ದೇಶ

ಶರದ್ ಪವಾರ್ ಬಣದ ಮತ್ತೊಬ್ಬ ಶಾಸಕ ಅಜಿತ್ ಪವಾರ್ ಬಣಕ್ಕೆ ಸೇರ್ಪಡೆ

Lingaraj Badiger

ಮುಂಬೈ: ಮಹಾರಾಷ್ಟ್ರದ ಸತಾರಾ ಜಿಲ್ಲೆಯ ವಾಯಿ ಕ್ಷೇತ್ರದ ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷ(ಎನ್ ಸಿಪಿ)ದ ಶಾಸಕ ಮಕರಂದ್ ಪಾಟೀಲ್ ಅವರು ಸೋಮವಾರ ಪಕ್ಷದ ಹಿರಿಯ ನಾಯಕ ಮತ್ತು ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಬಣಕ್ಕೆ ಸೇರಿರುವುದಾಗಿ ಹೇಳಿದ್ದಾರೆ.

ಆರ್ಥಿಕ ಬಿಕ್ಕಟ್ಟಿನಲ್ಲಿರುವ ತಮ್ಮ ಕ್ಷೇತ್ರದಲ್ಲಿನ ಎರಡು ಸಕ್ಕರೆ ಕಾರ್ಖಾನೆಗಳನ್ನು ಉಳಿಸಲು ಮತ್ತು ವಾಯಿ ಕ್ಷೇತ್ರದ ಅಭಿವೃದ್ಧಿ ಮತ್ತು ಪ್ರವಾಸೋದ್ಯಮ ಸಂಬಂಧಿತ ಸಮಸ್ಯೆಗಳನ್ನು ಪರಿಹರಿಸುವ ಭರವಸೆಯೊಂದಿಗೆ ಅಜಿತ್ ಪವಾರ್ ಬಣ ಸೇರಲು ನಿರ್ಧರಿಸಿದ್ದೇನೆ ಎಂದು ಪಾಟೀಲ್ ತಿಳಿಸಿದ್ದಾರೆ.

ಗಮನಾರ್ಹವೆಂದರೆ, ಅಜಿತ್ ಪವಾರ್ ಮತ್ತು ಇತರ ಎಂಟು ಶಾಸಕರು ಶಿವಸೇನೆ-ಬಿಜೆಪಿ ಸರ್ಕಾರಕ್ಕೆ ಸೇರಿದ ಒಂದು ದಿನದ ನಂತರ ಎನ್‌ಸಿಪಿ ಸಂಸ್ಥಾಪಕ ಶರದ್ ಪವಾರ್ ಕರಡ್ ನಗರಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಪಾಟೀಲ್ ಅವರೊಂದಿಗೆ ಇದ್ದರು.

ಕಳೆದ ಭಾನುವಾರ ಪ್ರಮಾಣ ವಚನ ಸ್ವೀಕರಿಸಿದ ಅಜಿತ್ ಪವಾರ್ ಸೇರಿದಂತೆ ಎನ್‌ಸಿಪಿಯ ಒಂಬತ್ತು ಸಚಿವರ ಪಟ್ಟಿಯಲ್ಲಿ ತಮ್ಮ ಹೆಸರು ಇದೆ ಎಂದು ಪಾಟೀಲ್ ಹೇಳಿಕೊಂಡಿದ್ದಾರೆ.

ಆದರೆ ಯಾವುದೇ ನಿರ್ಧಾರ ಕೈಗೊಳ್ಳುವ ಮುನ್ನ ತಮ್ಮ ಬೆಂಬಲಿಗರು ಮತ್ತು ಕ್ಷೇತ್ರದ ಜನರೊಂದಿಗೆ ಸಮಾಲೋಚನೆ ನಡೆಸಬೇಕು ಎಂದು ಅಜಿತ್ ಪವಾರ್ ಅವರಿಗೆ ಹೇಳಿರುವುದಾಗಿ ಪಾಟೀಲ್ ಪಿಟಿಐಗೆ ತಿಳಿಸಿದ್ದಾರೆ.

SCROLL FOR NEXT