ದೇಶ

ಉತ್ತರ ಪ್ರದೇಶ ಸ್ಥಳೀಯ ಸಂಸ್ಥೆ ಚುನಾವಣೆ; ಒಬಿಸಿ ಮೀಸಲಾತಿ ಕುರಿತ ಹೈಕೋರ್ಟ್ ತೀರ್ಪಿಗೆ 'ಸುಪ್ರೀಂ' ತಡೆ, ಯೋಗಿ ಸರ್ಕಾರಕ್ಕೆ ಬಿಗ್ ರಿಲೀಫ್

Srinivasamurthy VN

ನವದೆಹಲಿ: ಉತ್ತರ ಪ್ರದೇಶ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಒಬಿಸಿ ಮೀಸಲಾತಿ ಕುರಿತ ಅಲಹಾಬಾದ್ ಹೈಕೋರ್ಟ್ ತೀರ್ಪಿಗೆ ಸುಪ್ರೀಂ ಕೋರ್ಟ್ ತಡೆ ನೀಡಿದ್ದು, ಯೋಗಿ ಆದಿತ್ಯಾನಾಥ್ ಸರ್ಕಾರಕ್ಕೆ ದೊಡ್ಡ ರಿಲೀಫ್ ದೊರೆತಂತಾಗಿದೆ.

ಒಬಿಸಿ ಮೀಸಲಾತಿ ಕುರಿತ ಅಲಹಾಬಾದ್ ಹೈಕೋರ್ಟ್ ತೀರ್ಪಿಗೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿದ್ದು ಶೀಘ್ರದಲ್ಲೇ ಚುನಾವಣೆ ನಡೆಸುವಂತೆ ಹೈಕೋರ್ಟ್ ನೀಡಿರುವ ಆದೇಶಕ್ಕೆ ತಡೆ ನೀಡುವುದರ ಜೊತೆಗೆ ಹೊಸ ಅಧಿಸೂಚನೆ ಹೊರಡಿಸುವಂತೆ ಸುಪ್ರೀಂ ಕೋರ್ಟ್ ಹೇಳಿದೆ. ಇದು ಸರ್ಕಾರಕ್ಕೆ ತಲೆನೋವಾಗಿದ್ದ ಪ್ರಕರಣದಲ್ಲಿ ದೊಡ್ಡ ಸಮಾಧಾನ ತಂದಾಗಿದ್ದು, 3 ವಾರಗಳ ನಂತರ ಪ್ರಕರಣದ ವಿಚಾರಣೆ ನಡೆಯಲಿದೆ.

ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಮತ್ತು ನ್ಯಾಯಮೂರ್ತಿ ಪಿ ಎಸ್ ನರಸಿಂಹ ಅವರ ಪೀಠವು ರಾಜ್ಯ ಸರ್ಕಾರದ ಪರವಾಗಿ ವಾದ ಮಂಡಿಸಿದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರ ವಾದ ಅಲಿಸಿತು. 2023ರ ಮಾರ್ಚ್ 31ರೊಳಗೆ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಒಬಿಸಿ ಮೀಸಲಾತಿಗೆ ಸಂಬಂಧಿಸಿದ ವಿಷಯಗಳನ್ನು ರಾಜ್ಯ ಸರ್ಕಾರ ನೇಮಿಸಿರುವ ಆಯೋಗವು ನಿರ್ಧರಿಸಬೇಕು ಎಂದು ಪೀಠವು ನಿರ್ದೇಶಿಸಿದೆ. ಅಂತೆಯೇ ಚುನಾಯಿತ ಪ್ರತಿನಿಧಿಗಳ ಅವಧಿ ಮುಗಿದ ನಂತರ ಸ್ಥಳೀಯ ಸಂಸ್ಥೆಗಳ ವ್ಯವಹಾರಗಳನ್ನು ನಡೆಸಲು ಆಡಳಿತಗಾರರನ್ನು ನೇಮಿಸಲು ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಅನುಮತಿ ನೀಡಿದೆ. ಆದರೆ, ಪ್ರಮುಖ ನೀತಿ ನಿರ್ಧಾರಗಳನ್ನು ತೆಗೆದುಕೊಳ್ಳುವ ಅಧಿಕಾರ ಆಡಳಿತಾಧಿಕಾರಿಗಳಿಗೆ ಇರುವುದಿಲ್ಲ ಎಂದೂ ನ್ಯಾಯಾಲಯ ಸ್ಪಷ್ಟಪಡಿಸಿದೆ.

ಗಮನಾರ್ಹವೆಂದರೆ, ಒಬಿಸಿ ಮೀಸಲಾತಿ ಇಲ್ಲದೆ ತಕ್ಷಣವೇ ಚುನಾವಣೆ ನಡೆಸುವಂತೆ ಈ ಹಿಂದೆ ಅಲಹಾಬಾದ್ ಹೈಕೋರ್ಟ್ ಆದೇಶ ನೀಡಿತ್ತು. ಇದರ ವಿರುದ್ಧ ಉತ್ತರ ಪ್ರದೇಶ ಸರ್ಕಾರ ಸುಪ್ರೀಂ ಕೋರ್ಟ್‌ನಲ್ಲಿ ಎಸ್‌ಎಲ್‌ಪಿ ಅರ್ಜಿ ಸಲ್ಲಿಸಿತ್ತು. ಹೈಕೋರ್ಟ್‌ನ ತೀರ್ಪಿನ ನಂತರ, ಯೋಗಿ ಸರ್ಕಾರವು ಒಬಿಸಿಗಳ ತ್ರಿವಳಿ ಪರೀಕ್ಷೆಗಾಗಿ ಹಿಂದುಳಿದ ವರ್ಗಗಳ ಆಯೋಗವನ್ನು ಕೂಡ ರಚಿಸಿತ್ತು. 

SCROLL FOR NEXT