ದೇಶ

ಸಂಸತ್ ಬಿಕ್ಕಟ್ಟು: ರಾಜ್ಯಸಭೆ ಸಭಾಪತಿಯಿಂದ ಸದನದ ನಾಯಕರ ಸಭೆ 

Nagaraja AB

ನವ ದೆಹಲಿ: ಬಿಜೆಪಿ ಮತ್ತು ಪ್ರತಿಪಕ್ಷಗಳು ತಮ್ಮ ಪಟ್ಟು ಸಡಿಲಿಸದ ಹಿನ್ನೆಲೆಯಲ್ಲಿ ಸಂಸತ್ತಿನ ಉಭಯ ಸದನಗಳಲ್ಲಿ ಬಿಕ್ಕಟ್ಟು ಮುಂದುವರೆದಿದ್ದು, ಒಂದು ದಿನದ ವಿರಾಮದ ಬಳಿಕ ಇಂದು ಮತ್ತೆ ಸದನ ಸಮಾವೇಶಗೊಳ್ಳುತ್ತಿದೆ.ಬಿಕ್ಕಟ್ಟು ಪರಿಹರಿಸಲು ಸಮಾಲೋಚನೆ ಭಾಗವಾಗಿ ರಾಜ್ಯಸಭಾ ಸಭಾಪತಿ ಇಂದು ಬೆಳಗ್ಗೆ 10 ಗಂಟೆಗೆ ಮತ್ತೊಮ್ಮೆ ಸದನದ ನಾಯಕರ ಸಭೆ ಕರೆದಿದ್ದಾರೆ. 

ಸಂಸತ್ತಿನ ಸುಗಮ ಕಾರ್ಯನಿರ್ವಹಣೆಗೆ ಅವಕಾಶ ನೀಡಲು ಸರ್ಕಾರ ಗಮನ ಹರಿಸಿದರೆ, ತಮ್ಮ ವಿರುದ್ಧ ಬಿಜೆಪಿಯ ಆರೋಪಗಳಿಗೆ ಪ್ರತಿಕ್ರಿಯಿಸಲು ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಅವಕಾಶ ನೀಡಬೇಕು ಎಂದು ಕಾಂಗ್ರೆಸ್ ಮುಖಂಡ ಜೈರಾಮ್ ರಮೇಶ್ ಹೇಳಿದ್ದಾರೆ.

ಬ್ರಿಟನ್‌ನಲ್ಲಿ ರಾಹುಲ್ ಗಾಂಧಿ ಹೇಳಿಕೆಗೆ ಬಿಜೆಪಿ ಕ್ಷಮೆಯಾಚಿಸಲು ಒತ್ತಾಯಿಸಿರುವ ಹಿನ್ನೆಲೆಯಲ್ಲಿ ಪಕ್ಷದ ಮಾಜಿ ಮುಖ್ಯಸ್ಥರ ಬಗ್ಗೆ ಮಾನಹಾನಿಕರ ಹೇಳಿಕೆಗಳ ಕುರಿತು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರಿಗೆ ಕಾಂಗ್ರೆಸ್ ಸಂಸದ ಮಾಣಿಕ್ಕಂ ಠಾಗೋರ್ ಬುಧವಾರ ಪತ್ರ ಬರೆದಿದ್ದಾರೆ.

ಮಾರ್ಚ್ 13 ರಂದು ಲೋಕಸಭೆಯನ್ನುದ್ದೇಶಿಸಿ ಮಾತನಾಡಿದ ರಾಜನಾಥ್ ಸಿಂಗ್  ಯಾವುದೇ ಮುನ್ಸೂಚನೆ ನೀಡದೆ ರಾಹುಲ್ ಗಾಂಧಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದು, ಲೋಕಸಭೆಯ ನಿಯಮಗಳನ್ನು ಉಲ್ಲಂಘಿಸಿದ್ದಾರೆ. ಅವರ ವಿರುದ್ಧ ಕ್ರಮ ಕೈಗೊಳ್ಳಲು ಆದ್ಯತೆ ನೀಡಬೇಕು ಎಂದು ಅವರು ಒತ್ತಾಯಿಸಿದ್ದಾರೆ. 

SCROLL FOR NEXT