ದೇಶ

ಮಿಜೋರಾಂನಲ್ಲಿ ಸೇತುವೆ ಕುಸಿತ; ಮೃತರ ಕುಟುಂಬಕ್ಕೆ 10 ಲಕ್ಷ ಪರಿಹಾರ ಘೋಷಿಸಿದ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್

Ramyashree GN

ನವದೆಹಲಿ: ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಬುಧವಾರ ಮಿಜೋರಾಂನ ನಿರ್ಮಾಣ ಹಂತದ ರೈಲ್ವೆ ಸೇತುವೆ ಕುಸಿತ ಪ್ರಕರಣದಲ್ಲಿನ ಜೀವಹಾನಿಗೆ ಸಂತಾಪ ಸೂಚಿಸಿದ್ದಾರೆ ಮತ್ತು ಸಂತ್ರಸ್ತರ ಕುಟುಂಬಕ್ಕೆ ತಲಾ 10 ಲಕ್ಷ ರೂ. ಮತ್ತು ಗಾಯಗೊಂಡವರಿಗೆ ತಲಾ 2 ಲಕ್ಷ ರೂ. ಪರಿಹಾರವನ್ನು ಘೋಷಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, 'ಮಿಜೋರಾಂನಲ್ಲಿ ನಡೆದ ಅಹಿತಕರ ಘಟನೆಯಿಂದ ದುಃಖಿತನಾಗಿದ್ದೇನೆ. ಎನ್‌ಡಿಆರ್‌ಎಫ್, ರಾಜ್ಯ ಸರ್ಕಾರ ಮತ್ತು ರೈಲ್ವೆ ಅಧಿಕಾರಿಗಳು ಸ್ಥಳದಲ್ಲಿದ್ದಾರೆ. ಯುದ್ಧೋಪಾದಿಯಲ್ಲಿ ರಕ್ಷಣಾ ಕಾರ್ಯಾಚರಣೆ ಸಾಗಿದೆ. ಘಟನೆಯಲ್ಲಿ ಸಾವಿಗೀಡಾದವರ ಕುಟುಂಬಕ್ಕೆ ತಲಾ 10 ಲಕ್ಷ ರೂ., ಗಾಯಾಳುಗಳಿಗೆ 2 ಲಕ್ಷ ರೂ. ಮತ್ತು ಸಣ್ಣಪುಟ್ಟ ಗಾಯಗಳಿಗೆ 50,000 ರೂ. ನೀಡಲಾಗುವುದು' ಎಂದಿದ್ದಾರೆ.

ದುರಂತದಲ್ಲಿ ಮೃತಪಟ್ಟವರ ಕುಟುಂಬದವರಿಗೆ ಸಂತಾಪ ಸೂಚಿಸಿರುವ ಪ್ರಧಾನಮಂತ್ರಿ ಕಾರ್ಯಾಲಯ, ಗಾಯಾಳುಗಳು ಶೀಘ್ರವೇ ಚೇತರಿಸಿಕೊಳ್ಳಲಿ, ರಕ್ಷಣಾ ಕಾರ್ಯಾಚರಣೆಗೆ ಅಗತ್ಯ ನೆರವು ನೀಡಲಾಗುವುದು ಎಂದಿದೆ. ಅಲ್ಲದೆ, ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂ. ಹಾಗೂ ಗಾಯಾಳುಗಳಿಗೆ 50 ಸಾವಿರ ರೂ. ನೆರವು ಘೋಷಿಸಿದೆ.

ಮಿಜೋರಾಂನಲ್ಲಿ ನಿರ್ಮಾಣ ಹಂತದಲ್ಲಿರುವ ರೈಲ್ವೆ ಸೇತುವೆ ಕುಸಿದು ಕನಿಷ್ಠ 17 ಜನರು ಸಾವಿಗೀಡಾಗಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ.

'ಘಟನೆಯನ್ನು ತನಿಖೆ ಮಾಡಲು ಉನ್ನತ ಮಟ್ಟದ ವಿಚಾರಣಾ ಸಮಿತಿಯನ್ನು ರಚಿಸಲಾಗಿದೆ' ಎಂದು ಉತ್ತರ ಫ್ರಾಂಟಿಯರ್ ರೈಲ್ವೆ ಅಧಿಕಾರಿ ತಿಳಿಸಿದ್ದಾರೆ.

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸೇತುವೆ ಕುಸಿದು ಮೃತಪಟ್ಟವರ ಕುಟುಂಬಕ್ಕೆ ಸಂತಾಪ ಸೂಚಿಸಿದ್ದಾರೆ ಮತ್ತು ಗಾಯಾಳುಗಳು ಶೀಘ್ರವೇ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಖರ್ಗೆ, 'ಮಿಜೋರಾಂನ ಸಾಯಿರಾಂಗ್ ಪ್ರದೇಶದಲ್ಲಿ ನಿರ್ಮಾಣ ಹಂತದಲ್ಲಿದ್ದ ರೈಲ್ವೆ ಸೇತುವೆ ಕುಸಿದು, ಕಾರ್ಮಿಕರು ಸೇರಿದಂತೆ ಹಲವರು ಸಾವಿಗೀಡಾದ ಭೀಕರ ದುರಂತದ ಬಗ್ಗೆ ತಿಳಿದು ತೀವ್ರ ದುಃಖವಾಯಿತು. ಗಾಯಾಳುಗಳು ಶೀಘ್ರ ಚೇತರಿಸಿಕೊಳ್ಳಲಿ. ರಕ್ಷಣಾ ಮತ್ತು ಪರಿಹಾರ ಕಾರ್ಯವನ್ನು ತ್ವರಿತಗೊಳಿಸುವಂತೆ ನಾವು ಅಧಿಕಾರಿಗಳನ್ನು ಒತ್ತಾಯಿಸುತ್ತೇವೆ. ಇದರಿಂದ ಅಮೂಲ್ಯ ಜೀವಗಳನ್ನು ಉಳಿಸಬಹುದು' ಎಂದಿದ್ದಾರೆ.

ರೈಲ್ವೆ ಮತ್ತು ಪೊಲೀಸ್ ಅಧಿಕಾರಿಗಳ ಪ್ರಕಾರ, ಘಟನೆಯಲ್ಲಿ ಇದುವರೆಗೆ 17 ಮೃತದೇಹಗಳು ಪತ್ತೆಯಾಗಿವೆ.

ಬುಧವಾರ ಬೆಳಗ್ಗೆ ದುರ್ಘಟನೆ ಸಂಭವಿಸಿದ್ದು, ಆಗ ಸುಮಾರು 40 ಮಂದಿ ಕಾರ್ಮಿಕರು ಸ್ಥಳದಲ್ಲಿದ್ದರು. ಇತರ ಹಲವು ಕಾರ್ಮಿಕರು ಅಪಘಾತದ ಸ್ಥಳದಲ್ಲಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ.

ಕುರುಂಗ್ ನದಿ ಮೇಲೆ ನಿರ್ಮಾಣವಾಗುತ್ತಿದ್ದ ರೈಲ್ವೆ ಸೇತುವೆಯು ಬೈರಾಬಿಯಿಂದ ಸಾಯಿರಾಂಗ್ ಅನ್ನು ಸಂಪರ್ಕಿಸುತ್ತದೆ.

SCROLL FOR NEXT