ದೇಶ

ತಮಿಳುನಾಡಿನ ಸಚಿವರನ್ನು ಖಾಸಗಿ ಆಸ್ಪತ್ರೆಗೆ ಸ್ಥಳಾಂತರಿಸುವ ಹೈಕೋರ್ಟ್ ಆದೇಶಕ್ಕೆ ತಡೆ ನೀಡಲು 'ಸುಪ್ರೀಂ' ನಕಾರ

Ramyashree GN

ನವದೆಹಲಿ: ಚೆನ್ನೈನ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ತಮಿಳುನಾಡು ಸಚಿವ ವಿ ಸೆಂಥಿಲ್ ಬಾಲಾಜಿ ಅವರನ್ನು ಖಾಸಗಿ ಆಸ್ಪತ್ರೆಗೆ ಸ್ಥಳಾಂತರಿಸಲು ಅನುಮತಿ ನೀಡಿದ ಮದ್ರಾಸ್ ಹೈಕೋರ್ಟ್ ಆದೇಶಕ್ಕೆ ತಡೆ ನೀಡಲು ಸುಪ್ರೀಂ ಕೋರ್ಟ್ ಬುಧವಾರ ನಿರಾಕರಿಸಿದೆ.

ರಾಜ್ಯ ಸಾರಿಗೆ ಇಲಾಖೆಯಲ್ಲಿ ಉದ್ಯೋಗಕ್ಕಾಗಿ ನಗದು ಹಗರಣಕ್ಕೆ ಸಂಬಂಧಿಸಿದಂತೆ ಬಾಲಾಜಿಯನ್ನು ಬಂಧಿಸಿರುವ ಜಾರಿ ನಿರ್ದೇಶನಾಲಯವು ಮದ್ರಾಸ್ ಹೈಕೋರ್ಟ್ ಆದೇಶದ ವಿರುದ್ಧ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು.

ನ್ಯಾಯಮೂರ್ತಿ ಸೂರ್ಯಕಾಂತ್ ಮತ್ತು ನ್ಯಾಯಮೂರ್ತಿ ಎಂಎಂ ಸುಂದ್ರೇಶ್ ಅವರಿದ್ದ ಸುಪ್ರೀಂ ಕೋರ್ಟ್ ರಜಾಕಾಲದ ಪೀಠವು, ಅರ್ಜಿಯು ಇನ್ನೂ ಹೈಕೋರ್ಟ್‌ನಲ್ಲಿ ಬಾಕಿ ಉಳಿದಿದೆ ಮತ್ತು ಆ ನ್ಯಾಯಾಲಯವನ್ನೇ ಸಂಪರ್ಕಿಸುವಂತೆ ಇಡಿಗೆ ತಿಳಿಸಿದೆ.

'ಹೈಕೋರ್ಟ್ ಮಾಡಿದ ಅವಲೋಕನಗಳು ಮಧ್ಯಂತರ ಆದೇಶದಲ್ಲಿವೆ ಮತ್ತು ಈ ನ್ಯಾಯಾಲಯವು ಮಾಡಿದ ಯಾವುದೇ ಮೌಖಿಕ ವೀಕ್ಷಣೆಯು ಪ್ರಕರಣದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ' ಎಂದು ಜುಲೈ 4ರಂದು ವಿಚಾರಣೆಗೆ ಪಟ್ಟಿ ಮಾಡುವಾಗ ಪೀಠವು ಹೇಳಿದೆ.

ಆರಂಭದಲ್ಲಿ, ಇ.ಡಿ ಪರ ವಾದ ಮಂಡಿಸಿದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ಹೈಕೋರ್ಟ್ ಆದೇಶವು ತಪ್ಪು ನಿದರ್ಶನವನ್ನು ಹೊಂದಿಸುತ್ತದೆ ಎಂದು ಹೇಳಿದರು.

ತಮಿಳುನಾಡಿನ ಸಿಎಂ ಸ್ಟಾಲಿನ್ ನೇತೃತ್ವದ ಡಿಎಂಕೆ ಸರ್ಕಾರದ ಸಚಿವರಾಗಿರುವ ಸಚಿವ ವಿ ಸೆಂಥಿಲ್ ಬಾಲಾಜಿ ಅವರು ಜಯಲಲಿತಾ ಸಂಪುಟದಲ್ಲಿ ಸಚಿವರಾಗಿದ್ದ ಅವಧಿಯಲ್ಲಿ ಉದ್ಯೋಗಕ್ಕಾಗಿ ನಗದು ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೂನ್ 14ರಂದು ಜಾರಿ ನಿರ್ದೇಶನಾಲಯದ (ಇಡಿ) ಅಧಿಕಾರಿಗಳು ಅವರನ್ನು ಬಂಧಿಸಿದ್ದರು. 

ಅಕ್ರಮ ಬಂಧನ ಆರೋಪದಡಿ ಬಾಲಾಜಿ ಪತ್ನಿ ಹೇಬಿಯಸ್ ಕಾರ್ಪಸ್ ಅರ್ಜಿ ಸಲ್ಲಿಸಿದ ಹಿನ್ನೆಲೆಯಲ್ಲಿ ಹೈಕೋರ್ಟ್ ಮಧ್ಯಂತರ ಆದೇಶ ನೀಡಿದೆ.

SCROLL FOR NEXT