ದೇಶ

ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆಗೆ ಮುನ್ನ ಸೋನಿಯಾ ಗಾಂಧಿ ಭೇಟಿ ಮಾಡಿದ ಶಶಿ ತರೂರ್

Ramyashree GN

ನವದೆಹಲಿ: ಕಾಂಗ್ರೆಸ್ ಅಧ್ಯಕ್ಷರ ಆಯ್ಕೆ ಚುನಾವಣೆಗೂ ಮುನ್ನ ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಸೋಮವಾರ ಪಕ್ಷದ ಹಂಗಾಮಿ ಮುಖ್ಯಸ್ಥೆ ಸೋನಿಯಾ ಗಾಂಧಿ ಅವರನ್ನು ಅವರ ನಿವಾಸದಲ್ಲಿ ಭೇಟಿ ಮಾಡಿದರು. ಆದರೆ, ಸಭೆಯಲ್ಲಿ ಏನಾಯಿತು ಎಂಬುದನ್ನು ಅವರು ಬಹಿರಂಗಪಡಿಸಿಲ್ಲ.

ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆಯು ಅಕ್ಟೋಬರ್ 17ರಂದು ನಡೆಯಲಿದೆ.

ದೀಪೇಂದರ್ ಹೂಡಾ, ಜೈ ಪ್ರಕಾಶ್ ಅಗರ್‌ವಾಲ್ ಮತ್ತು ವಿಜೇಂದ್ರ ಸಿಂಗ್ ಅವರೊಂದಿಗೆ ಶಶಿ ತರೂರ್ 10 ಜನಪತ್ ರಸ್ತೆಯಲ್ಲಿರುವ ನಿವಾಸಕ್ಕೆ ತೆರಳಿ ಸೋನಿಯಾ ಅವರನ್ನು ಭೇಟಿ ಮಾಡಿದರು.

ತರೂರ್ ಅವರು ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆಯಲ್ಲಿ ಸ್ಪರ್ಧಿಸುತ್ತಾರೆ ಮತ್ತು ಸೆಪ್ಟೆಂಬರ್ 25 ರಂದು ಪ್ರಾರಂಭವಾಗುವ ನಾಮಪತ್ರ ಸಲ್ಲಿಕೆ ಪ್ರಕ್ರಿಯೆಯಲ್ಲಿ ತಮ್ಮ ನಾಮಪತ್ರ ಸಲ್ಲಿಸಬಹುದು ಎಂದು ಮೂಲಗಳು ಹೇಳಿರುವ ಬೆನ್ನಲ್ಲೇ ತರೂರ್ ಅವರು ಸೋನಿಯಾ ಅವರನ್ನು ಭೇಟಿ ಮಾಡಿದ್ದಾರೆ.

ಕಾಂಗ್ರೆಸ್ ಅಧ್ಯಕ್ಷರ ಚುನಾವಣೆಗೆ ಸೆಪ್ಟೆಂಬರ್ 22 ರಂದು ಅಧಿಸೂಚನೆ ಹೊರಡಿಸಲಿದ್ದು, ಅಕ್ಟೋಬರ್ 8 ರೊಳಗೆ ಅಭ್ಯರ್ಥಿಗಳು ತಮ್ಮ ನಾಮಪತ್ರಗಳನ್ನು ಹಿಂಪಡೆಯಬಹುದು.

ಪಕ್ಷದ ನಾಯಕತ್ವ ಬದಲಾಗಬೇಕು, ರಚನಾತ್ಮಕವಾಗಿಯೂ ಪಕ್ಷದಲ್ಲಿ ಕೆಲವು ಬದಲಾವಣೆಗಳು ಆಗಬೇಕು ಎಂದು ಒತ್ತಾಯಿಸಿ 2020ರ ಆಗಸ್ಟ್‌ ತಿಂಗಳಲ್ಲಿ ಪಕ್ಷದ 23 ನಾಯಕರ ಗುಂಪು (ಜಿ–23) ಸೋನಿಯಾ ಗಾಂಧಿ ಅವರಿಗೆ ಪತ್ರ ಬರೆದಿತ್ತು. ಈ ಗುಂಪಿನಲ್ಲಿ ಒತ್ತಾಯ ಮಾಡಿದ್ದ ವಿಚಾರಗಳನ್ನು ತರೂರ್ ಬೆಂಬಲಿಸಿದ್ದರು.

ಜಾರ್ಖಂಡ್ ಪ್ರಧಾನ ಕಾರ್ಯದರ್ಶಿ, ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ಅವಿನಾಶ್ ಪಾಂಡೆ ಕೂಡ ಸೋನಿಯಾ ಗಾಂಧಿ ಅವರನ್ನು ಅವರ ನಿವಾಸದಲ್ಲಿ ಭೇಟಿಯಾಗಿ ರಾಜ್ಯದ ರಾಜಕೀಯ ಪರಿಸ್ಥಿತಿಯ ಬಗ್ಗೆ ಚರ್ಚಿಸಿದ್ದಾರೆ ಎಂದು ತಿಳಿದುಬಂದಿದೆ.

ಲೋಕಸಭಾ ಚುನಾವಣೆಯಲ್ಲಿ ಪಕ್ಷದ ಕಳಪೆ ಸಾಧನೆಯ ಹೊಣೆ ಹೊತ್ತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪಕ್ಷದ ಅಧ್ಯಕ್ಷ ಸ್ಥಾನಕ್ಕೆ 2019ರಲ್ಲಿ ರಾಜೀನಾಮೆ ನೀಡಿದಾಗಿನಿಂದಲೂ ಅಧ್ಯಕ್ಷ ಹುದ್ದೆ ಖಾಲಿ ಇದೆ. ಸೋನಿಯಾ ಗಾಂಧಿ ಅವರನ್ನು ಹಂಗಾಮಿ ಅಧ್ಯಕ್ಷರನ್ನಾಗಿ ಪಕ್ಷದ ನಾಯಕರು ಆಯ್ಕೆ ಮಾಡಿದ್ದರು.

SCROLL FOR NEXT