ದೇಶ

ಕರ್ನಾಟಕ ಗೆಲುವಿನ ನಂತರ ಇತರ ರಾಜ್ಯಗಳ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಸಜ್ಜು

Lingaraj Badiger

ನವದೆಹಲಿ: ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿದ ನಂತರ ಕಾಂಗ್ರೆಸ್ ಈಗ ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸ್‌ಗಢ, ಮಿಜೋರಾಂ ಮತ್ತು ತೆಲಂಗಾಣ ವಿಧಾನಸಭೆ ಚುನಾವಣೆಗೆ ತಯಾರಿ ಆರಂಭಿಸಿದೆ.

ಮುಂಬರುವ ವಿಧಾನಸಭೆ ಚುನಾವಣೆಗೆ ಕಾರ್ಯತಂತ್ರ ರೂಪಿಸಲು ಕಾಂಗ್ರೆಸ್ ಮೇ 26 ರಂದು ಪಕ್ಷದ ಮುಖಂಡರ ಸಭೆ ಕರೆದಿದೆ ಎಂದು ಮೂಲಗಳು ಸೋಮವಾರ ತಿಳಿಸಿವೆ.

ಮುಂದಿನ ಕೆಲವೇ ತಿಂಗಳಲ್ಲಿ ವಿಧಾನಸಭೆ ಚುನಾವಣೆ ಎದುರಿಸಲಿರುವ ರಾಜ್ಯಗಳಲ್ಲಿ ಪಕ್ಷ ಗೆಲುವು ಸಾಧಿಸಲು ಎಲ್ಲಾ ಸಿದ್ಧತೆಗಳನ್ನು ನಡೆಸಿದ್ದು, ರಾಷ್ಟ್ರ ರಾಜಧಾನಿಯಲ್ಲಿ ರಾಜ್ಯ ಘಟಕದ ಮುಖ್ಯಸ್ಥರು, ಪಕ್ಷದ ರಾಜ್ಯ ಉಸ್ತುವಾರಿಗಳು ಮತ್ತು ರಾಜ್ಯದ ಪ್ರಮುಖ ನಾಯಕರೊಂದಿಗೆ ಸಭೆ ಕರೆಯಲಾಗಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಪಕ್ಷದ ಪ್ರಧಾನ ಕಾರ್ಯದರ್ಶಿ(ಸಂಘಟನೆ) ಕೆಸಿ ವೇಣುಗೋಪಾಲ್ ಅಧ್ಯಕ್ಷತೆಯಲ್ಲಿ ಐದು ರಾಜ್ಯಗಳಲ್ಲಿ ಪಕ್ಷದ ಸಿದ್ಧತೆಯ ಒಟ್ಟಾರೆ ಗ್ರೌಂಡ್ ರಿಪೋರ್ಟ್ ಸಂಗ್ರಹಿಸಲು ಸಭೆ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ.

ಪಕ್ಷದ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ, ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಸೇರಿದಂತೆ ಇತರ ಹಿರಿಯ ನಾಯಕರು ಸಭೆಯಲ್ಲಿ ಭಾಗವಹಿಸಲಿದ್ದಾರೆ. ಆದರೆ, ಸಭೆಯ ಸಮಯ ಇನ್ನೂ ನಿರ್ಧಾರವಾಗಿಲ್ಲ.

ಸಭೆಯಲ್ಲಿ ಪಕ್ಷದ ನಾಯಕ ಸಚಿನ್ ಪೈಲಟ್ ಅವರು ಅಶೋಕ್ ಗೆಹ್ಲೋಟ್ ನೇತೃತ್ವದ ಕಾಂಗ್ರೆಸ್ ಸರ್ಕಾರವನ್ನು ಟೀಕಿಸಿರುವ ರಾಜಸ್ಥಾನದ ಪರಿಸ್ಥಿತಿಯ ಬಗ್ಗೆಯೂ ಉನ್ನತ ನಾಯಕರು ಚರ್ಚಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

SCROLL FOR NEXT