ಪಾಟ್ನಾ: ಸಚಿವ ಸಂಪುಟ ವಿಸ್ತರಣೆ ಸಾಧ್ಯತೆಯನ್ನು ತಳ್ಳಿಹಾಕಿದ ಬಿಹಾರ ಉಪಮುಖ್ಯಮಂತ್ರಿ ತೇಜಸ್ವಿ ಪ್ರಸಾದ್ ಯಾದವ್ ಅವರು, ರಾಜ್ಯ ಸಚಿವ ಸಂಪುಟದಲ್ಲಿ ಹೆಚ್ಚಿನ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಕಾಂಗ್ರೆಸ್‌ಗೆ ನಿರಾಶೆ ಮೂಡಿಸಿದ್ದಾರೆ.
ಸದ್ಯಕ್ಕೆ ಸಚಿವ ಸಂಪುಟ ವಿಸ್ತರಣೆ ಆಗುವುದಿಲ್ಲ. ಅದರ ಬಗ್ಗೆ ಚರ್ಚೆ ಹೇಗೆ ಆರಂಭವಾಯಿತು ಎಂದು ನನಗೆ ಅರ್ಥವಾಗುತ್ತಿಲ್ಲ. ಸಚಿವ ಸಂಪುಟ ವಿಸ್ತರಣೆಯ ಯಾವುದೇ ಪ್ರಸ್ತಾವನೆ ಪರಿಗಣನೆಯಲ್ಲಿಲ್ಲ ಎಂದು ತೇಜಸ್ವಿ ಹೇಳಿದ್ದಾರೆ.
ಈ ಮೂಲಕ ಸಚಿವ ಸಂಪುಟ ವಿಸ್ತರಣೆ ಕುರಿತಂತೆ ಹರಿದಾಡುತ್ತಿರುವ ಊಹಾಪೋಹಗಳಿಗೆ ತೇಜಸ್ವಿ ಯಾದವ್ ತೆರೆ ಎಳೆದಿದ್ದಾರೆ. ಸದ್ಯ ಮಹಾಮೈತ್ರಿ ಸರ್ಕಾರದಲ್ಲಿ ಇಬ್ಬರು ಸಚಿವರನ್ನು ಹೊಂದಿರುವ ಕಾಂಗ್ರೆಸ್, ನಿತೀಶ್ ಕುಮಾರ್ ಸಂಪುಟದಲ್ಲಿ ಇನ್ನೂ ಎರಡು ಸ್ಥಾನ ಪಡೆಯುವ ನಿರೀಕ್ಷೆಯಲ್ಲಿತ್ತು.
ಹೊಸದಾಗಿ ನೇಮಕಗೊಂಡ ಬಿಹಾರ ಕಾಂಗ್ರೆಸ್ ಅಧ್ಯಕ್ಷ ಅಖಿಲೇಶ್ ಪ್ರಸಾದ್ ಸಿಂಗ್ ಅವರು, ತಾವು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರನ್ನು ಭೇಟಿ ಮಾಡಿದ್ದು, ಇಬ್ಬರು ಕಾಂಗ್ರೆಸ್ ನಾಯಕರನ್ನು ಸಂಪುಟಕ್ಕೆ ಸೇರಿಸಿಕೊಳ್ಳುವ ಭರವಸೆ ನೀಡಿದ್ದಾರೆ ಎಂದು ಹೇಳಿದ್ದರು.