ಅಹಮದಾಬಾದ್: "ಗುಜರಾತಿಗಳು ಮಾತ್ರ ವಂಚಕರು" ಎಂದು ಟೀಕಿಸಿದ್ದಕ್ಕಾಗಿ ಬಿಹಾರ ಉಪಮುಖ್ಯಮಂತ್ರಿ ತೇಜಸ್ವಿ ಯಾದವ್ ಅವರ ವಿರುದ್ಧ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ದಾಖಲಿಸಲಾಗಿದ್ದು, ಈ ಸಂಬಂಧ ಅಹಮದಾಬಾದ್ ಮೆಟ್ರೋಪಾಲಿಟನ್ ನ್ಯಾಯಾಲಯ ಸೋಮವಾರ ಸಮನ್ಸ್ ಜಾರಿ ಮಾಡಿದೆ.
ಪ್ರಕರಣ ಸಂಬಂಧ ಸೆಪ್ಟೆಂಬರ್ 22 ರಂದು ಹೆಚ್ಚುವರಿ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ಹಾಜರಾಗುವಂತೆ ತೇಜಸ್ವಿ ಯಾದವ್ ಅವರಿಗೆ ನ್ಯಾಯಾಲಯ ಸೂಚಿಸಿದೆ.
ಹೆಚ್ಚುವರಿ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಇಂದು ರಾಷ್ಟ್ರೀಯ ಜನತಾ ದಳ(ಆರ್‌ಜೆಡಿ) ನಾಯಕ ತೇಜಸ್ವಿ ಯಾದವ್ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 499 ಮತ್ತು 500 ರ ಅಡಿಯಲ್ಲಿ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ದಾಖಲಿಸಿದೆ.
ಇದನ್ನು ಓದಿ: ಗುಜರಾತಿಗಳನ್ನು ನಿಂದಿಸಿದರೆ ಜೋಕೆ; ಬಿಹಾರ ಉಪಮುಖ್ಯಮಂತ್ರಿ ತೇಜಸ್ವಿ ಯಾದವ್ ವಿರುದ್ಧ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ
ಅಹಮದಾಬಾದ್‌ನ ಸಾಮಾಜಿಕ ಕಾರ್ಯಕರ್ತ ಮತ್ತು ಉದ್ಯಮಿ ಹರೇಶ್ ಮೆಹ್ತಾ ಅವರು ಸಲ್ಲಿಸಿದ ದೂರಿನ ಆಧಾರದ ಮೇಲೆ ನ್ಯಾಯಾಲಯ ಬಿಹಾರ ಡಿಸಿಎಂಗೆ ಸಮನ್ಸ್ ಜಾರಿ ಮಾಡಿದೆ.
"ನ್ಯಾಯಾಲಯವು ಯಾದವ್ ವಿರುದ್ಧ ಕ್ರಿಮಿನಲ್ ಪ್ರಕ್ರಿಯಾ ಸಂಹಿತೆಯ(ಸಿಆರ್‌ಪಿಸಿ) ಸೆಕ್ಷನ್ 202 ರ ಅಡಿಯಲ್ಲಿ ವಿಚಾರಣೆ ನಡೆಸಿದೆ ಮತ್ತು ಹರೇಶ್ ಮೆಹ್ತಾ ಅವರು ಸಲ್ಲಿಸಿದ ದೂರಿನ ಆಧಾರದ ಮೇಲೆ ಅವರಿಗೆ ಸಮನ್ಸ್ ನೀಡಿದೆ" ಎಂದು ದೂರುದಾರರ ಪರ ವಕೀಲ ಪಿ.ಆರ್.ಪಟೇಲ್ ಅವರು ಮಾಧ್ಯಮಕ್ಕೆ ತಿಳಿಸಿದ್ದಾರೆ.