ದೇಶ

ಅವಿಶ್ವಾಸ ನಿರ್ಣಯ: ಲೋಕಸಭೆಯಲ್ಲಿ ಇಂದು ಸಂಜೆ 4 ಗಂಟೆಗೆ ಪ್ರಧಾನಿ ನರೇಂದ್ರ ಮೋದಿ ಉತ್ತರ!

Ramyashree GN

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳ INDIA ಮೈತ್ರಿಕೂಟವು ಮಂಡಿಸಿರುವ ಅವಿಶ್ವಾಸ ನಿರ್ಣಯದ ಮೇಲಿನ ಚರ್ಚೆಗೆ ಗುರುವಾರ ಸಂಜೆ 4 ಗಂಟೆಗೆ ಲೋಕಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಉತ್ತರ ನೀಡಲಿದ್ದಾರೆ ಎಂದು ಪ್ರಧಾನಿ ಕಾರ್ಯಾಲಯ ತಿಳಿಸಿದೆ.

'ಇಂದು ಸಂಜೆ ಸುಮಾರು 4 ಗಂಟೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಅವಿಶ್ವಾಸ ನಿರ್ಣಯದ ಮೇಲಿನ ಚರ್ಚೆಯಲ್ಲಿ ಪಾಲ್ಗೊಳ್ಳಲಿದ್ದಾರೆ' ಎಂದು ಪ್ರಧಾನಮಂತ್ರಿ ಕಾರ್ಯಾಲಯ 'ಎಕ್ಸ್' (ಟ್ವಿಟರ್) ನಲ್ಲಿ ಪೋಸ್ಟ್ ಮಾಡಿದೆ. 

ಸಂಸತ್ತಿನ ಉಭಯ ಸದನಗಳಲ್ಲಿ ಆಡಳಿತ ಮತ್ತು ವಿರೋಧ ಪಕ್ಷಗಳ ನಡುವೆ ಮಣಿಪುರ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಭಾರಿ ಜಟಾಪಟಿ ನಡೆಯುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿಕೆ ನೀಡಬೇಕೆಂದು ಬಿಗಿಪಟ್ಟು ಹಿಡಿದಿರುವ ವಿರೋಧ ಪಕ್ಷಗಳು ಕೇಂದ್ರ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಿವೆ.

ಅವಿಶ್ವಾಸ ನಿರ್ಣಯ ಕುರಿತು ಲೋಕಸಭೆಯಲ್ಲಿ ಮಂಗಳವಾರದಿಂದ (ಆ.8) ಚರ್ಚೆ ಆರಂಭವಾಗಿದ್ದು, ಮಣಿಪುರ ಹಿಂಸಾಚಾರ ಕುರಿತಂತೆ ಕಾವೇರಿದೆ.

ಸಂಸತ್ತಿನ ಮುಂಗಾರು ಅಧಿವೇಶನ ಆರಂಭವಾದ ದಿನದಿಂದಲೂ ಮಣಿಪುರ ವಿಚಾರವು ಆಡಳಿತ ಮತ್ತು ವಿರೋಧ ಪಕ್ಷಗಳ ನಡುವಿನ ಹಗ್ಗಜಗ್ಗಾಟಕ್ಕೆ ಕಾರಣವಾಗಿದೆ. ಸದನದಲ್ಲಿ ಪ್ರಧಾನಿ ಹೇಳಿಕೆ ನೀಡಬೇಕೆಂದು ಬಿಗಿಪಟ್ಟು ಹಿಡಿದಿರುವ ವಿರೋಧ ಪಕ್ಷಗಳ ಒಕ್ಕೂಟವಾದ INDIA ದ ತಂತ್ರಗಾರಿಕೆ ಭಾಗವಾಗಿ ಅವಿಶ್ವಾಸ ನಿರ್ಣಯವನ್ನು ಮಂಡಿಸಲಾಗಿದೆ.

ಜುಲೈ 26 ರಂದು ಲೋಕಸಭೆಯಲ್ಲಿ ಮಂಡಿಸಿದ ಅವಿಶ್ವಾಸ ನಿರ್ಣಯವನ್ನು ಚರ್ಚೆಗೆ ತೆಗೆದುಕೊಳ್ಳಲು ಸ್ಪೀಕರ್ ಓಂ ಬಿರ್ಲಾ ಅವರು ಒಪ್ಪಿಗೆ ಸೂಚಿಸಿದ್ದಾರೆ.

SCROLL FOR NEXT