ದೇಶ

ಉತ್ತರ ಪ್ರದೇಶದಲ್ಲಿ ಬಸ್ ಮತ್ತು ಮಿನಿ ಟ್ರಕ್ ನಡುವೆ ಮುಖಾಮುಖಿ ಡಿಕ್ಕಿ: ಎಂಟು ಸಾವು, 14 ಮಂದಿಗೆ ಗಾಯ

Ramyashree GN

ಲಖಿಂಪುರ ಖೇರಿ: ಖಾಸಗಿ ಬಸ್ ಮತ್ತು ಮಿನಿ ಟ್ರಕ್ ನಡುವೆ ಬುಧವಾರ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಅಪಘಾತದಲ್ಲಿ ಎಂಟು ಜನರು ಮೃತಪಟ್ಟಿದ್ದಾರೆ. 14 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಅಪಘಾತದ ಬಗ್ಗೆ ಸಂತಾಪ ವ್ಯಕ್ತಪಡಿಸಿರುವ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಧೌರ್ಹರಾದಿಂದ ಲಖನೌಗೆ ತೆರಳುತ್ತಿದ್ದ ಬಸ್‌, ರಾಷ್ಟ್ರೀಯ ಹೆದ್ದಾರಿ ಸಂಖ್ಯೆ 730 ರಲ್ಲಿ ಐರಾ ಸೇತುವೆಯ ಮೇಲೆ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಮಿನಿ ಟ್ರಕ್‌ಗೆ ಡಿಕ್ಕಿ ಹೊಡೆದಿದೆ. ಸಾವಿನ ಸಂಖ್ಯೆ ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇದೆ ಎಂದು ಉಪ ಪೊಲೀಸ್ ವರಿಷ್ಠಾಧಿಕಾರಿ ಪ್ರೀತಮ್ ಪಾಲ್ ಸಿಂಗ್ ತಿಳಿಸಿದ್ದಾರೆ.

ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕಾಗಮಿಸಿ ಗ್ಯಾಸ್ ಕಟರ್ ನಿಂದ ಬಸ್ಸನ್ನು ಕತ್ತರಿಸಿ ಗಾಯಾಳುಗಳನ್ನು ರಕ್ಷಿಸಿದ್ದಾರೆ. ಸದ್ಯ ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದ್ದು, ಮೃತರನ್ನು ಗುರುತಿಸುವ ಪ್ರಯತ್ನ ನಡೆಯುತ್ತಿದೆ ಎಂದು ಡಿಎಸ್‌ಪಿ ತಿಳಿಸಿದ್ದಾರೆ.

ಯುದ್ಧೋಪಾದಿಯಲ್ಲಿ ಪರಿಹಾರ ಕಾರ್ಯಗಳನ್ನು ಕೈಗೊಳ್ಳಲು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಆದೇಶ ನೀಡಿದ್ದಾರೆ ಎಂದು ವಕ್ತಾರರು ತಿಳಿಸಿದ್ದಾರೆ.

SCROLL FOR NEXT