ದೇಶ

ರಾಹುಲ್ ಗಾಂಧಿ ಸತ್ಯ ಹೇಳಿದ್ದಕ್ಕೆ ಜೈಲು ಶಿಕ್ಷೆ; ತೀರ್ಪು ಪ್ರಶ್ನಿಸಿ ಮೇಲ್ಮನವಿ: ಕಾಂಗ್ರೆಸ್

Lingaraj Badiger

ನವದೆಹಲಿ: 2019ರ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಗುಜರಾತ್ ಕೋರ್ಟ್ ಎರಡು ವರ್ಷ ಜೈಲು ಶಿಕ್ಷೆ ವಿಧಿಸಿದ್ದು, ಈ ತೀರ್ಪು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಲಾಗುವುದು ಎಂದು ಕಾಂಗ್ರೆಸ್ ಗುರುವಾರ ಹೇಳಿದೆ.

ಸತ್ಯದ ಪರ ಧ್ವನಿ ಎತ್ತಿದ್ದಕ್ಕಾಗಿ ರಾಹುಲ್ ಗಾಂಧಿ ಅವರನ್ನು "ಶಿಕ್ಷಿಸಲಾಗುತ್ತಿದೆ" ಎಂದು ಆರೋಪಿಸಿದ ಕಾಂಗ್ರೆಸ್, ಕೇಂದ್ರ ಸರ್ಕಾರ ರಾಹುಲ್ ಗಾಂಧಿಯವರ ಧ್ವನಿಯನ್ನು ಹತ್ತಿಕ್ಕಲು ಪ್ರಯತ್ನಿಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದೆ.

ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಸೇರಿದಂತೆ ಹಲವು ಕಾಂಗ್ರೆಸ್ ನಾಯಕರು ಕೋರ್ಟ್ ತೀರ್ಪಿನ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಭಯಭೀತರಾಗಿರುವ ಅಧಿಕಾರ ಯಂತ್ರವು, 'ಸಾಮ್, ದಾಮ್, ದಂಡ್, ಭೇದ'(ಪುಸ್ತಕದಲ್ಲಿನ ಪ್ರತಿಯೊಂದು ತಂತ್ರ)ದ ಮೂಲಕ ರಾಹುಲ್ ಗಾಂಧಿಯವರ ಧ್ವನಿಯನ್ನು ಹತ್ತಿಕ್ಕಲು ಪ್ರಯತ್ನಿಸುತ್ತಿದೆ" ಎಂದು ಪ್ರಿಯಾಂಕಾ ಗಾಂಧಿ ಅವರು ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.

"ನನ್ನ ಸಹೋದರ ಎಂದಿಗೂ ಹೆದರುವುದಿಲ್ಲ, ಅವರು ಬದುಕಿರುವವರೆಗೂ ಸತ್ಯವನ್ನು ಮಾತನಾಡುತ್ತಾರೆ.  ದೇಶದ ಜನರ ಪರವಾಗಿ ಧ್ವನಿ ಎತ್ತುವುದನ್ನು ಮುಂದುವರಿಸುತ್ತಾರೆ" ಎಂದು ಪ್ರಿಯಾಂಕಾ ಗಾಂಧಿ ಹೇಳಿದ್ದಾರೆ.

ಇನ್ನು ಈ ಬಗ್ಗೆ ಮೇಲ್ಮನವಿ ಸಲ್ಲಿಸಲಾಗುವುದು ಎಂದು ಹೇಳಿರುವ ಖರ್ಗೆ ಅವರು, ಇತರರತ್ತ ಒಂದು ಬೆರಳನ್ನು ತೋರಿಸಿದರೆ, ಅವರತ್ತ ನಾಲ್ಕು ಬೆರಳುಗಳು ತೋರಿಸುತ್ತವೆ ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಈ ಬೆಳವಣಿಗೆಗೆ ಪ್ರತಿಕ್ರಿಯಿಸಿದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್, ಇದು ನವಭಾರತ, ಅನ್ಯಾಯದ ವಿರುದ್ಧ ಧ್ವನಿ ಎತ್ತಿದರೆ ಇಡಿ-ಸಿಬಿಐ, ಪೊಲೀಸ್, ಎಫ್‌ಐಆರ್ ದಾಖಲಿಸಲಾಗುತ್ತಿದೆ ಎಂದು ಟ್ವೀಟ್ ಮಾಡಿದ್ದಾರೆ.

ಸತ್ಯ ಮಾತನಾಡಿದ್ದಕ್ಕಾಗಿ, ಸರ್ವಾಧಿಕಾರಿ ವಿರುದ್ಧ ಧ್ವನಿ ಎತ್ತಿದ್ದಕ್ಕಾಗಿ ರಾಹುಲ್ ಗಾಂಧಿ ಅವರಿಗೂ ಶಿಕ್ಷೆಯಾಗುತ್ತಿದೆ ಎಂದು ಜೈರಾಮ್ ರಮೇಶ್ ಹೇಳಿದ್ದಾರೆ.

SCROLL FOR NEXT