ದೇಶ

ಶಿಕ್ಷಣ ಸಂಸ್ಥೆಗಳಲ್ಲಿ ಸಾಮಾನ್ಯ ಡ್ರೆಸ್ ಕೋಡ್‌ ಕೋರಿ ಸಲ್ಲಿಸಿದ್ದ ಪಿಐಎಲ್ ವಜಾಗೊಳಿಸಿದ ಸುಪ್ರೀಂ ಕೋರ್ಟ್

Lingaraj Badiger

ನವದೆಹಲಿ: ನೋಂದಾಯಿತ ಶಿಕ್ಷಣ ಸಂಸ್ಥೆಗಳಲ್ಲಿ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳಿಗೆ ಸಾಮಾನ್ಯ ಡ್ರೆಸ್ ಕೋಡ್ ಜಾರಿಗೊಳಿಸಲು ಕೇಂದ್ರ, ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ನಿರ್ದೇಶನ ನೀಡುವಂತೆ ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ವಜಾಗೊಳಿಸಿದೆ.

ನ್ಯಾಯಮೂರ್ತಿಗಳಾದ ಹೇಮಂತ್ ಗುಪ್ತಾ ಮತ್ತು ಸುಧಾಂಶು ಧುಲಿಯಾ ಅವರ ಪೀಠ, ಇದು ತೀರ್ಪಿಗಾಗಿ ನ್ಯಾಯಾಲಯಕ್ಕೆ ಬರಬೇಕಾದ ವಿಷಯವಲ್ಲ ಎಂದು ಹೇಳಿದೆ.

ಸಮಾನತೆ, ಭ್ರಾತೃತ್ವ ಮತ್ತು ರಾಷ್ಟ್ರೀಯ ಏಕೀಕರಣವನ್ನು ಉತ್ತೇಜಿಸಲು ನೋಂದಾಯಿತ ಶಿಕ್ಷಣ ಸಂಸ್ಥೆಗಳಲ್ಲಿ ಡ್ರೆಸ್ ಕೋಡ್ ಅನ್ನು ಜಾರಿಗೊಳಿಸಬೇಕು ಎಂದು ಪಿಐಎಲ್ ವಾದಿಸಿದೆ.

ಸಾರ್ವಜನಿಕ ಹಿತಾಸಕ್ತಿ ಅರ್ಜಿದಾರ ನಿಖಿಲ್ ಉಪಾಧ್ಯಾಯ ಪರ ವಾದ ಮಂಡಿಸಿದ ಹಿರಿಯ ವಕೀಲ ಗೌರವ್ ಭಾಟಿಯಾ ಅವರು, ಇದೊಂದು ಸಾಂವಿಧಾನಿಕ ಸಮಸ್ಯೆಯಾಗಿದ್ದು, ಶಿಕ್ಷಣ ಹಕ್ಕು ಕಾಯ್ದೆಯಡಿ ನಿರ್ದೇಶನ ನೀಡುವಂತೆ ಕೋರಿದ್ದರು. ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಪರಿಗಣಿಸಲು ಪೀಠ ಒಲವು ತೋರದ ಹಿನ್ನೆಲೆಯಲ್ಲಿ ವಕೀಲರು ಅರ್ಜಿ ಹಿಂಪಡೆದಿದ್ದಾರೆ.

ಕರ್ನಾಟಕ 'ಹಿಜಾಬ್' ವಿವಾದದ ಹಿನ್ನೆಲೆಯಲ್ಲಿ ಈ ಅರ್ಜಿ ಸಲ್ಲಿಸಲಾಗಿತ್ತು.

ನ್ಯಾಯಮೂರ್ತಿ ಗುಪ್ತಾ ನೇತೃತ್ವದ ಇದೇ ಪೀಠ, ರಾಜ್ಯದ ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ನಿಷೇಧ ತೆರವುಗೊಳಿಸಲು ನಿರಾಕರಿಸಿದ ಕರ್ನಾಟಕ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಸಲ್ಲಿಸಿದ ಮೇಲ್ಮನವಿ ಅರ್ಜಿಗಳ ವಿಚಾರಣೆ ನಡೆಸುತ್ತಿದೆ.

SCROLL FOR NEXT