ದೇಶ

ಪಟಾಕಿ ಕಾರ್ಖಾನೆ ಸ್ಫೋಟದಲ್ಲಿ 9 ಮಂದಿ ಸಾವು: ಪಶ್ಚಿಮ ಬಂಗಾಳ ಸರ್ಕಾರಕ್ಕೆ NHRC ನೋಟಿಸ್

Lingaraj Badiger

ಕೋಲ್ಕತ್ತಾ: ಅಕ್ರಮ ಪಟಾಕಿ ಕಾರ್ಖಾನೆಯೊಂದರಲ್ಲಿ ಸಂಭವಿಸಿದ ಸ್ಫೋಟದಲ್ಲಿ ಒಂಬತ್ತು ಜನ ಸಾವನ್ನಪ್ಪಿದ ಮತ್ತು ಹಲವರು ಗಾಯಗೊಂಡ ಘಟನೆಯ ಬಗ್ಗೆ ವಿವರವಾದ ವರದಿ ನೀಡುವಂತೆ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ(ಎನ್‌ಎಚ್‌ಆರ್‌ಸಿ) ಪಶ್ಚಿಮ ಬಂಗಾಳ ಸರ್ಕಾರಕ್ಕೆ ಶುಕ್ರವಾರ ನೋಟಿಸ್ ನೀಡಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮೇ 16 ರಂದು ಪುರ್ಬಾ ಮೇದಿನಿಪುರ ಜಿಲ್ಲೆಯ ಎಗ್ರಾದಲ್ಲಿ ಅಕ್ರಮ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿತ್ತು.

ಸರ್ಕಾರದ ನಿರ್ಲಕ್ಷ್ಯದಿಂದಾಗಿ ಈ ಸ್ಫೋಟ ಸಂಭವಿಸಿದ್ದರೆ, ಸಂತ್ರಸ್ತರ ಮಾನವ ಹಕ್ಕುಗಳ ಉಲ್ಲಂಘನೆಯಾಗುತ್ತಿದೆ ಎಂದು ಎನ್‌ಎಚ್‌ಆರ್‌ಸಿ ಅಧಿಕಾರಿ ಪಿಟಿಐಗೆ ತಿಳಿಸಿದ್ದಾರೆ.

ನಾಲ್ಕು ವಾರಗಳಲ್ಲಿ ಈ ವಿಷಯದ ಬಗ್ಗೆ ವಿವರವಾದ ವರದಿಯನ್ನು ಕೋರಿ ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ ಎಚ್‌ಕೆ ದ್ವಿವೇದಿ ಮತ್ತು ಪೊಲೀಸ್ ಮಹಾನಿರ್ದೇಶಕ ಮನೋಜ್ ಮಾಳವಿಯಾ ಅವರಿಗೆ ನೋಟಿಸ್ ಕಳುಹಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ದುರಂತಕ್ಕೆ ಕಾರಣರಾದ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗಿದೆಯೇ?, ಮೃತಪಟ್ಟವರು ಮತ್ತು ಗಾಯಗೊಂಡವರ ಕುಟುಂಬ ಸದಸ್ಯರಿಗೆ ಎಷ್ಟು ಪರಿಹಾರ ನೀಡಲಾಗಿದೆ ಎಂಬುದರ ಕುರಿತು ವರದಿ ನೀಡುವಂತೆ ಪಶ್ಚಿಮ ಬಂಗಾಳ ಸರ್ಕಾರಕ್ಕೆ ಸೂಚಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

SCROLL FOR NEXT