ದೇಶ

ಮಣಿಪುರ ಕರಿತು ವಿಪಕ್ಷಗಳ ಪ್ರತಿಭಟನೆ ನಡುವೆಯೇ ಅರಣ್ಯ ಸಂರಕ್ಷಣಾ ಮಸೂದೆ ಅಂಗೀಕಾರ; ನಾಳೆಗೆ ಲೋಕಸಭೆ ಮುಂದೂಡಿಕೆ

Ramyashree GN

ನವದೆಹಲಿ: ಮಣಿಪುರದಲ್ಲಿ ನಡೆಯುತ್ತಿರುವ ಜನಾಂಗೀಯ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ವಿರೋಧ ಪಕ್ಷದ ಸದಸ್ಯರ ಪ್ರತಿಭಟನೆಯ ನಡುವೆಯೇ ಲೋಕಸಭೆಯ ಕಲಾಪವನ್ನು ನಾಳೆಗೆ ಮುಂದೂಡಲಾಯಿತು.

ಇದಕ್ಕೂ ಮುನ್ನ ಪ್ರತಿಪಕ್ಷಗಳ ಪ್ರತಿಭಟನೆಯಿಂದಾಗಿ ಸದನವನ್ನು ಎರಡು ಬಾರಿ ಮುಂದೂಡಬೇಕಾಯಿತು.

ಬೆಳಗ್ಗೆ ಕಲಾಪ ಆರಂಭವಾಗುತ್ತಲೇ, ಮಣಿಪುರ ಹಿಂಸಾಚಾರದ ವಿಚಾರವಾಗಿ ಪ್ರಧಾನಿ ನರೇಂದ್ರ ಮೋದಿಯವರು ಸದನದಲ್ಲಿ ಹೇಳಿಕೆ ನೀಡಬೇಕು ಎಂದು ಒತ್ತಾಯಿಸಿದ ವಿಪಕ್ಷಗಳು, ನರೇಂದ್ರ ಮೋದಿ ನೇತೃತ್ವದ ಸರ್ಕಾರದ ವಿರುದ್ಧ ಕಾಂಗ್ರೆಸ್ ಮತ್ತು ಬಿಆರ್‌ಎಸ್ ಪಕ್ಷಗಳು ಬುಧವಾರ ಅವಿಶ್ವಾಸ ನಿರ್ಣಯ ಮಂಡಿಸಿದವು. ಇದನ್ನು ಸ್ಪೀಕರ್ ಓಂ ಬಿರ್ಲಾ ಅವರು ಒಪ್ಪಿಕೊಂಡರು.

ಪ್ರತಿಪಕ್ಷಗಳ ಪ್ರತಿಭಟನೆಯ ನಡುವೆಯೇ ಜಮ್ಮು ಮತ್ತು ಕಾಶ್ಮೀರ ಮರುಸಂಘಟನೆ ತಿದ್ದುಪಡಿ ಮಸೂದೆ ಸೇರಿದಂತೆ ಆರು ಮಸೂದೆಗಳನ್ನು ಬುಧವಾರ ಲೋಕಸಭೆಯಲ್ಲಿ ಮಂಡಿಸಲಾಯಿತು. ಸದನವು ಅರಣ್ಯ (ಸಂರಕ್ಷಣೆ) ಕಾಯಿದೆಗೆ ತಿದ್ದುಪಡಿ ಮಾಡುವ ಮಸೂದೆಯನ್ನು ಅಂಗೀಕರಿಸಿತು.

ಸದನ ಸೇರಿದಾಗ ಮೊದಲಿಗೆ, ಸದಸ್ಯರು ಕಾರ್ಗಿಲ್ ಯುದ್ಧದಲ್ಲಿ ಮಡಿದ ಸೈನಿಕರಿಗೆ ಶ್ರದ್ಧಾಂಜಲಿ ಸಲ್ಲಿಸಿದ ಕೂಡಲೇ ಪ್ರತಿಭಟನೆಗಳು ಪ್ರಾರಂಭವಾದವು.

ಪ್ರಶ್ನೋತ್ತರ ವೇಳೆಯಲ್ಲಿ ಮಣಿಪುರದಲ್ಲಿ ನಡೆದ ಹಿಂಸಾಚಾರದ ವಿಷಯ ಪ್ರಸ್ತಾಪಿಸಲು ವಿರೋಧ ಪಕ್ಷದ ಸದಸ್ಯರು ಭಿತ್ತಿಪತ್ರಗಳನ್ನು ಪ್ರದರ್ಶಿಸಿದರು.

ಅವಿಶ್ವಾಸ ಗೊತ್ತುವಳಿ ಮಂಡನೆಯಾದ ನಂತರ ಎರಡನೇ ಬಾರಿ ಕಲಾಪವನ್ನು ಮುಂದೂಡಲಾಯಿತು ಮತ್ತು ಪ್ರತಿಭಟನೆಯ ನಡುವೆ ಜನನ ಮತ್ತು ಮರಣ ನೋಂದಣಿ ಕಾಯ್ದೆ ತಿದ್ದುಪಡಿ ಸೇರಿದಂತೆ ಆರು ಮಸೂದೆಗಳನ್ನು ಮಂಡಿಸಲಾಯಿತು.

ಸದನದ ಕಲಾಪವನ್ನು ದಿನದ ಮಟ್ಟಿಗೆ ಮುಂದೂಡುವ ಮೊದಲು, ಲೋಕಸಭೆಯು ಸಂಕ್ಷಿಪ್ತ ಚರ್ಚೆಯ ನಂತರ ಅರಣ್ಯ (ಸಂರಕ್ಷಣೆ) ತಿದ್ದುಪಡಿ ಮಸೂದೆಯನ್ನು ಅಂಗೀಕರಿಸಿತು.

SCROLL FOR NEXT