ದೇಶ

ಚಾಲನೆಗೂ ಮುನ್ನವೇ ಆಂಧ್ರದಲ್ಲಿ ವಂದೇ ಭಾರತ್ ರೈಲಿನ ಮೇಲೆ ಕಲ್ಲು ತೂರಾಟ; ಗಾಜು ಪುಡಿಪುಡಿ, ವಿಡಿಯೋ!

Vishwanath S

ವಿಶಾಖಪಟ್ಟಣಂ: ಆಂಧ್ರಪ್ರದೇಶದ ವಿಶಾಖಪಟ್ಟಣಂನಲ್ಲಿ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನ ಮೇಲೆ ಕಲ್ಲು ತೂರಾಟ ನಡೆದ ಘಟನೆ ಬೆಳಕಿಗೆ ಬಂದಿದೆ.

ಜನವರಿ 19ರಂದು ಪ್ರಧಾನಿ ನರೇಂದ್ರ ಮೋದಿ ಅವರು ರೈಲಿಗೆ ಚಾಲನೆ ನೀಡಲಿದ್ದಾರೆ. ಅಧಿಕಾರಿಗಳ ಪ್ರಕಾರ, ದುಷ್ಕರ್ಮಿಗಳನ್ನು ಹಿಡಿಯಲು ಕಾರ್ಯಾಚರಣೆಯನ್ನು ಪ್ರಾರಂಭಿಸಲಾಗಿದೆ ಎಂದರು. ಈ ಹಿಂದೆಯೂ ಹಲವು ಬಾರಿ ಇತರ ರಾಜ್ಯಗಳಲ್ಲಿ ವಂದೇ ಭಾರತ್ ಎಕ್ಸ್‌ಪ್ರೆಸ್ ಮೇಲೆ ಕಲ್ಲು ತೂರಾಟ ನಡೆದಿದೆ. ಈ ಪ್ರಕರಣಗಳಲ್ಲಿ ಕೆಲವರನ್ನು ಬಂಧಿಸಲಾಗಿತ್ತು.

ರಾಮಮೂರ್ತಿ ಪಂತುಲುಪೇಟೆ-ಕಂಚರಪಾಲೆಂ ಬಳಿ ವಂದೇ ಭಾರತ್ ರೈಲಿನ ಮೇಲೆ ಕಲ್ಲು ತೂರಾಟ ನಡೆಸಲಾಗಿದ್ದು ಬೋಗಿಯ ಗಾಜು ಪುಡಿಪುಡಿಯಾಗಿದೆ. ವಿಭಾಗೀಯ ರೈಲ್ವೆ ವ್ಯವಸ್ಥಾಪಕರ ಸೂಚನೆ ಮೇರೆಗೆ ತನಿಖೆ ಆರಂಭಿಸಲಾಗಿದೆ. ವಂದೇ ಭಾರತ್ ರೈಲು ವಿಶಾಖಪಟ್ಟಣಂ ರೈಲು ನಿಲ್ದಾಣದಿಂದ ಮಾರಿಪಾಲೆಂನ ಕೋಚ್ ನಿರ್ವಹಣಾ ಕೇಂದ್ರಕ್ಕೆ ಪ್ರಾಯೋಗಿಕ ಚಾಲನೆ ಮುಗಿದ ನಂತರ ನಿರ್ವಹಣಾ ಪ್ರಕ್ರಿಯೆಯ ವೇಳೆ ಕಲ್ಲು ತೂರಾಟ ನಡೆದಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಸಿಕಂದರಾಬಾದ್ ರೈಲು ನಿಲ್ದಾಣದಿಂದ ಪ್ರಧಾನಿ ಮೋದಿ ಅವರು ರೈಲಿಗೆ ಚಾಲನೆ ನೀಡಲಿದ್ದಾರೆ. ಇದು ಸಿಕಂದರಾಬಾದ್ ಮತ್ತು ವಿಶಾಖಪಟ್ಟಣಂ ನಡುವಿನ ಅಂತರವನ್ನು ಸರಿಸುಮಾರು ಎಂಟು ಗಂಟೆಗಳಲ್ಲಿ ಕ್ರಮಿಸುತ್ತದೆ. ವಾರಂಗಲ್, ಖಮ್ಮಂ, ವಿಜಯವಾಡ ಮತ್ತು ರಾಜಮಂಡ್ರಿಯಲ್ಲಿ ರೈಲು ನಿಲುಗಡೆಯಾಗಲಿದೆ.

ಪ್ರಧಾನಿ ನರೇಂದ್ರ ಮೋದಿ ಅವರು ಜನವರಿ 19ರಂದು ತೆಲಂಗಾಣಕ್ಕೆ ಭೇಟಿ ನೀಡಲಿದ್ದು, ಹೈದರಾಬಾದ್ ಮತ್ತು ವಿಶಾಖಪಟ್ಟಣಂ ನಡುವಿನ ವಂದೇ ಭಾರತ್ ರೈಲನ್ನು ರಾಷ್ಟ್ರಕ್ಕೆ ಸಮರ್ಪಿಸಲಿದ್ದಾರೆ. ಜನವರಿ 19ರಂದು, ಸಿಕಂದರಾಬಾದ್ ರೈಲು ನಿಲ್ದಾಣದಿಂದ ಬೆಳಿಗ್ಗೆ 10 ಗಂಟೆಗೆ ದೇಶದ ಎಂಟನೇ ವಂದೇ ಭಾರತ್ ರೈಲಿಗೆ ಪ್ರಧಾನಿ ಮೋದಿ ಚಾಲನೆ ನೀಡಲಿದ್ದಾರೆ. ರೈಲಿಗೆ ಧ್ವಜಾರೋಹಣ ನೆರವೇರಿಸಿದ ಬಳಿಕ ಪ್ರಧಾನಿಗಳು ಸಿಕಂದರಾಬಾದ್ ರೈಲ್ವೆ ನಿಲ್ದಾಣದ 699 ಕೋಟಿ ರೂ.ಗಳ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಲಿದ್ದಾರೆ.

SCROLL FOR NEXT