ಮಧ್ಯ ಪ್ರದೇಶ: ಅಮಿತ್ ಶಾ ಕಾರ್ಯಕ್ರಮಕ್ಕೆ ತೆರಳಿದ್ದ 3 ಬಸ್ಸುಗಳಿಗೆ ಲಾರಿ ಡಿಕ್ಕಿ, 15 ಮಂದಿ ಸಾವು
ಮಧ್ಯ ಪ್ರದೇಶದ ಸತ್ನಾ ಜಿಲ್ಲೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಭಾಗವಹಿಸಿದ್ದ ಕೋಲ್ ಮಹಾಕುಂಭದಲ್ಲಿ ಪಾಲ್ಗೊಂಡು ಹಿಂದಿರುಗುತ್ತಿದ್ದ ವೇಳೆ ಸಂಭವಿಸಿದ ಭೀಕರ ಅಪಘಾತದಲ್ಲಿ ಕನಿಷ್ಠ 15 ಜನ ಮೃತಪಟ್ಟಿದ್ದಾರೆ ಮತ್ತು 60ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ.
ಭೋಪಾಲ್: ಮಧ್ಯ ಪ್ರದೇಶದ ಸತ್ನಾ ಜಿಲ್ಲೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಭಾಗವಹಿಸಿದ್ದ ಕೋಲ್ ಮಹಾಕುಂಭದಲ್ಲಿ ಪಾಲ್ಗೊಂಡು ಹಿಂದಿರುಗುತ್ತಿದ್ದ ವೇಳೆ ಸಂಭವಿಸಿದ ಭೀಕರ ಅಪಘಾತದಲ್ಲಿ ಕನಿಷ್ಠ 15 ಜನ ಮೃತಪಟ್ಟಿದ್ದಾರೆ ಮತ್ತು 60ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ.
ನೆರೆಯ ಸಿಧಿ ಜಿಲ್ಲೆಯಲ್ಲಿ ಶುಕ್ರವಾರ ತಡರಾತ್ರಿ ಈ ಭೀಕರ ಅಪಘಾತ ಸಂಭವಿಸಿದ್ದು, ಮೃತರಲ್ಲಿ ಬಹುತೇಕರು ಕೋಲ್ ಬುಡಕಟ್ಟು ಜನಾಂಗದವರಾಗಿದ್ದಾರೆ.
ಸಿಧಿ ಜಿಲ್ಲೆಯ ಚುರ್ಹತ್ ಪೊಲೀಸ್ ಠಾಣೆ ವ್ಯಾಪ್ತಿಯ ಚುರ್ಹತ್-ರೇವಾ ಹೆದ್ದಾರಿಯಲ್ಲಿ ಈ ಅಪಘಾತ ಸಂಭವಿಸಿದೆ. ಟ್ರಕ್ ಚಾಲಕನ ನಿಯಂತ್ರಣ ತಪ್ಪಿ ನಿಂತಿದ್ದ ಮೂರು ಬಸ್ಸುಗಳಿಗೆ ಡಿಕ್ಕಿ ಹೊಡೆದಿದೆ. ಸಿಧಿ ಮತ್ತು ಸಿಂಗ್ರೌಲಿ ಜಿಲ್ಲೆಯ ಆದಿವಾಸಿಗಳು ಬಸ್ಸು ಹತ್ತುತ್ತಿದ್ದ ವೇಳೆ ಲಾರಿ ಡಿಕ್ಕಿ ಹೊಡೆದಿದೆ.
ಮೂರು ಬಸ್‌ಗಳು ಮೊಹಾನಿಯಾ ಸುರಂಗದಿಂದ ಸ್ವಲ್ಪ ದೂರದಲ್ಲಿ ತೀವ್ರ ತಿರುವಿನಲ್ಲಿ ನಿಂತಿದ್ದವು.
ಪೊಲೀಸ್ ಮೂಲಗಳ ಪ್ರಕಾರ, ಎಂಟು ಜನರು ಸ್ಥಳದಲ್ಲೇ ಸಾವನ್ನಪ್ಪಿದರೆ, ಏಳು ಜನರು ಆಸ್ಪತ್ರೆ ಸಾಗಿಸುವ ಮಾರ್ಗದಲ್ಲಿ ಸಾವನ್ನಪ್ಪಿದ್ದಾರೆ. ಗಾಯಗೊಂಡವರನ್ನು ರೇವಾ ಮತ್ತು ಸಿಧಿ ಜಿಲ್ಲೆಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮಧ್ಯ ಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರು ರಾಜ್ಯ ಬಿಜೆಪಿ ಅಧ್ಯಕ್ಷ ವಿಡಿ ಶರ್ಮಾ ಮತ್ತು ಇತರರೊಂದಿಗೆ ಅಪಘಾತ ಸ್ಥಳಕ್ಕೆ ಭೇಟಿ ನೀಡಿದ್ದು, ಗಾಯಾಳುಗಳಿಗೆ ಎಲ್ಲಾ ರೀತಿಯ ನೆರವು ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಅಲ್ಲದೆ ಮೃತರ ಕುಟುಂಬಕ್ಕೆ ತಲಾ 10 ಲಕ್ಷ ರೂಪಾಯಿ, ಗಂಭೀರವಾಗಿ ಗಾಯಗೊಂಡವರಿಗೆ 2 ಲಕ್ಷ ರೂಪಾಯಿ ಮತ್ತು ಸಣ್ಣಪುಟ್ಟ ಗಾಯಾಳುಗಳಿಗೆ 1 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ.