ರಾಜಸ್ಥಾನ: ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮಿತ್ ಶಾ ಅವರ ಜೋಡಿ ನಾಯಕತ್ವದಡಿ ದೇಶದಲ್ಲಿ ಭದ್ರವಾಗಿ ನೆಲೆಯೂರಿರುವ ಬಿಜೆಪಿಯನ್ನು ಯಾವಾಗ ಸೋಲಿಸಬಹುದು ಎಂಬುದನ್ನು ರಾಜಸ್ಥಾನದ ಮಾಜಿ ಉಪಮುಖ್ಯಮಂತ್ರಿ ಸಚಿನ್ ಪೈಲಟ್ ಹೇಳಿದ್ದಾರೆ.
ರಾಜ್ಯಗಳಲ್ಲಿ ಬಿಜೆಪಿಯನ್ನು ಸೋಲಿಸಿದಾಗ ಮಾತ್ರ ರಾಷ್ಟ್ರಮಟ್ಟದಲ್ಲಿ ಆ ಪಕ್ಷವನ್ನು ಸೋಲಿಸಲು ಸಾಧ್ಯ ಎಂದಿರುವ ಕಾಂಗ್ರೆಸ್ ಹಿರಿಯ ನಾಯಕ ಪೈಲಟ್, ಇದನ್ನು ಸಾಧಿಸಲು "ಎಲ್ಲರೂ" ಒಟ್ಟಾಗಿ ಕೆಲಸ ಮಾಡಬೇಕೆಂದು ಕರೆ ನೀಡಿದ್ದಾರೆ.
"ವಿವಿಧ ರಾಜ್ಯಗಳಲ್ಲಿ ಬಿಜೆಪಿಯನ್ನು ಸೋಲಿಸುವುದು ಅಗತ್ಯವಾಗಿದೆ. ನಾವು ರಾಜ್ಯಗಳಲ್ಲಿ ಬಿಜೆಪಿಯನ್ನು ಸೋಲಿಸಿದಾಗ ಮಾತ್ರ ನಾವು ರಾಷ್ಟ್ರ ಮಟ್ಟದಲ್ಲಿ ಬಿಜೆಪಿಯನ್ನು ಸೋಲಿಸಬಹುದು. ಅದಕ್ಕಾಗಿಯೇ ಎಲ್ಲರೂ ಒಟ್ಟಾಗಿ ಕೆಲಸ ಮಾಡಬೇಕಾಗಿದೆ" ಎಂದು ಅವರು ಹೇಳಿದ್ದಾರೆ.
ಇದನ್ನೂ ಓದಿ: 2024ರ ಹಾದಿ: ಪ್ರತಿಪಕ್ಷಗಳನ್ನು ಒಗ್ಗೂಡಿಸುವ ಯತ್ನದಲ್ಲಿ ನಿತೀಶ್; ಶೀಘ್ರದಲ್ಲೇ ಪಟ್ನಾಯಕ್, ಕೆಸಿಆರ್ ಭೇಟಿ
ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಗೆದ್ದು ರಾಜ್ಯದಲ್ಲಿ ಸರ್ಕಾರ ರಚಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿರುವ ಪೈಲಟ್, ರಾಜಸ್ಥಾನ, ಮಧ್ಯಪ್ರದೇಶ ಮತ್ತು ತೆಲಂಗಾಣದಲ್ಲಿ ಮುಂದಿನ ವಿಧಾನಸಭಾ ಚುನಾವಣೆಗಳು ನಡೆಯಲಿದ್ದು, ಕೆಲವೇ ತಿಂಗಳುಗಳಲ್ಲಿ ಈ ರಾಜ್ಯಗಳಲ್ಲಿ ರಾಜಕೀಯ ಸಭೆಗಳು ಪ್ರಾರಂಭವಾಗಲಿವೆ ಎಂದು ತಿಳಿಸಿದ್ದಾರೆ.
ಚುನಾವಣಾ ಪ್ರಚಾರದ ವೇಳೆ ಪರಸ್ಪರ ಸೌಹಾರ್ದತೆ, ಸಹೋದರತ್ವ ಕಾಪಾಡಬೇಕು ಎಂದು ಅವರು ಮನವಿ ಮಾಡಿದ್ದಾರೆ.