚಿಸಿದ್ದಾರೆ.
ಹಿರಿಯ ಕಾಂಗ್ರೆಸ್ ನಾಯಕರಾದ ಜೈರಾಮ್ ರಮೇಶ್, ದಿಗ್ವಿಜಯ್ ಸಿಂಗ್ ಮತ್ತು ಇತರ ನಾಯಕರೊಂದಿಗೆ ರಾಷ್ಟ್ರಧ್ವಜ ಹಿಡಿದು ಸಾಗುತ್ತಿದ್ದ ವೇಳೆ ಕುಸಿದು ಬಿದ್ದಿದ್ದಾರೆ. ಪಾಂಡೆ ಅವರಿಗೆ ಉಸಿರಾಟದ ತೊಂದರೆ ಮತ್ತು ಅಸ್ವಸ್ಥತೆ ಉಂಟಾಗಿದೆ ಎಂದು ಜಿಲ್ಲೆಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಪಾಂಡೆ ಕೊನೆಯ ಕ್ಷಣದವರೆಗೂ ರಾಷ್ಟ್ರಧ್ವಜವನ್ನು ಹಿಡಿದಿದ್ದರು ಎಂದು ಪಕ್ಷದ ಮುಖಂಡರು ತಿಳಿಸಿದ್ದಾರೆ.
ಪಾಂಡೆ ಅವರನ್ನು ತಕ್ಷಣ ಆಂಬ್ಯುಲೆನ್ಸ್‌ನಲ್ಲಿ ಶಂಕರ್ ನಗರ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದೊಯ್ಯಲಾಯಿತು. ಆದರೆ ವೈದ್ಯರು ಮೃತಪಟ್ಟಿದ್ದಾರೆ ಎಂದು ಘೋಷಿಸಿದರು. ಮೃತ ಕಾಂಗ್ರೆಸ್ ಮುಖಂಡ ನಾಗ್ಪುರದ ನಿವಾಸಿ ಎಂದು ಅಧಿಕಾರಿ ಹೇಳಿದ್ದಾರೆ.