ದೇಶ

ಮಧುರೈ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ, ಐವರು ಸಾವು; 5 ಲಕ್ಷ ರೂ ಪರಿಹಾರ ಘೋಷಿಸಿದ ಸಿಎಂ ಸ್ಟಾಲಿನ್

Lingaraj Badiger

ಮಧುರೈ: ಮಧುರೈ ಜಿಲ್ಲೆಯ ತಿರುಮಂಗಲಂ ಸಮೀಪದ ಅಲಗುಸಿರೈ ಗ್ರಾಮದ ಖಾಸಗಿ ಪಟಾಕಿ ಕಾರ್ಖಾನೆಯಲ್ಲಿ ಗುರುವಾರ ಸ್ಫೋಟ ಸಂಭವಿಸಿದ್ದು, ಘಟನೆಯಲ್ಲಿ ಐವರು ಸಾವನ್ನಪ್ಪಿದ್ದಾರೆ ಮತ್ತು 10ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.

ಎ ಅನುಸಿಯಾ ಒಡೆತನದ ಕಾರ್ಖಾನೆಯಲ್ಲಿ 15ಕ್ಕೂ ಹೆಚ್ಚು ಜನರು ಪಟಾಕಿ ತಯಾರಿಕೆಯಲ್ಲಿ ತೊಡಗಿದ್ದಾಗ ಈ ಘಟನೆ ನಡೆದಿದೆ ಎಂದು ಮೂಲಗಳು ತಿಳಿಸಿವೆ. ಆದರೆ ಸ್ಫೋಟಕ್ಕೆ ಕಾರಣ ಇನ್ನೂ ತಿಳಿದುಬಂದಿಲ್ಲ.

ಮೃತರನ್ನು ಅಮ್ಮಾವಸಾಯಿ, ವಲ್ಲರಸು, ಗೋಪಿ, ವಿಕ್ಕಿ ಮತ್ತು ಪ್ರೇಮಾ ಎಂದು ಗುರುತಿಸಲಾಗಿದೆ. ಜಯಪಾಂಡಿ, ಕರುಪಸಾಮಿ, ಮಹಾಲಕ್ಷ್ಮಿ ಸೇರಿದಂತೆ ಗಾಯಾಳುಗಳನ್ನು ಚಿಕಿತ್ಸೆಗಾಗಿ ಸರ್ಕಾರಿ ರಾಜಾಜಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಉಳಿದವರು ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಜಿಲ್ಲಾಡಳಿತ, ಅಗ್ನಿಶಾಮಕ ದಳ, ಪೊಲೀಸ್ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ಆರಂಭಿಸಿದ್ದಾರೆ.

ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಅವರು ತೀವ್ರ ಸಂತಾಪ ಸೂಚಿಸಿದ್ದು, ಮೃತರ ಕುಟುಂಬಗಳಿಗೆ ತಲಾ ಐದು ಲಕ್ಷ ರೂಪಾಯಿ ಪರಿಹಾರ ನೀಡುವುದಾಗಿ ಘೋಷಿಸಿದ್ದಾರೆ. ಅಲ್ಲದೆ ಗಾಯಗೊಂಡವರಿಗೆ ಸರ್ಕಾರಿ ರಾಜಾಜಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ವಿಶೇಷ ಚಿಕಿತ್ಸೆ ನೀಡುವಂತೆ ಸೂಚಿಸಿದ್ದಾರೆ.

SCROLL FOR NEXT