ದೇಶ

ಸಿವೋಟರ್ ಸಮೀಕ್ಷೆ: ಪ್ರಿಯಾಂಕಾ ಗಾಂಧಿಯೇ ಪ್ರತಿಪಕ್ಷಗಳ ಅತ್ಯುತ್ತಮ ಪ್ರಧಾನಿ ಅಭ್ಯರ್ಥಿ!

Lingaraj Badiger

ನವದೆಹಲಿ: 2024 ರ ಲೋಕಸಭಾ ಚುನಾವಣೆಯಲ್ಲಿ ಪ್ರಧಾನಿ ಮೋದಿ ಹಾಗೂ ಬಿಜೆಪಿಯನ್ನು ಸೋಲಿಸಲು ಈಗಾಗಲೇ 26 ಪ್ರತಿಪಕ್ಷಗಳು ಒಂದಾಗಿವೆ. ಇದರ ಬೆನ್ನಲ್ಲೇ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರಧಾನಿ ಅಭ್ಯರ್ಥಿಯಾಗದಿದ್ದರೆ, ಪ್ರಿಯಾಂಕಾ ಗಾಂಧಿ ವಾದ್ರಾ ಅವರೇ ಪ್ರತಿಪಕ್ಷಗಳ ಅತ್ಯುತ್ತಮ ಪ್ರಧಾನಿ ಅಭ್ಯರ್ಥಿ ಎಂದು ಸಿವೋಟರ್ ಸಮೀಕ್ಷೆ ಹೇಳಿದೆ.

ದೇಶದಲ್ಲಿ ಬದಲಾಗುತ್ತಿರುವ ರಾಜಕೀಯ ಸಮೀಕರಣಗಳ ಬಗ್ಗೆ ಸಾರ್ವಜನಿಕ ಅಭಿಪ್ರಾಯವನ್ನು ಸಂಗ್ರಹಿಸಲು 4,029 ಮಾದರಿಗಳೊಂದಿಗೆ ಸಿವೋಟರ್ ನಡೆಸಿದ ವಿಶೇಷ ಸಮೀಕ್ಷೆಯಲ್ಲಿ ಇದು ಬಹಿರಂಗವಾಗಿದೆ.

ಸಮೀಕ್ಷೆಯ ಪ್ರಕಾರ, ಒಂದು ವೇಳೆ ರಾಹುಲ್ ಗಾಂಧಿ ಅವರ ಜೈಲು ಶಿಕ್ಷೆಗೆ ಸುಪ್ರೀಂ ಕೋರ್ಟ್‌ ತಡೆ ನೀಡದಿದ್ದರೆ ಪ್ರತಿಪಕ್ಷಗಳ ಪ್ರಧಾನಿ ಅಭ್ಯರ್ಥಿ ಯಾರಾಗಲಿದ್ದಾರೆ ಎಂಬ ಪ್ರಶ್ನೆಗೆ ಒಟ್ಟಾರೆ ಮೂರನೇ ಒಂದು ಭಾಗದಷ್ಟು ಜನ ಪ್ರಿಯಾಂಕಾ ಗಾಂಧಿಯನ್ನು ಆಯ್ಕೆ ಮಾಡಿದ್ದಾರೆ.

ಪ್ರಿಯಾಂಕಾ ನಂತರ ಎಎಪಿ ಸಂಸ್ಥಾಪಕ ಅರವಿಂದ್ ಕೇಜ್ರಿವಾಲ್ ಅವರು ಶೇಕಡಾ 13.9 ರಷ್ಟು ಮತಗಳೊಂದಿಗೆ ಎರಡನೇ ಸ್ಥಾನದಲ್ಲಿದ್ದಾರೆ. ಜೆಡಿಯು ನಾಯಕ ಮತ್ತು ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಶೇಕಡಾ 13.6 ರಷ್ಟು ಮತಗಳೊಂದಿಗೆ ಮೂರನೇ ಸ್ಥಾನದಲ್ಲಿದ್ದಾರೆ.

ಶೇ.10.4ರಷ್ಟು ಜನ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಪ್ರಧಾನಿ ಅಭ್ಯರ್ಥಿಯಾಗಲಿ ಎಂದಿದ್ದು, ಶೇ.30 ರಷ್ಟು ಜನ ಈ ವಿಷಯದ ಬಗ್ಗೆ ತಮಗೆ ಗೊತ್ತಿಲ್ಲ ಅಥವಾ ಹೇಳಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

2024 ರ ಲೋಕಸಭಾ ಚುನಾವಣೆಯಲ್ಲಿ ಪ್ರತಿಪಕ್ಷಗಳ ಪ್ರಧಾನಿ ಅಭ್ಯರ್ಥಿ ಯಾರೆಂಬುದರ ಬಗ್ಗೆ ಭಿನ್ನಾಭಿಪ್ರಾಯಗಳಿದ್ದರೂ, ಕಾಂಗ್ರೆಸ್ ನಾಯಕರು ಮತ್ತು ಬೆಂಬಲಿಗರು ರಾಹುಲ್ ಗಾಂಧಿಯೇ ಪ್ರಧಾನಿ ಅಭ್ಯರ್ಥಿ ಎಂಬ ವಿಶ್ವಾಸದಲ್ಲಿದ್ದಾರೆ.

SCROLL FOR NEXT