ಒಡಿಶಾ ರೈಲು ದುರಂತ: ರೈಲ್ವೇ ಸಿಗ್ನಲ್ ವ್ಯವಸ್ಥೆ ಬಗ್ಗೆ ವಿಪಕ್ಷಗಳ ಕಿಡಿ
ಒಡಿಶಾ ರೈಲು ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತರ ಕುರಿತು ತೀವ್ರ ಸಂತಾಪ ವ್ಯಕ್ತಪಡಿಸಿದ ವಿರೋಧ ಪಕ್ಷಗಳ ನಾಯಕರು, ಅಪಘಾತಕ್ಕೆ ಕಾರಣವಾದ ರೈಲ್ವೆಯ ಸಿಗ್ನಲಿಂಗ್ ವ್ಯವಸ್ಥೆಯ ಬಗ್ಗೆ ಕಿಡಿಕಾರುತ್ತಿದ್ದಾರೆ.
ನವದೆಹಲಿ: ಒಡಿಶಾ ರೈಲು ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತರ ಕುರಿತು ತೀವ್ರ ಸಂತಾಪ ವ್ಯಕ್ತಪಡಿಸಿದ ವಿರೋಧ ಪಕ್ಷಗಳ ನಾಯಕರು, ಅಪಘಾತಕ್ಕೆ ಕಾರಣವಾದ ರೈಲ್ವೆಯ ಸಿಗ್ನಲಿಂಗ್ ವ್ಯವಸ್ಥೆಯ ಬಗ್ಗೆ ಕಿಡಿಕಾರುತ್ತಿದ್ದಾರೆ.
ಶುಕ್ರವಾರ ಬೆಂಗಳೂರು-ಹೌರಾ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್, ಶಾಲಿಮಾರ್-ಚೆನ್ನೈ ಸೆಂಟ್ರಲ್ ಕೋರಮಂಡಲ್ ಎಕ್ಸ್‌ಪ್ರೆಸ್ ಹಾಗೂ ಗೂಡ್ಸ್ ರೈಲನ್ನು ಒಳಗೊಂಡ ಭೀಕರ ಅಪಘಾತದಲ್ಲಿ 238 ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ ಹಾಗೂ 900 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.
ಘಟನೆ ಸಂಬಂಧ ಟ್ವೀಟ್ ಮಾಡಿರುವ ಟಿಎಂಸಿ ವಕ್ತಾರ ಸಾಕೇತ್ ಗೋಖಲೆ ಅವರು, ಒಡಿಶಾದಲ್ಲಿ ಕೋರಮಂಡಲ್ ಎಕ್ಸ್‌ಪ್ರೆಸ್ ಮತ್ತು ಯಶವಂತಪುರ-ಹೌರಾ ರೈಲು ಅಪಘಾತದ ದುರಂತ ಸುದ್ದಿಯನ್ನು ಕೇಳಿ ದಿಗ್ಭ್ರಮೆಗೊಂಡಿದ್ದೇನೆ ಹಾಗೂ ದುಃಖಿತನಾಗಿದ್ದೇನೆ. ಸಂತ್ರಸ್ತರಿಗೆ ಮತ್ತು ಅವರ ಕುಟುಂಬಗಳಿಗೆ ನನ್ನ ಹೃತ್ಪೂರ್ವಕ ಪ್ರಾರ್ಥನೆಗಳು. ... ಸಿಗ್ನಲ್ ವೈಫಲ್ಯವು 3 ರೈಲುಗಳು ಅಪಘಾತಕ್ಕೆ ಕಾರಣವಾಯಿತು ಎನ್ನುವ ವಿಚಾರವು ನಂಬಲಾಗದಷ್ಟು ಆಘಾತಕಾರಿಯಾಗಿದೆ. ಗಂಭೀರ ಪ್ರಶ್ನೆಗಳಿಗೆ ಉತ್ತರಿಸಬೇಕಾಗಿದೆ ಎಂದು ಹೇಳಿದ್ದಾರೆ.
ಸಿಪಿಐ(ಎಂಎಲ್) ಪ್ರಧಾನ ಕಾರ್ಯದರ್ಶಿ ದೀಪಾಂಕರ್ ಭಟ್ಟಾಚಾರ್ಯ ಕೂಡ ಇದೇ ಪ್ರಶ್ನೆಯನ್ನು ಎತ್ತಿದ್ದಾರೆ.
ಭಾರತೀಯ ರೈಲ್ವೇಯಲ್ಲಿ ನಾವು ಇನ್ನೂ ಯಾವುದೇ ಸಿಗ್ನಲಿಂಗ್ ಹಾಗೂ ಸುರಕ್ಷತಾ ವ್ಯವಸ್ಥೆಯನ್ನು ಹೊಂದಿಲ್ಲವೇ? ಅಥವಾ ಇಂತಹ ಭೀಕರ ದುರಂತಗಳು ಭಾರತದಲ್ಲಿ ರೈಲು ಪ್ರಯಾಣದಲ್ಲಿ ಸಾಮಾನ್ಯವಾಗುತ್ತದೆಯೇ? ಈ ದುರ್ಘಟನೆಯಲ್ಲಿ ಸಂತ್ರಸ್ತರಿಗೆ ಹಾಗೂ ತಮ್ಮ ಹತ್ತಿರದ ಮತ್ತು ಆತ್ಮೀಯರನ್ನು ಕಳೆದುಕೊಂಡ ಕುಟುಂಬಗಳಿಗೆ ನಾವು ಉತ್ತರವನ್ನು ನೀಡಬೇಕಾಗಿದೆ ಎಂದು ಹೇಳಿದ್ದಾರೆ.
ಸಿಪಿಐ ಸಂಸದ ಬಿನೋಯ್ ವಿಶ್ವಂ ಅವರು ಘಟನೆಗೆ ಸಂಬಂಧಿಸಿದಂತೆ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.
ಸರ್ಕಾರವು ಐಷಾರಾಮಿ ರೈಲುಗಳ ಮೇಲೆ ಮಾತ್ರ ಕೇಂದ್ರೀಕರಿಸುತ್ತದೆ. ಒಡಿಶಾದ ಸಾವುಗಳು ಅದರ ಪರಿಣಾಮವಾಗಿದೆ. ರೈಲ್ವೆ ಸಚಿವರು ರಾಜೀನಾಮೆ ನೀಡಬೇಕು. ಐಷಾರಾಮಿ ರೈಲುಗಳ ಮೇಲೆ ಮಾತ್ರ ಗಮನಹರಿಸಿ. ಸಾಮಾನ್ಯ ಜನರ ರೈಲುಗಳು ಹಾಗೂ ಟ್ರ್ಯಾಕ್‌ಗಳನ್ನು ನಿರ್ಲಕ್ಷಿಸಲಾಗಿದೆ ಎಂದು ಬಿನೋಯ್ ವಿಶ್ವಂ ಅವರು ಹೇಳಿದ್ದಾರೆ.
ರೈಲು ದುರಂತದ ಘಟನೆ ಕುರಿತು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪಕ್ಷದ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ತೀವ್ರ ಸಂತಾಪ ಸೂಚಿಸಿದ್ದಾರೆ.
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.