ದೇಶ

ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಆರೋಪ: ಜಾಮಿಯಾ ವಿವಿ ಸಹಾಯಕ ಪ್ರಾಧ್ಯಾಪಕ ಅಮಾನತು

Lingaraj Badiger

ನವದೆಹಲಿ: ವಿದ್ಯಾರ್ಥಿನಿಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಜಾಮಿಯಾ ಮಿಲಿಯಾ ಇಸ್ಲಾಮಿಯಾ(ಜೆಎಂಐ) ವಿಶ್ವವಿದ್ಯಾಲಯದ ಸಹಾಯಕ ಪ್ರಾಧ್ಯಾಪಕರನ್ನು ಅಮಾನತುಗೊಳಿಸಲಾಗಿದೆ ಎಂದು ವಿಶ್ವವಿದ್ಯಾಲಯದ ಹಿರಿಯ ಅಧಿಕಾರಿಯೊಬ್ಬರು ಬುಧವಾರ ತಿಳಿಸಿದ್ದಾರೆ.

ರಿಜಿಸ್ಟ್ರಾರ್ ನಜೀಮ್ ಹುಸೇನ್ ಜಾಫ್ರಿ ಮಂಗಳವಾರ ಹೊರಡಿಸಿದ ಅಧಿಸೂಚನೆಯ ಪ್ರಕಾರ, ವಿಚಾರಣೆ ಪೂರ್ಣಗೊಳ್ಳುವವರೆಗೆ ಸಕ್ಷಮ ಪ್ರಾಧಿಕಾರದ ಪೂರ್ವಾನುಮತಿ ಇಲ್ಲದೆ ಕ್ಯಾಂಪಸ್‌ನಿಂದ ಹೊರಹೋಗದಂತೆ ಸಹಾಯಕ ಪ್ರಾಧ್ಯಾಪಕರಿಗೆ ಸೂಚಿಸಲಾಗಿದೆ.

ಮ್ಯಾನೇಜ್ ಮೆಂಟ್ ಸ್ಟಡೀಸ್ ವಿಭಾಗದ ಸಹಾಯಕ ಪ್ರಾಧ್ಯಾಪಕ ಎಸ್ ವೀರಮಣಿ ಅವರ ವಿರುದ್ಧದ ಲೈಂಗಿಕ ಕಿರುಕುಳ ಆರೋಪದ ಬಗ್ಗೆ ಆಂತರಿಕ ದೂರುಗಳ ಸಮಿತಿ ವಿಚಾರಣೆ ನಡೆಸುತ್ತಿದೆ ಎಂದು ವಿಶ್ವವಿದ್ಯಾಲಯದ ಅಧಿಸೂಚನೆ ತಿಳಿಸಿದೆ.

"ವೀರಮಣಿ ಅವರು ಕೆಲಸದ ಸ್ಥಳದಲ್ಲಿ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂಬ ಆರೋಪ ಇದೆ. ಇದು ಗಂಭೀರ ವಿಷಯವಾಗಿದ್ದು, ತಕ್ಷಣದಿಂದ ಜಾರಿಗೆ ಬರುವಂತೆ ಅವರನ್ನು ಅಮಾನತುಗೊಳಿಸಲಾಗಿದೆ" ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ವಿದ್ಯಾರ್ಥಿನಿಯ ದೂರಿನ ಮೇರೆಗೆ ಈ ಕ್ರಮ ಕೈಗೊಳ್ಳಲಾಗಿದ್ದು, ಅಮಾನತು ಅವಧಿಯಲ್ಲಿ, ಅವರು ಸಕ್ಷಮ ಪ್ರಾಧಿಕಾರದ ಪೂರ್ವಾನುಮತಿ ಇಲ್ಲದೆ ಪ್ರಧಾನ ಕಛೇರಿಯನ್ನು ಬಿಟ್ಟು ಹೋಗಬಾರದು" ಎಂದು ಸೂಚಿಸಲಾಗಿದೆ.

SCROLL FOR NEXT