ದೇಶ

ಆಪ್ ನಾಯಕ ಸತ್ಯೇಂದರ್ ಜೈನ್ ಗೆ ಜಾಮೀನು ನಿರಾಕರಿಸಿದ ದೆಹಲಿ ಕೋರ್ಟ್

Lingaraj Badiger

ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಎಎಪಿ ನಾಯಕ ಸತ್ಯೇಂದ್ರ ಜೈನ್ ಮತ್ತು ಇತರ ಇಬ್ಬರಿಗೆ ರೋಸ್ ಅವೆನ್ಯೂ ನ್ಯಾಯಾಲಯ ಗುರುವಾರ ಜಾಮೀನು ನಿರಾಕರಿಸಿದೆ.

ಜೈನ್ ಜಾಮೀನು ಅರ್ಜಿ ವಿಚಾರಣೆ ನಡೆಸಿದ ವಿಶೇಷ ನ್ಯಾಯಾಧೀಶ ವಿಕಾಸ್ ಧುಲ್ ಅವರು ಜೈನ್ ಅವರ ಅರ್ಜಿಯನ್ನು ತಿರಸ್ಕರಿಸಿದ್ದಾರೆ.

ಜೈನ್ ಅವರು ಕಪ್ಪುಹಣವನ್ನು ಬಿಳಿಯಾಗಿ ಪರಿವರ್ತಿಸುವಲ್ಲಿ ಮಾತ್ರವಲ್ಲದೆ ಸಾಕ್ಷ್ಯಗಳನ್ನು ತಿರುಚುವಲ್ಲಿಯೂ ತೊಡಗಿಸಿಕೊಂಡಿದ್ದಾರೆ ಮತ್ತು ತನಿಖೆ ದಾರಿತಪ್ಪಿಸಿದ್ದಾರೆ ಎಂದು ಆರೋಪಿಸಿದ ಇಡಿ, ಜಾಮೀನಿಗೆ ತೀವ್ರ ವಿರೋಧ ವ್ಯಕ್ತಪಡಿಸಿತು.

ಜೈನ್ ಪರ ವಾದ ಮಂಡಿಸಿದ ವಕೀಲ ಎನ್ ಹರಿಹರನ್ ಅವರು, ಚಾರ್ಜ್ ಶೀಟ್ ಸಲ್ಲಿಕೆಯಾಗಿದೆ ಮತ್ತು ತನಿಖೆ ಮುಗಿದಿದೆ. ಅಲ್ಲದೆ ತಮ್ಮ ಕಕ್ಷಿದಾರರು ಯಾವುದೇ ಅಕ್ರಮ ಹಣ ವರ್ಗಾವಣೆಯಲ್ಲಿ ಭಾಗಿಯಾಗಿಲ್ಲ. ಅವರಿಗೆ ಜಾಮೀನು ನೀಡಬೇಕು ಎಂದು ಮನವಿ ಮಾಡಿದರು. ಆದರೆ ಜೈನ್ ಮನವಿಯನ್ನು ಕೋರ್ಟ್ ತಿರಸ್ಕರಿಸಿದೆ.

ಭ್ರಷ್ಟಾಚಾರ ತಡೆ ಕಾಯ್ದೆಯಡಿ 2017 ರಲ್ಲಿ ಜೈನ್ ವಿರುದ್ಧ ಸಿಬಿಐ ಎಫ್‌ಐಆರ್ ದಾಖಲಿಸಿದ ಆಧಾರದ ಮೇಲೆ ಜಾರಿ ನಿರ್ದೇಶನಾಲಯ ಅಕ್ರಮ ಹಣ ವರ್ಗಾವಣೆ ಪ್ರಕರಣದ ಆರೋಪಿಗಳನ್ನು ಬಂಧಿಸಿತ್ತು.

ಜೈನ್ ಅವರೊಂದಿಗೆ ನಂಟು ಹೊಂದಿರುವ ನಾಲ್ಕು ಕಂಪನಿಗಳ ಮೂಲಕ ಹಣ ಲಪಟಾಯಿಸಿದ್ದಾರೆ ಎಂದು ಆರೋಪಿಸಲಾಗಿದೆ.

SCROLL FOR NEXT