ದೇಶ

ಮಲಗಿದ್ದಾಗ 9 ವರ್ಷದ ಬಾಲಕಿ ಅಪಹರಿಸಿ ಅತ್ಯಾಚಾರ; ಆಕೆಯ ಸ್ಥಿತಿ ಗಂಭೀರ ಎಂದ ಪೊಲೀಸರು

Ramyashree GN

ಇಂದೋರ್: ಮಧ್ಯಪ್ರದೇಶದ ಇಂದೋರ್ ನಗರದಲ್ಲಿ ಒಂಬತ್ತು ವರ್ಷದ ಬಾಲಕಿಯನ್ನು ಕಟ್ಟಡ ನಿರ್ಮಾಣ ಸ್ಥಳದಿಂದ ಅಪಹರಿಸಿ ವ್ಯಕ್ತಿಯೊಬ್ಬ ಅತ್ಯಾಚಾರವೆಸಗಿದ್ದಾನೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.

ಹಲ್ಲೆಯಿಂದ ಗಾಯಗೊಂಡಿರುವ ಸಂತ್ರಸ್ತೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆಕೆಯ ಸ್ಥಿತಿ ಗಂಭೀರವಾಗಿದೆ ಎಂದು ಇಂದೋರ್‌ನ ಉಪ ಪೊಲೀಸ್ ಆಯುಕ್ತ ಅಮಿತ್ ತೋಲಾನಿ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಬಾಲಕಿಯ ತಂದೆ ಸೆಕ್ಯುರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದ ರಾಜೇಂದ್ರ ನಗರ ಪ್ರದೇಶದಲ್ಲಿ ನಿರ್ಮಾಣ ಹಂತದಲ್ಲಿರುವ ಕಟ್ಟಡದ ಸ್ಥಳದಲ್ಲಿ ಶುಕ್ರವಾರ ಮತ್ತು ಶನಿವಾರದ ಮಧ್ಯರಾತ್ರಿ ಘಟನೆ ನಡೆದಿದೆ ಎಂದು ಅವರು ಹೇಳಿದರು.

ಬಾಲಕಿಯು ತನ್ನ ಪೋಷಕರೊಂದಿಗೆ ಗುಡಿಸಲಿನಂತಹ ಸಣ್ಣ ರಚನೆಯಲ್ಲಿ ಮಲಗಿದ್ದಾಗ 32 ವರ್ಷದ ಆರೋಪಿ ಆಕೆಯನ್ನು ಅಪಹರಿಸಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಆರೋಪಿ ಬಾಲಕಿಯನ್ನು ನಿರ್ಮಾಣ ಸ್ಥಳದ ಇನ್ನೊಂದು ಬದಿಗೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾನೆ. ಹಲ್ಲೆಯಿಂದ ಸಂತ್ರಸ್ತೆಗೆ ಗಂಭೀರ ಗಾಯಗಳಾಗಿದ್ದು, ತೀವ್ರ ರಕ್ತಸ್ರಾವವಾಗಿದೆ. ಬಾಲಕಿಯು ಅಳುವುದನ್ನು ಕೇಳಿದ ಆಕೆಯ ಪೋಷಕರು ಆಕೆಯ ರಕ್ಷಣೆಗೆ ಮುಂದಾಗಿದ್ದಾರೆ. ಕೂಡಲೇ ಆಕೆಯನ್ನು ಸಮೀಪದ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದ್ದು, ಪೊಲೀಸರಿಗೆ ಮಾಹಿತಿ ನೀಡಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಈ ಪ್ರದೇಶದ ಸಿಸಿಟಿವಿ ದೃಶ್ಯಾವಳಿಗಳನ್ನು ಆಧರಿಸಿ, ಇಂದೋರ್ ಜಿಲ್ಲೆಯ ಅಹಿರ್ಖೇಡಿ ಗ್ರಾಮದ ನಿವಾಸಿಯಾಗಿರುವ ಆರೋಪಿಯನ್ನು ಶನಿವಾರ ಸಂಜೆ ಬಂಧಿಸಲಾಗಿದ್ದು, ತಪ್ಪೊಪ್ಪಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಅಪಹರಣ, ಅತ್ಯಾಚಾರ ಮತ್ತು ಭಾರತೀಯ ದಂಡ ಸಂಹಿತೆಯ ಇತರ ಸೆಕ್ಷನ್‌ಗಳು ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೊಕ್ಸೊ) ಕಾಯ್ದೆಯಡಿಯಲ್ಲಿ ಆರೋಪಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

SCROLL FOR NEXT