ನವದೆಹಲಿ: ಮೇ 3ರಿಂದ ಜನಾಂಗೀಯ ಹಿಂಸಾಚಾರದಿಂದ ನಲುಗುತ್ತಿರುವ ಈಶಾನ್ಯ ರಾಜ್ಯದ ಪರಿಸ್ಥಿತಿಯ ಪರಿಶೀಲನೆ ನಡೆಸಲು ವಿರೋಧ ಪಕ್ಷಗಳ ಮೈತ್ರಿಕೂಟ INDIAದ ಭಾಗವಾದ ಸಂಸದರು ಜುಲೈ 29 ಮತ್ತು 30 ರಂದು ಮಣಿಪುರಕ್ಕೆ ಭೇಟಿ ನೀಡಲಿದ್ದಾರೆ.
ಸಂಸತ್ತಿನ 20ಕ್ಕೂ ಹೆಚ್ಚು ವಿರೋಧ ಪಕ್ಷದ ಸದಸ್ಯರ ನಿಯೋಗವು ಈ ವಾರಾಂತ್ಯದಲ್ಲಿ ಮಣಿಪುರಕ್ಕೆ ಭೇಟಿ ನೀಡಲಿದ್ದು, ನೇರವಾಗಿ ರಾಜ್ಯದಲ್ಲಿನ ಪರಿಸ್ಥಿತಿಯ ಅವಲೋಕನ ಮಾಡಲಿದೆ ಎಂದು ಲೋಕಸಭೆಯ ಕಾಂಗ್ರೆಸ್ ವಿಪ್ ಮಾಣಿಕಂ ಟ್ಯಾಗೋರ್ ಸುದ್ದಿಸಂಸ್ಥೆ ಪಿಟಿಐಗೆ ತಿಳಿಸಿದ್ದಾರೆ.
ಹಿಂಸಾಚಾರ ಪೀಡಿತ ರಾಜ್ಯಕ್ಕೆ ಭೇಟಿ ನೀಡಲು ವಿರೋಧ ಪಕ್ಷದ ನಾಯಕರು ಕೆಲವು ಸಮಯದಿಂದ ಪ್ರಯತ್ನಿಸುತ್ತಿದ್ದರು. ಆದರೆ, ಅಲ್ಲಿನ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಅನುಮತಿ ನಿರಾಕರಿಸಲಾಗಿತ್ತು.
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಈ ಹಿಂದೆ ಮಣಿಪುರದ ಕೆಲವು ಸ್ಥಳಗಳಿಗೆ ಭೇಟಿ ನೀಡಿದ್ದರು.
26 ವಿರೋಧ ಪಕ್ಷಗಳ ಮೈತ್ರಿಕೂಟದ INDIAದ ಹಲವಾರು ಸಂಸದರು ಈ ನಿಯೋಗದ ಭಾಗವಾಗಲಿದ್ದಾರೆ.
ಇದನ್ನೂ ಓದಿ: ಸಂಸತ್ತಿನಲ್ಲಿ ಮಾತನಾಡದ ಪ್ರಧಾನಿ ರಾಜಸ್ಥಾನದಲ್ಲಿ ರಾಜಕೀಯ ಭಾಷಣ ಮಾಡುತ್ತಿದ್ದಾರೆ: ಮಲ್ಲಿಕಾರ್ಜುನ ಖರ್ಗೆ
ವಿರೋಧ ಪಕ್ಷಗಳ ಸದಸ್ಯರು ಸಂಸತ್ತಿನ ಉಭಯ ಸದನಗಳಲ್ಲಿ ಮಣಿಪುರದ ವಿಚಾರವಾಗಿ ಚರ್ಚೆ ನಡೆಸಬೇಕೆಂದು ಒತ್ತಾಯಿಸುತ್ತಿದ್ದಾರೆ ಮತ್ತು ಪ್ರಧಾನಿ ಮೋದಿ ಈ ಬಗ್ಗೆ ಹೇಳಿಕೆ ನೀಡಬೇಕು ಎಂದು ಕೇಳುತ್ತಿದ್ದಾರೆ.