ದೇಶ

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದ ಬಿಜೆಪಿ ಶಾಸಕನಿಗೆ 25 ವರ್ಷ ಜೈಲು ಶಿಕ್ಷೆ; ವಿಧಾನಸಭೆಯಿಂದ ಅನರ್ಹ

Lingaraj Badiger

ಸೋನಭದ್ರ: ಒಂಬತ್ತು ವರ್ಷಗಳ ಹಿಂದೆ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದ ಉತ್ತರ ಪ್ರದೇಶದ ಬಿಜೆಪಿ ಶಾಸಕ ರಾಮದುಲರ್ ಗೊಂಡ್‌ ಅವರಿಗೆ ವಿಶೇಷ ನ್ಯಾಯಾಲಯ ಶುಕ್ರವಾರ 25 ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಹೀಗಾಗಿ ಉತ್ತರ ಪ್ರದೇಶ ವಿಧಾನಸಭೆಯಿಂದ ಬಿಜೆಪಿ ಶಾಸಕ ಅನರ್ಹಗೊಳ್ಳಲಿದ್ದಾರೆ.

ಪ್ರಜಾಪ್ರತಿನಿಧಿ ಕಾಯ್ದೆಯ ಪ್ರಕಾರ, ಎರಡು ವರ್ಷ ಅಥವಾ ಅದಕ್ಕಿಂತ ಹೆಚ್ಚು ಜೈಲು ಶಿಕ್ಷೆಗೆ ಗುರಿಯಾದ ಶಾಸಕರನ್ನು ಅನರ್ಹಗೊಳಿಸಲಾಗುತ್ತದೆ ಮತ್ತು ಮುಂದಿನ ಆರು ವರ್ಷಗಳವರೆಗೆ ಚುನಾವಣೆಗೆ ಸ್ಪರ್ಧಿಸದಂತೆ ನಿರ್ಬಂಧ ವಿಧಿಸಲಾಗುತ್ತದೆ.

2014ರಲ್ಲಿ ನಡೆದ ಅಪ್ರಾಪ್ತ ಬಾಲಕಿ ಮೇಲಿನ ಅತ್ಯಾಚಾರ ಪ್ರಕರಣದ ವಿಚಾರಣೆ ನಡೆಸಿದ ಎಂಪಿ/ಎಂಎಲ್‌ಎ ನ್ಯಾಯಾಲಯದ ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶ(ಪ್ರಥಮ) ಎಹ್ಸಾನ್ ಉಲ್ಲಾ ಖಾನ್ ಅವರು, ಬಿಜೆಪಿ ಶಾಸಕ ದೋಷಿ ಎಂದು ಕಳೆದ ಮಂಗಳವಾರ ತೀರ್ಪು ನೀಡಿದ್ದರು. ಆದರೆ ಶಿಕ್ಷೆಯ ಪ್ರಮಾಣವನ್ನು ಡಿಸೆಂಬರ್ 15 ಕಾಯ್ದಿರಿಸಿದ್ದರು.

ಇಂದು ಶಿಕ್ಷೆಯ ಪ್ರಮಾಣ ಪ್ರಕಟಿಸಿದ ನ್ಯಾಯಾಧೀಶ ಅಹ್ಸಾನ್ ಉಲ್ಲಾ ಖಾನ್ ಅವರು, ಅಪರಾಧಿ ಶಾಸಕನಿಗೆ 25 ವರ್ಷ ಕಠಿಣ ಜೈಲು ಶಿಕ್ಷೆ ಹಾಗೂ 10 ಲಕ್ಷ ರೂಪಾಯಿ ದಂಡ ವಿಧಿಸಿದ್ದಾರೆ. ದಂಡದ ಹಣವನ್ನು ಅತ್ಯಾಚಾರ ಸಂತ್ರಸ್ತೆಯ ಪುನರ್ವಸತಿಗೆ ಬಳಸುವಂತೆ ಕೋರ್ಟ್ ಸೂಚಿಸಿದೆ.

ಅತ್ಯಾಚಾರ ಸಂತ್ರಸ್ತೆಗೆ ಮದುವೆಯಾಗಿದ್ದು, ಈಗ ಎಂಟು ವರ್ಷದ ಬಾಲಕಿಯ ತಾಯಿಯಾಗಿದ್ದಾರೆ.

ಗೊಂಡ್ ಅವರು ಉತ್ತರ ಪ್ರದೇಶದ ಸೋನಭದ್ರ ಜಿಲ್ಲೆಯ ದುದ್ದಿ ವಿಧಾನಸಭಾ ಕ್ಷೇತ್ರದ ಶಾಸಕರಾಗಿದ್ದಾರೆ.

SCROLL FOR NEXT