ನವದೆಹಲಿ: ಭಾರತದ ಕುಸ್ತಿ ಒಕ್ಕೂಟದ ಮುಖ್ಯಸ್ಥ ಮತ್ತು ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಹಲವಾರು ಅಥ್ಲೀಟ್‌ಗಳಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆಂದು ಆರೋಪಿಸಿ ಹಲವು ದಿನಗಳಿಂದ ಪ್ರತಿಭಟನೆ ನಡೆಸುತ್ತಿರುವ ಕುಸ್ತಿಪಟುಗಳನ್ನು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿಯವರು ಶನಿವಾರ ಭೇಟಿ ಮಾಡಿದರು.
ದೆಹಲಿಯ ಜಂತರ್ ಮಂತರ್'ಗೆ ಭೇಟಿ ನೀಡಿದ ಪ್ರಿಯಾಂಕಾ ಗಾಂಧಿಯವರು ಪ್ರತಿಭಟನಾನಿರತ ಕುಸ್ತಿಪಟುಗಳ ಭೇಟಿ ಮಾಡಿ, ಮಾತುಕತೆ ನಡೆಸಿದರು.
ಕುಸ್ತಿಪಟುಗಳ ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಪ್ರಿಯಾಂಕಾ ಗಾಂಧಿಯವರು, ಪ್ರಧಾನಿ ಮೋದಿಯವರಿಂದ ನನಗೆ ಯಾವುದೇ ನಿರೀಕ್ಷೆ ಇಲ್ಲ, ಏಕೆಂದರೆ ಅವರು ಈ ಕುಸ್ತಿಪಟುಗಳ ಬಗ್ಗೆ ಚಿಂತೆ ಮಾಡಿರುವುದೇ ಆದರೆ, ಅವರೇಕೆ ಇನ್ನೂ ಕುಸ್ತಿಪಟುಗಳನ್ನು ಭೇಟಿ ಮಾಡಿಲ್ಲ, ಮಾತುಕತೆ ನಡೆಸಿಲ್ಲ ಎಂದು ಪ್ರಶ್ನಿಸಿದ್ದಾರೆ.
ಇದನ್ನೂ ಓದಿ: ತಪ್ಪು ಮಾಡಿಲ್ಲ, ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ; ಎಫ್ಐಆರ್ ಬೆನ್ನಲ್ಲೇ ಡಬ್ಲ್ಯುಎಫ್ಐ ಅಧ್ಯಕ್ಷ ಬ್ರಿಜ್ ಭೂಷಣ್ ಹೇಳಿಕೆ
ಪ್ರತಿಭಟನಾನಿರತ ಕುಸ್ತಿಪಟುಗಳೊಂದಿಗೆ ಇಡೀ ದೇಶ ನಿಂತಿದೆ. ಕುಸ್ತಿಪಟುಗಳು ಇದರ ವಿರುದ್ಧ ಧ್ವನಿ ಎತ್ತಿದ್ದಕ್ಕಾಗಿ ನನಗೆ ತುಂಬಾ ಹೆಮ್ಮೆ ಇದೆ ಎಂದು ಹೇಳಿದ್ದಾರೆ,
ಪ್ರಸ್ತುತ ಪೊಲೀಸರು ದಾಖಲಿಸಿರುವ ಎಫ್‌ಐಆರ್‌ನಲ್ಲಿ ಏನಿದೆ ಎಂಬುದು ಯಾರಿಗೂ ತಿಳಿದಿಲ್ಲ. ಎಫ್ಐಆರ್'ನ್ನೇಕೆ ಪೊಲೀಸರು ತೋರಿಸುತ್ತಿಲ್ಲ? ಈ ಕುಸ್ತಿಪಟುಗಳು ಪದಕಗಳನ್ನು ಗೆದ್ದಾಗ ನಾವೆಲ್ಲರೂ ಟ್ವೀಟ್ ಮಾಡಿ ಹೆಮ್ಮೆ ಪಡುತ್ತೇವೆ. ಆದರೆ, ಇಂತಹ ಕುಸ್ತಿಪಟುಗಳು ರಸ್ತೆಯಲ್ಲಿ ಕುಳಿತಿದ್ದು, ನ್ಯಾಯಕ್ಕಾಗಿ ಮೊರೆ ಇಡುತ್ತಿದ್ದಾರೆ. ಈ ಎಲ್ಲಾ ಮಹಿಳಾ ಕುಸ್ತಿಪಟುಗಳು ಈ ಹಂತಕ್ಕೆ ಬರಲು ಸಾಕಷ್ಟು ಕಷ್ಟಪಡುತ್ತಾರೆ. ಸರ್ಕಾರವು ಸಂಸದನ್ನೇಕೆ (ಬ್ರಿಜ್ ಭೂಷಣ್ ಶರಣ್ ಸಿಂಗ್) ರಕ್ಷಣೆ ಮಾಡುವ ಕೆಲಸ ಮಾಡುತ್ತಿದೆ ಎಂಬುದು ನನಗೆ ಅರ್ಥವಾಗುತ್ತಿಲ್ಲ ಎಂದು ತಿಳಿಸಿದ್ದಾರೆ.