ದೇಶ

ಅತ್ಯಾಚಾರ ಅಪರಾಧಿಗಳ ಬಿಡುಗಡೆ ಪ್ರಶ್ನಿಸಿ ಬಿಲ್ಕಿಸ್ ಬಾನು ಅರ್ಜಿ: ಶೀಘ್ರವೇ ವಿಚಾರಣೆ ನಡೆಸುವುದಾಗಿ ಸುಪ್ರೀಂ ಕೋರ್ಟ್ ಭರವಸೆ

Ramyashree GN

ನವದೆಹಲಿ: 2002ರ ಗೋಧ್ರಾ ಗಲಭೆಯಲ್ಲಿ ಬಿಲ್ಕಿಸ್ ಬಾನು ಮೇಲೆ ಸಾಮೂಹಿಕ ಅತ್ಯಾಚಾರ ಮತ್ತು ತನ್ನ ಕುಟುಂಬ ಸದಸ್ಯರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತೆಗೆ ಮಂಗಳವಾರ ಸುಪ್ರೀಂ ಕೋರ್ಟ್ ಭರವಸೆ ನೀಡಿದ್ದು, 11 ಅಪರಾಧಿಗಳ ಅವಧಿಪೂರ್ವ ಬಿಡುಗಡೆಯನ್ನು ಪ್ರಶ್ನಿಸಿ ಸಲ್ಲಿಸಿರುವ ಆಕೆಯ ಅರ್ಜಿಯನ್ನು ಹೊಸ ಪೀಠದ ರಚನೆಯ ನಂತರ ಶೀಘ್ರದಲ್ಲೇ ವಿಚಾರಣೆ ನಡೆಸಲಾಗುವುದು ಎಂದಿದೆ.

ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ ಮತ್ತು ನ್ಯಾಯಮೂರ್ತಿಗಳಾದ ಪಿಎಸ್ ನರಸಿಂಹ ಮತ್ತು ಜೆಬಿ ಪರ್ದಿವಾಲಾ ಅವರ ಪೀಠವು, ಹೊಸ ಪೀಠವನ್ನು ಶೀಘ್ರದಲ್ಲೇ ರಚಿಸಲಾಗುವುದು ಎಂದು ಬಾನು ಅವರನ್ನು ಪ್ರತಿನಿಧಿಸಿದ್ದ ವಕೀಲೆ ಶೋಭಾ ಗುಪ್ತಾ ಅವರಿಗೆ ತಿಳಿಸಿದ್ದಾರೆ.

ಗುಪ್ತಾ ಅವರು ತುರ್ತು ವಿಚಾರಣೆಗಾಗಿ ವಿಷಯವನ್ನು ಪ್ರಸ್ತಾಪಿಸಿದರು ಮತ್ತು ನ್ಯಾಯಮೂರ್ತಿ ಬೇಲಾ ಎಂ ತ್ರಿವೇದಿ ಅವರು ಅರ್ಜಿಯ ವಿಚಾರಣೆಯಿಂದ ಹಿಂದೆ ಸರಿದ ಕಾರಣ ಭಾರತದ ಮುಖ್ಯ ನ್ಯಾಯಮೂರ್ತಿಗಳಿಂದ ಹೊಸ ಪೀಠವನ್ನು ರಚಿಸುವ ಅಗತ್ಯವಿದೆ ಎಂದು ಹೇಳಿದರು.

ಸಿಜೆಐ ಚಂದ್ರಚೂಡ್ ಮಾತನಾಡಿ, 'ನಾನು ಆದಷ್ಟು ಬೇಗ ಪೀಠವನ್ನು ರಚಿಸುತ್ತೇನೆ. ಶೀಘ್ರದಲ್ಲೇ ಈ ವಿಷಯವನ್ನು ವಿಚಾರಣೆಗೆ ಪಟ್ಟಿ ಮಾಡಲಾಗುವುದು' ಎಂದು ಹೇಳಿದರು.

ಬಿಲ್ಕಿಸ್‌ ಬಾನು ಅತ್ಯಾಚಾರ ಪ್ರಕರಣದ 11 ಅಪರಾಧಿಗಳನ್ನು ಆಗಸ್ಟ್ 15ರಂದು ಗುಜರಾತ್‌ನ ಗೋದ್ರಾ ಉಪ ಕಾರಾಗೃಹದಿಂದ ಬಿಡುಗಡೆ ಮಾಡಲಾಗಿತ್ತು. ಗುಜರಾತ್ ಸರ್ಕಾರದ ಕ್ಷಮಾಪಣೆ ನೀತಿ ಅ‌ನ್ವಯ ಈ ಕ್ರಮ ಕೈಗೊಳ್ಳಲಾಗಿತ್ತು. ಸರ್ಕಾರದ ಈ ಕ್ರಮಕ್ಕೆ ದೇಶದಾದ್ಯಂತ ವ್ಯಾಪಕ ವಿರೋಧ ವ್ಯಕ್ತವಾಗಿದೆ. 11 ಜನ ಅಪರಾಧಿಗಳು 15 ವರ್ಷಗಳಿಗೂ ಹೆಚ್ಚು ಕಾಲ ಜೈಲು ಶಿಕ್ಷೆ ಅನುಭವಿಸಿದ್ದರು.

ಇದಕ್ಕೂ ಮುನ್ನ, ಗುಜರಾತ್ ಸರ್ಕಾರವು ಸಾಮೂಹಿಕ ಅತ್ಯಾಚಾರ ಪ್ರಕರಣದ 11 ಅಪರಾಧಿಗಳ ಶಿಕ್ಷೆಯನ್ನು ಹಿಂತೆಗೆದುಕೊಂಡಿರುವುದನ್ನು ಪ್ರಶ್ನಿಸಿ ಬಾನು ಅವರು ಸಲ್ಲಿಸಿದ ಅರ್ಜಿ ವಿಚಾರಣೆಯು ಸುಪ್ರೀಂ ಕೋರ್ಟ್‌ನಲ್ಲಿ ಜನವರಿ 24 ರಂದು ನಡೆಯಲು ಸಾಧ್ಯವಾಗಲಿಲ್ಲ. ಏಕೆಂದರೆ ಸಂಬಂಧಪಟ್ಟ ನ್ಯಾಯಾಧೀಶರು ನಿಷ್ಕ್ರಿಯ ದಯಾಮರಣಕ್ಕೆ ಸಂಬಂಧಿಸಿದ ವಿಷಯದ ವಿಚಾರಣೆಯನ್ನು ನಡೆಸುತ್ತಿದ್ದರು. 

ಅಂದು ಅರ್ಜಿಯನ್ನು ನ್ಯಾಯಮೂರ್ತಿಗಳಾದ ರಸ್ತೋಗಿ ಮತ್ತು ಸಿ.ಟಿ.ರವಿಕುಮಾರ್ ಅವರ ಪೀಠದ ಮುಂದೆ ವಿಚಾರಣೆಗೆ ಪಟ್ಟಿ ಮಾಡಲಾಗಿತ್ತು.

ನ್ಯಾಯಮೂರ್ತಿಗಳಾದ ರಸ್ತೋಗಿ ಮತ್ತು ರವಿಕುಮಾರ್ ಇಬ್ಬರೂ ನ್ಯಾಯಮೂರ್ತಿ ಕೆ ಎಂ ಜೋಸೆಫ್ ನೇತೃತ್ವದ ಸಾಂವಿಧಾನಿಕ ಪೀಠದ ಭಾಗವಾಗಿ, ನಿಷ್ಕ್ರಿಯ ದಯಾಮರಣವನ್ನು ಅನುಮತಿಸುವ 'ಲಿವಿಂಗ್ ವಿಲ್ ಅಥವಾ ಅಡ್ವಾನ್ಸ್ ಮೆಡಿಕಲ್ ಡೈರೆಕ್ಟಿವ್' ಅನ್ನು ಕಾರ್ಯಗತಗೊಳಿಸುವ ಮಾರ್ಗಸೂಚಿಗಳನ್ನು ಮಾರ್ಪಡಿಸಲು ಕೋರಿದ ಅರ್ಜಿಗಳ ವಿಚಾರಣೆಯಲ್ಲಿ ನಿರತರಾಗಿದ್ದರು.

ಜನವರಿ 4 ರಂದು, ನ್ಯಾಯಮೂರ್ತಿ ಬೇಲಾ ಎಂ ತ್ರಿವೇದಿ ಅವರು ಬಿಲ್ಕಿಸ್ ಬಾನು ಪ್ರಕರಣದಲ್ಲಿ 11 ಅಪರಾಧಿಗಳ ಅವಧಿಪೂರ್ವ ಬಿಡುಗಡೆಯನ್ನು ಪಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಗಳ ವಿಚಾರಣೆಯಿಂದ ಹಿಂದೆ ಸರಿದಿದ್ದರು.

ಬಿಲ್ಕಿಸ್ ಬಾನು ಅವರು 2022ರ ನವೆಂಬರ್ 30 ರಂದು ಗುಜರಾತ್ ಸರ್ಕಾರವು ಜೀವಾವಧಿ ಶಿಕ್ಷೆಗೊಳಗಾಗಿದ್ದ 11 ಮಂದಿ ಅಪರಾಧಿಗಳ ಅವಧಿ ಪೂರ್ವ ಬಿಡುಗಡೆಯನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. 

'ದೇಶವು ತನ್ನ 76ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸುತ್ತಿರುವಾಗ, ಎಲ್ಲಾ ಅಪರಾಧಿಗಳನ್ನು ಅವಧಿಪೂರ್ವವಾಗಿ ಬಿಡುಗಡೆ ಮಾಡಲಾಯಿತು ಮತ್ತು ಸಾರ್ವಜನಿಕವಾಗಿ ಹಾರ ಹಾಕಿ ಗೌರವಿಸಲಾಯಿತು ಮತ್ತು ಸಿಹಿ ಹಂಚಲಾಯಿತು. ಈ ದೇಶ ಕಂಡ ಅತ್ಯಂತ ಘೋರ ಅಪರಾಧದ ಎಲ್ಲಾ ಅಪರಾಧಿಗಳ ಅವಧಿಪೂರ್ವ ಬಿಡುಗಡೆಯ ಬಗ್ಗೆ ಇಡೀ ದೇಶ ಮತ್ತು ಪ್ರಪಂಚಕ್ಕೆ ಆಘಾತಕಾರಿ ವಿಚಾರವೊಂದನ್ನು ತಿಳಿಸಲಾಯಿತು ಎಂದು ರಿಟ್ ಅರ್ಜಿಯಲ್ಲಿ ಹೇಳಲಾಗಿದೆ.

SCROLL FOR NEXT