ದೇಶ

ಅನಾರೋಗ್ಯದಿಂದ ಬಳಲುತ್ತಿದ್ದ ಪುಣೆ ಬಿಜೆಪಿ ಸಂಸದ ಗಿರೀಶ್ ಬಾಪಟ್ ನಿಧನ

Lingaraj Badiger

ಪುಣೆ: ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಪುಣೆ ಬಿಜೆಪಿ ಸಂಸದ ಗಿರೀಶ್ ಬಾಪಟ್ ಅವರು ಬುಧವಾರ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

72 ವರ್ಷದ ಗಿರೀಶ್ ಬಾಪಟ್ ಅವರು ಕಳೆದ ಒಂದೂವರೆ ವರ್ಷಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ದೀನನಾಥ್ ಮಂಗೇಶ್ಕರ್ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಿರೀಶ್ ಬಾಪಟ್ ಅವರು ಚಿಕಿತ್ಸೆ ಫಲಕಾರಿಯಾಗದೆ ಇಂದು ನಿಧನರಾಗಿದ್ದಾರೆ.

"ಇಂದು ದುಃಖದ ದಿನ. ಬಿಜೆಪಿಯ ಹಿರಿಯ ನಾಯಕ ಮತ್ತು ಪುಣೆ ಲೋಕಸಭಾ ಸದಸ್ಯ ಗಿರೀಶ್ ಬಾಪಟ್ ಅವರು ನಮ್ಮನ್ನು ಅಗಲಿದ್ದಾರೆ. ಅವರು ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಕಳೆದ ಒಂದೂವರೆ ವರ್ಷಗಳಿಂದ ಅವರು ಚಿಕಿತ್ಸೆ ಪಡೆಯುತ್ತಿದ್ದರು" ಎಂದು ಬಿಜೆಪಿ ನಗರ ಘಟಕದ ಅಧ್ಯಕ್ಷ ಜಗದೀಶ್ ಮುಲಿಕ್ ಅವರು ಸಂತಾಪ ಸೂಚಿಸಿದ್ದಾರೆ.

ಬುಧವಾರ ಸಂಜೆ ವೈಕುಂಠ ಚಿತಾಗಾರದಲ್ಲಿ ಬಾಪಟ್ ಅವರ ಅಂತ್ಯಕ್ರಿಯೆ ನಡೆಯಲಿದೆ ಎಂದು ಅವರು ಹೇಳಿದ್ದಾರೆ.

ಬಾಪಟ್ ಅವರು ಕಸ್ಬಾ ಪೇಠ ಕ್ಷೇತ್ರದಿಂದ ಐದು ಬಾರಿ ಶಾಸಕರಾಗಿ ಸೇವೆ ಸಲ್ಲಿಸಿದ್ದರು.

ಬಾಪಟ್ ನಿಧನಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ನರೇಂದ್ರ ಮೋದಿ ಹಾಗೂ ಎನ್ ಸಿಪಿ ಮುಖ್ಯಸ್ಥ ಶರದ್ ಪವಾರ್ ಸೇರಿದಂತೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.

SCROLL FOR NEXT