ನ.19 ಅಥವಾ 26 ರಂದು ಆರ್‌ಎಸ್‌ಎಸ್ ಪಥ ಸಂಚಲನಕ್ಕೆ ಅವಕಾಶ ನೀಡಿ: ತಮಿಳುನಾಡು ಸರ್ಕಾರಕ್ಕೆ 'ಸುಪ್ರೀಂ' ಸೂಚನೆ
ನವೆಂಬರ್ 19 ಅಥವಾ 26 ರಂದು ರಾಜ್ಯದಾದ್ಯಂತ ವಿವಿಧ ಜಿಲ್ಲೆಗಳಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಪಥ ಸಂಚಲನ ನಡೆಸಲು ಅನುಮತಿ ನೀಡುವ ಕುರಿತು ಪರಿಗಣಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ ತಮಿಳುನಾಡು ಸರ್ಕಾರಕ್ಕೆ ಸೂಚಿಸಿದೆ.
ನವದೆಹಲಿ: ನವೆಂಬರ್ 19 ಅಥವಾ 26 ರಂದು ರಾಜ್ಯದಾದ್ಯಂತ ವಿವಿಧ ಜಿಲ್ಲೆಗಳಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಪಥ ಸಂಚಲನ ನಡೆಸಲು ಅನುಮತಿ ನೀಡುವ ಕುರಿತು ಪರಿಗಣಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ ತಮಿಳುನಾಡು ಸರ್ಕಾರಕ್ಕೆ ಸೂಚಿಸಿದೆ.
ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು ನ್ಯಾಯಮೂರ್ತಿ ದೀಪಂಕರ್ ದತ್ತ ಅವರ ಪೀಠ, ನವೆಂಬರ್ 15 ರೊಳಗೆ ಆರ್‌ಎಸ್‌ಎಸ್ ಪ್ರಸ್ತಾಪಿಸುವ ಪಥ ಸಂಚಲನ ನಡೆಸುವ ಮಾರ್ಗಗಳ ಬಗ್ಗೆ ನಿರ್ಧರಿಸುವಂತೆ ತಮಿಳುನಾಡಿಗೆ ಸೂಚಿಸಿದೆ.
ಆರ್‌ಎಸ್‌ಎಸ್ ಪಥ ಸಂಚಲನಕ್ಕೆ ಅನುಮತಿ ನೀಡುವಂತೆ ಮದ್ರಾಸ್ ಹೈಕೋರ್ಟ್ ನೀಡಿದ್ದ ಎರಡು ಆದೇಶಗಳ ವಿರುದ್ಧ ತಮಿಳುನಾಡು ಸರ್ಕಾರ ಸಲ್ಲಿಸಿದ್ದ ಅರ್ಜಿಗಳ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಈ ಆದೇಶ ನೀಡಿದೆ.
ವಿಚಾರಣೆಯ ಸಂದರ್ಭದಲ್ಲಿ, ರಾಜ್ಯ ಸರ್ಕಾರದ ಪರ ವಾದ ಮಂಡಿಸಿದ ಹಿರಿಯ ವಕೀಲ ಕಪಿಲ್ ಸಿಬಲ್, ಅಕ್ಟೋಬರ್ 22 ಮತ್ತು 29 ರಂದು ಆರ್‌ಎಸ್‌ಎಸ್ ಪಥ ಸಂಚಲನಕ್ಕೆ ಪ್ರಸ್ತಾಪಿಸಿದ್ದ ಈ ಹಿಂದಿನ ಮಾರ್ಗಗಳಲ್ಲಿ ಹಲವಾರು ಮಸೀದಿಗಳಿವೆ ಮತ್ತು ಘರ್ಷಣೆಯ ಆತಂಕ ಇದೆ ಎಂದು ಹೇಳಿದರು.
ರಾಜ್ಯದ ಹೆಚ್ಚುವರಿ ಅಡ್ವೊಕೇಟ್ ಜನರಲ್ ಅಮಿತ್ ಆನಂದ್ ತಿವಾರಿ ಅವರೊಂದಿಗೆ ಹಾಜರಾದ ಸಿಬಲ್, "ಯಾವುದೇ ಘರ್ಷಣೆಗಳು ನಡೆಯುವುದು ನಮಗೆ ಇಷ್ಟ ಇಲ್ಲ. ಅವರು ಬೇರೆ ಯಾವುದೇ ದಿನಾಂಕಗಳನ್ನು ನೀಡಿದರೂ ನಾವು ಅವರಿಗೆ ಅನುಮತಿ ನೀಡಲು ಸಿದ್ಧರಿದ್ದೇವೆ" ಎಂದು ಹೇಳಿದರು.
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.